ADVERTISEMENT

ಚಿಕ್ಕಮಗಳೂರು | ಗೌರವಧನ ಹೆಚ್ಚಳಕ್ಕೆ ಆಗ್ರಹ: ಪ್ರತಿಭಟನೆ

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಆಶಾ ಕಾರ್ಯಕರ್ತೆಯರಿಂದ ಧರಣಿ, ಒತ್ತಾಯ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 4:12 IST
Last Updated 13 ಆಗಸ್ಟ್ 2025, 4:12 IST
ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಆಶಾ ಕಾರ್ಯಕರ್ತೆಯರು ಮಂಗಳವಾರ ಪ್ರತಿಭಟನೆ ನಡೆಸಿದರು
ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಆಶಾ ಕಾರ್ಯಕರ್ತೆಯರು ಮಂಗಳವಾರ ಪ್ರತಿಭಟನೆ ನಡೆಸಿದರು   

ಚಿಕ್ಕಮಗಳೂರು: ಮುಖ್ಯಮಂತ್ರಿ ಘೋಷಿಸಿದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹಧನ ಸೇರಿಸಿ ತಿಂಗಳಿಗೆ ₹10 ಸಾವಿರ ಗೌರವಧನ ನೀಡಬೇಕು ಎಂದು ಆಗ್ರಹಿಸಿದ ಆಶಾ ಕಾರ್ಯಕರ್ತೆಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಧರಣಿ ನಡೆಸಿದರು. ಬಳಿಕ ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೂ ₹1 ಸಾವಿರ ಪ್ರೋತ್ಸಾಹಧನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಜನಸಂಖ್ಯೆಯ ಮಿತಿ, ಅವೈಜ್ಞಾನಿಕ ಮೌಲ್ಯಮಾಪನ, ಶಿಕ್ಷಣದ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ಕೈಬಿಡುವ ಉದ್ದೇಶವನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ತಾರಾಕೃಷ್ಣ ಮಾತನಾಡಿ, ‘ಸರ್ಕಾರ ಕೊಟ್ಟ ಮಾತಿನಂತೆ ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ಗೌರವಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಬೇಡಿಕೆಗಳನ್ನು ತಕ್ಷಣವೇ ಈಡೇರಿಸದಿದ್ದರೆ ಮುಂದೆ ರಾಜ್ಯ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು. ರಾಜ್ಯದ 31 ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದು ಹೇಳಿದರು.

ಕಳೆದ ವರ್ಷ ಬೆಂಗಳೂರಿನ ಸ್ವಾತಂತ್ರ್ಯಉದ್ಯಾನದಲ್ಲಿ ನಡೆದ ಪ್ರತಿಭಟನೆ ವೇಳೆ ಇನ್ನೊಂದು ತಿಂಗಳಲ್ಲಿ ಬೇಡಿಕೆ ಈಡೇರಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಆದರೆ, ಅದು ಇದುವರೆಗೂ ಕಾರ್ಯರೂಪಕ್ಕೆ ಬಂದಿಲ್ಲ ಎಂದರು.

ಸಿಪಿಐ ಮುಖಂಡರಾದ ರಾಧಾ ಸುಂದ್ರೇಶ್ ಮಾತನಾಡಿ, ‘ಆಶಾ ಕಾರ್ಯಕರ್ತೆಯರು ಮಾಡಿದ ಕೆಲಸಕ್ಕೆ ಸಮಾನವಾದ ವೇತನ ಕೇಳುತ್ತಿದ್ದಾರೆ. ನ್ಯಾಯಯುತವಾಗಿರುವ ಅವರ ಬೇಡಿಕೆ‌ಗಳನ್ನು ಕೂಡಲೇ ಸರ್ಕಾರ ಇತ್ಯರ್ಥಪಡಿಸಬೇಕು’ ಎಂದು ಆಗ್ರಹಿಸಿದರು.

ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಈ ಹೋರಾಟಕ್ಕೆ ಬೆಂಬಲ ನೀಡಲಾಗುವುದು. ಸರ್ಕಾರ ನುಡಿದಂತೆ ನಡೆಯಬೇಕು ಎಂದು ಹೇಳಿದರು.

ಎಐಟಿಯುಸಿ ಮುಖಂಡ ಶಿವಪ್ರಕಾಶ್, ಜಿಲ್ಲಾ ಘಟಕದ ಕಾರ್ಯದರ್ಶಿ ಮೈನಾ, ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಜ್ಯೋತಿ, ಗೀತಾ, ವಿಮಲಾಕ್ಷಿ ಬಿ., ಗಾಯತ್ರಿ, ಪವಿತ್ರಾ, ನಿರ್ಮಲಾ, ರತ್ನಮ್ಮ, ಸಾವಿತ್ರಿ, ಪ್ರೇಮಾ, ರೇಷ್ಮಾ, ಶ್ರೀಲತಾ, ಆಶಾ, ರೇಣುಕಾ, ನಂದಿನಿ, ಶೀಲಾ, ನಾಗಮ್ಮ, ನಳಿನಾ, ಚಂದ್ರಿಕಾ, ಶಾಂತಾ, ಮಂಜುಳಾ, ಲಾವಣ್ಯ, ಮಾಲತಿ, ದಾಸರಹಳ್ಳಿ ಕೃಷ್ಣಪ್ಪ, ಕನ್ನಡ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಗೌಡ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.