
ಚಿಕ್ಕಮಗಳೂರು: ಅತಿ ಹಿಂದುಳಿದ ಅರಣ್ಯಾಧಾರಿತ ಬುಡಕಟ್ಟು ಸಮುದಾಯದವರಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಫೆ. 21 ಹಾಗೂ 22ರಂದು ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ಆಟದ ಮೈದಾನದಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಅವರು, ‘ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಭಾಗಿತ್ವದಲ್ಲಿ ನಡೆಯುವ ಈ ಕ್ರೀಡಾಕೂಟವು ಫೆ. 21ರಂದು ಬೆಳಿಗ್ಗೆ 10ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದರು.
ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಗಳ ವಿಭಾಗದಲ್ಲಿ ವಿವಿಧ ಓಟದ ಸ್ಪರ್ಧೆಗಳು, ಉದ್ದ ಜಿಗಿತ, ಎತ್ತರ ಜಿಗಿತ, ಜಾವೆಲಿನ್ ಎಸೆತ, ಗುಂಡು ಎಸೆತ, ನಡಿಗೆ- ಹೀಗೆ ವೈವಿಧ್ಯಮಯ ಸ್ಪರ್ಧೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.
ಪುರುಷರು ಹಾಗೂ ಮಹಿಳೆಯರ ವಿಭಾಗಕ್ಕೆ ಪ್ರತ್ಯೇಕವಾಗಿ ವಾಲಿಬಾಲ್, ಕಬಡ್ಡಿ, ಹಗ್ಗಜಗ್ಗಾಟ, ಲಗೋರಿ, ಪುರುಷರು ಹಾಗೂ ಮಹಿಳೆಯರಿಗೆ ಜಾನಪದ ಗೀತೆ, ಜಾನಪದ ನೃತ್ಯಗಳು ಗುಂಪು ಸ್ಪರ್ಧೆ ಆಯೋಜಿಸಲಾಗುವುದು. ವೈಯಕ್ತಿಕ ವಿಭಾಗದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಹಾಗೂ ಪುರುಷರಿಗೆ ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಸ್ಪರ್ಧಿಗಳಿಗೆ ಊಟದ ವ್ಯವಸ್ಥೆ, ಪ್ರಯಾಣದ ವ್ಯವಸ್ಥೆ, ವಸತಿ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಮಾತನಾಡಿ, ‘ಈ ಕ್ರೀಡಾಕೂಟವನ್ನು ಮಲೆಕುಡಿಯರು, ಹಸಲರು, ಗೌಡಲು, ಹಕ್ಕಿಪಿಕ್ಕಿ ಹಾಗೂ ಡೋಂಗ್ರಿ ಗೆರಾಸಿಯಾ ಪಂಗಡಗಳಿಗೆ ಮಾತ್ರ ಆಯೋಜಿಸಲಾಗುತ್ತಿದೆ’ ಎಂದು ತಿಳಿಸಿದರು.
ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕಿ ಮಂಜುಳಾ ಹುಲ್ಲಹಳ್ಳಿ ಮಾತನಾಡಿ, ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಬುಡಕಟ್ಟು ಸಮುದಾಯಗಳ ಕ್ರೀಡಾಪಟುಗಳು ನೋಂದಣಿ ಸಂದರ್ಭದಲ್ಲಿ ಕಡ್ಡಾಯವಾಗಿ ಆಧಾರ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರದ ಪ್ರತಿಗಳನ್ನು ಸಲ್ಲಿಸಬೇಕು. ಮೂಲ ಪ್ರತಿಗಳನ್ನು ಹೊಂದಿರಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸುವವರು ಫೆ. 15ರೊಳಗೆ ಹೆಸರು ನೋಂದಣಿ ಮಾಡಿಕೊಳ್ಳಬೇಕು ಎಂದು ಹೇಳಿದರು.
ಹೆಚ್ಚಿನ ಮಾಹಿತಿಗಾಗಿ (7349703244) ಸಂಪರ್ಕಿಸಬಹುದು. ನೋಂದಣಿಗೆ ಮೂಡಿಗೆರೆ ಮತ್ತು ಕಳಸ ತಾಲ್ಲೂಕು 6364323390, ಚಿಕ್ಕಮಗಳೂರು ತಾಲ್ಲೂಕು 9448668391, ಬಾಳೆಹೊನ್ನೂರು, ಶೃಂಗೇರಿ, ಎನ್.ಆರ್.ಪುರ ಮತ್ತು ಕೊಪ್ಪ ತಾಲ್ಲೂಕಿನ ಸ್ಪರ್ಧಿಗಳು 8050964196, 7975152532 ಸಂಪರ್ಕಿಸಬಹುದು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.