ADVERTISEMENT

ಚಿಕ್ಕಮಗಳೂರು | ₹4,886 ದರದಲ್ಲಿ ರಾಗಿ ಖರೀದಿ: ಶಾಸಕ ತಮ್ಮಯ್ಯ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 3:12 IST
Last Updated 17 ಫೆಬ್ರುವರಿ 2026, 3:12 IST
ಎಪಿಎಂಸಿ ಆವರಣದಲ್ಲಿ ರಾಗಿ ಖರೀದಿ ಕೇಂದ್ರವನ್ನು ಶಾಸಕ ಎಚ್.ಡಿ.ತಮ್ಮಯ್ಯ ಉದ್ಘಾಟಿಸಿದರು
ಎಪಿಎಂಸಿ ಆವರಣದಲ್ಲಿ ರಾಗಿ ಖರೀದಿ ಕೇಂದ್ರವನ್ನು ಶಾಸಕ ಎಚ್.ಡಿ.ತಮ್ಮಯ್ಯ ಉದ್ಘಾಟಿಸಿದರು   

ಚಿಕ್ಕಮಗಳೂರು: ರಾಗಿಯನ್ನು ಮಾರುಕಟ್ಟೆ ಬೆಲೆಗಿಂತ ಹೆಚ್ಚು ದರ ನೀಡಿ ಬೆಂಬಲ ಬೆಲೆಗೆ ಖರೀದಿಸಿದಾಗ ರೈತರಿಗೆ ಆರ್ಥಿಕ ಭದ್ರತೆ ಸಿಗುತ್ತದೆ ಎಂಬುದನ್ನು ಸರ್ಕಾರ ಮನಗಂಡಿದ್ದು, ಪ್ರತಿ ಕ್ವಿಂಟಾಲ್ ರಾಗಿಗೆ ₹4,886 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ತಿಳಿಸಿದರು.

ಎಪಿಎಂಸಿ ಆವರಣದಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಸೋಮವಾರ ಏರ್ಪಡಿಸಿದ್ದ 2025–26ನೇ ಸಾಲಿನ ರಾಗಿ ಖರೀದಿ ಕೇಂದ್ರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ವರ್ಷ ಪ್ರತಿ ಕ್ವಿಂಟಾಲ್‌ಗೆ ₹4,226 ದರದಲ್ಲಿ ರಾಗಿ ಖರೀದಿಸಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ಸರ್ಕಾರ ಶಾಸಕರ ಮೂಲಕ ಮನವಿ ಸಲ್ಲಿಸಲು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಹೆಚ್ಚು ಮಾಡಬೇಕೆಂಬ ರೈತರ ಮನವಿ ಮೇರೆಗೆ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿ ಬೆಲೆ ನಿಗದಿಯಾಗಿದೆ ಎಂದರು.

ADVERTISEMENT

ರೈತರ ಹಿತದೃಷ್ಟಿಯಿಂದ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕೆಂಬ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಇದರಿಂದ ಜಿಲ್ಲೆಯ ರಾಗಿ ಬೆಳೆಗಾರರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಕಳೆದ ಬಾರಿ 1,998 ಮಂದಿ ರೈತರು ನೋಂದಣಿ ಮಾಡಿಕೊಂಡಿದ್ದು, 15,957 ಕ್ವಿಂಟಾಲ್ ರಾಗಿ ಖರೀದಿಸಲಾಗಿತ್ತು. ಈ ಬಾರಿ 2025–26ನೇ ಸಾಲಿಗೆ 1,106 ರೈತರು ನೋಂದಾಯಿಸಿಕೊಂಡಿದ್ದು, ಸುಮಾರು 26 ಸಾವಿರ ಕ್ವಿಂಟಾಲ್ ರಾಗಿಯನ್ನು ಬೆಂಬಲ ಬೆಲೆಯಡಿ ಖರೀದಿಸುವ ಗುರಿ ಹೊಂದಲಾಗಿದೆ ಎಂದರು.

ರಾಜ್ಯದಲ್ಲಿ ರಾಗಿ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಿದ್ದು, ಇದು ಮುಖ್ಯ ಆಹಾರ ಪದ್ಧತಿಯೂ ಆಗಿದೆ. ಗ್ರಾಹಕರು ಉತ್ತಮ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ರಾಗಿಯನ್ನು ಖರೀದಿಸುತ್ತಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಹೆಚ್ಚಿನ ಮಹತ್ವ ನೀಡಿದೆ ಎಂದು ಹೇಳಿದರು.

ಕಡಿಮೆ ನೀರನ್ನು ಬಳಸಿ ರಾಗಿ ಬೆಳೆಯಬಹುದಾಗಿದ್ದು, ಅತ್ಯಾಧುನಿಕ ಉಪಕರಣಗಳು ಮಾರುಕಟ್ಟೆಯಲ್ಲಿ ಲಭ್ಯ ಇರುವುದರಿಂದ ಸುಲಭವಾಗಿ ಕೃಷಿ ನಿರ್ವಹಣೆ ಮಾಡಬಹುದಾಗಿದೆ. ತೋಟಗಾರಿಕೆ ಬೆಳೆಗಳಿಗೆ ಹೋಲಿಸಿದರೆ ರಾಗಿ ಉತ್ತಮ ಲಾಭ ನೀಡಲಿದೆ. ದೇಶದ ಶೇ 70ರಷ್ಟು ಕೃಷಿಯನ್ನು ನಂಬಿರುವ ರೈತರಿಗೆ ಅನುಕೂಲವಾಗಲಿದೆ ಎಂಬುದನ್ನು ಸರ್ಕಾರ ಮನಗಂಡು ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸಲು ನಿರ್ಧರಿಸಿದೆ ಎಂದರು.

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕ ಯೋಗಾನಂದ್ ಪ್ರಾಸ್ತಾವಿಕವಾಗಿ ಮಾತನಾಡಿ, ‘2025–26ನೇ ಸಾಲಿನಲ್ಲಿ ಸರ್ಕಾರದ ಕನಿಷ್ಠ ಬೆಂಬಲ ಬೆಲೆಯಡಿ ರಾಗಿ ಖರೀದಿಸಲು ತೀರ್ಮಾನಿಸಲಾಗಿದೆ. ರಾಗಿ, ಭತ್ತ, ಸಾಮೆ, ನವಣೆ ಮುಂತಾದವುಗಳನ್ನು ಖರೀದಿಸಲು ಕರ್ನಾಟಕ ರಾಜ್ಯ ಆಹಾರ ನಿಗಮ ರಾಜ್ಯ ಮಟ್ಟದ ನೋಡಲ್ ಏಜೆನ್ಸಿಯಾಗಿದೆ’ ಎಂದು ಹೇಳಿದರು.

ಜಿಲ್ಲೆಯಲ್ಲಿ ರಾಗಿಗೆ ಮಾತ್ರ ನೋಂದಣಿಯಾಗಿದ್ದು, ಉಳಿದ ಬೆಳೆಗಳು ಅಲ್ಪ ಪ್ರಮಾಣದಲ್ಲಿ ಮಾತ್ರ ಇರುವುದರಿಂದ ಖರೀದಿಸುತ್ತಿಲ್ಲ. ಪ್ರಸಕ್ತ ವರ್ಷ ರಾಗಿಗೆ ಕನಿಷ್ಠ ಬೆಂಬಲ ಬೆಲೆ ಪ್ರತಿ ನಿಗದಿಯಾಗಿರುವ ಬೆನ್ನಲ್ಲೇ ಇಂದಿನಿಂದಲೇ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಪ್ರತಿದಿನ 25 ಜನ ರೈತರಿಂದ 750 ಕ್ವಿಂಟಾಲ್ ರಾಗಿ ಖರೀದಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ತಿರುಮಲೇಶ್, ಎಪಿಎಂಸಿ ಕಾರ್ಯದರ್ಶಿ ಗೋಪಾಲ್ ವೈದ್ಯ, ಸಹಾಯಕ ನಿರ್ದೇಶಕ ಅಭಿನಂದನ್, ಅನುರಾಧ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.