ಚಿಕ್ಕಮಗಳೂರು: ಬಾಲಕಿಯರ ಮೇಲೆ ಅತ್ಯಾಚಾರ ಎಸಗಿರುವ ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ದಲಿತ ಮತ್ತು ಕನ್ನಡಪರ ಸಂಘಟನೆಗಳ ಮುಖಂಡರು ಆಜಾದ್ ಪಾರ್ಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಬಳಿಕ ಮಾತನಾಡಿದ ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ, ‘ಕೊಪ್ಪಳ ಜಿಲ್ಲೆಯಲ್ಲಿ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಅತ್ಯಾಚಾರ ಪ್ರಕರಣಗಳು ರಾಜ್ಯದಲ್ಲಿ ಕಡಿವಾಣವಾಗುತ್ತಿಲ್ಲ. ಧರ್ಮಸ್ಥಳದ ಸೌಜನ್ಯ ಪ್ರಕರಣದ ಚಳಿವಳಿಯಂತೆ ದೊಡ್ಡ ಮಟ್ಟದಲ್ಲಿ ಆರಂಭಿಸುವ ಅಗತ್ಯವಿದೆ. ಅಮಾಯಕ ಬಾಲಕಿಯರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಅತ್ಯಾಚಾರಿ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು. ನ್ಯಾಯಾಂಗ ವ್ಯವಸ್ಥೆಯಡಿ ಶಿಕ್ಷಿಸಲು ಸರ್ವರು ಒಂದಾಗಬೇಕಿದೆ. ಚಳುವಳಿ ಒಂದು ದಿನಕ್ಕೆ ಸೀಮಿತಗೊಳಿಸಬಾರದು. ನಿರಂತರವಾಗಿ ಹೋರಾಟ ನಡೆಸಿ ಸರ್ಕಾರದ ಕಣ್ತೆರೆಸಬೇಕು. ಮುಂದಿನ ದಿನಗಳಲ್ಲಿ ಅತ್ಯಾಚಾರಿಗಳು ಈ ರೀತಿಯ ಕೃತ್ಯಕ್ಕೆ ಕೈ ಹಾಕದಂತೆ ಕಾನೂನು ರೂಪಿಸಬೇಕು ಎಂದರು.
ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್‌ಕುಮಾರ್ ಮಾತನಾಡಿ, ‘ಕೊಪ್ಪಳದ ಬಾಲಕಿಯ ಪಾಲಕರು ಮನೆಯಲ್ಲಿ ಇಲ್ಲದ ವೇಳೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಮಾರಾಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಕೊಪ್ಪ ತಾಲ್ಲೂಕಿನ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ಸಾಕಷ್ಟು ಅನುಮಾನ ಮೂಡಿಸಿದೆ. ಆದ್ದರಿಂದ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು’ ಎಂದು ಒತ್ತಾಯಿಸಿದರು.
ಕನ್ನಡ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಸಿ.ರಾಜೇಗೌಡ ಮಾತನಾಡಿ, ‘ರಾಜ್ಯದಲ್ಲಿ ಪುಟ್ಟ ಬಾಲಕಿಯರ ಮೇಲೆ ಅತ್ಯಾಚಾರಗಳು ನಡೆಯುತ್ತಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿರುವುದು ಸರಿಯಲ್ಲ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸಬೇಕು’ ಎಂದು ಮನವಿ ಮಾಡಿದರು.
ಎಸ್ಸಿ–ಎಸ್ಟಿ ದೌರ್ಜನ್ಯ ತಡೆ ಸಮಿತಿ ಸದಸ್ಯ ಲಕ್ಷ್ಮಣ್, ರಮೇಶ್, ಭೀಮ್ ಆರ್ಮಿ ಗೌರವಾಧ್ಯಕ್ಷ ಹೊನ್ನೇಶ್, ಕನ್ನಡಸೇನೆ ಆಟೊ ಘಟಕದ ಅಧ್ಯಕ್ಷ ಜಯಪ್ರಕಾಶ್, ಕುರುವಂಗಿ ವೆಂಕಟೇಶ್, ಎಚ್.ಪಿ.ಮಂಜೇಗೌಡ, ಹಂಪಯ್ಯ, ಶಂಕರೇಗೌಡ, ಅನ್ವರ್, ರವಿ, ಹರೀಶ್ ಮಿತ್ರ, ಭಾರತಿ, ರತ್ನ, ಸುಂದರಗೌಡ, ಹೇಮಂತ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.