ADVERTISEMENT

ಕೋಮು ಸಾಮರಸ್ಯ ಕದಡಿದರೆ ನಿರ್ದಾಕ್ಷಿಣ್ಯ ಕ್ರಮ: ಜಿತೇಂದ್ರಕುಮಾರ್ ದಯಾಮಾ

​ಪ್ರಜಾವಾಣಿ ವಾರ್ತೆ
Published 23 ಜನವರಿ 2026, 4:16 IST
Last Updated 23 ಜನವರಿ 2026, 4:16 IST
<div class="paragraphs"><p>ಜಿತೇಂದ್ರಕುಮಾರ್ ದಯಾಮಾ</p></div>

ಜಿತೇಂದ್ರಕುಮಾರ್ ದಯಾಮಾ

   

ಚಿಕ್ಕಮಗಳೂರು: ‘ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕಾಪಾಡುವುದು ನಮ್ಮ ಮೊದಲ ಆದ್ಯತೆ. ಯಾರೇ ಸಾಮರಸ್ಯ ಕದಡಿದರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರಕುಮಾರ್ ದಯಾಮಾ ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೋಮು ಸಾಮರಸ್ಯ ಕಾಪಾಡುವುದು ಕೇವಲ ಪೊಲೀಸ್ ಇಲಾಖೆ ಜವಾಬ್ದಾರಿ ಅಲ್ಲ. ಎಲ್ಲರ ಹೊಣೆಗಾರಿಕೆ’ ಎಂದರು.

ADVERTISEMENT

ಮಾಹಿತಿ ತಂತ್ರಜ್ಞಾನದ ಜತೆಗೆ ಕೃತಕ ಬುದ್ಧಿಮತ್ತೆ ಆಧರಿಸಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಣ್ಗಾವಲು ಇರಿಸಲಾಗುವುದು. ನೈತಿಕ ಪೊಲೀಸ್‌ ಗಿರಿ ಮತ್ತು ದ್ವೇಷ ಭಾಷಣ ಮಾಡುವುದನ್ನು ಸಹಿಸುವುದಿಲ್ಲ. ಮುಲಾಜಿಲ್ಲದೆ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ಪ್ರಕರಣಗಳ ನಿಯಂತ್ರಣ ಹಾಗೂ ಸಂಚಾರ ದಟ್ಟಣೆ ನಿರ್ವಹಣೆಗೂ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

‘ಅಪರಾಧ ಪ್ರಕರಣ ನಿಯಂತ್ರಣ ಸಂಬಂಧ ಜಿಲ್ಲೆಯ ಎಲ್ಲ ಠಾಣೆಗಳಿಗೆ ಸೂಚನೆ ನೀಡಲಾಗಿದೆ. ಅದರಲ್ಲೂ ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಪಟ್ಟ ಯಾವುದೇ ಪ್ರಕರಣಗಳು ದಾಖಲಾದರೂ ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಈ ವಿಚಾರದಲ್ಲಿ ವಿಳಂಬ ಮಾಡದಂತೆ ತಿಳಿಸಲಾಗಿದೆ’ ಎಂದರು.

ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣ ಕುರಿತು ಜಿಲ್ಲಾಡಳಿತ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸಿಬ್ಬಂದಿ ಜತೆ ಸಮಾಲೋಚನೆ ನಡೆಸಿ ಕ್ರಮ ಜರುಗಿಸಲಾಗುವುದು ಎಂದು ವಿವರಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.