ಚಿಕ್ಕಮಗಳೂರು: ‘ಬಡವರು, ಶೋಷಿತರಿಗೆ ಶಿಕ್ಷಣ, ಆರೋಗ್ಯ ಮತ್ತು ಬದುಕು ಈ ಮೂರು ಅಂಶಗಳಿಗೆ ಒತ್ತು ನೀಡಿ ಸರ್ಕಾರ ಕೆಲಸ ಮಾಡುತ್ತಿದೆ’ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಬಸವನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ 2025-26ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಹಾಗೂ ಕಂಪ್ಯೂಟರ್ ಲ್ಯಾಬ್ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಆರೋಗ್ಯ ಸೇವೆಗೆ ಉತ್ತಮ ಸ್ಪಂದನೆ ನೀಡಿದ್ದು, ನಗರದಲ್ಲಿ ನಾಲ್ಕು ಭಾಗದಲ್ಲಿ ನಮ್ಮ ಕ್ಲಿನಿಕ್ ತೆರೆದಿದೆ. ನಾಗರಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಈ ಕ್ಲಿನಿಕ್‌ನಲ್ಲಿ ಓರ್ವ ವೈದ್ಯ, ಶುಶ್ರೂಷಕಿ ಹಾಗೂ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಬಸವನಹಳ್ಳಿ ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರಿಗೆ ಅಗತ್ಯವಾಗಿ ಬೇಕಾಗಿರುವ ಸೌಲಭ್ಯಗಳ ಜೊತೆಗೆ ಇಂದು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆಯಾಗಿರುವುದು ಶಿಕ್ಷಣಕ್ಕೆ ಉಪಯುಕ್ತವಾಗಿದೆ ಎಂದರು.
ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದೊಂದಿಗೆ ಸರ್ಕಾರ ಹಲವು ಯೋಜನೆ ಜಾರಿಗೆ ತಂದು, ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದೆ ಎಂದು ಹೇಳಿದರು.
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ 30 ಲಕ್ಷ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಇದು ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಹೊಸ ಹೆಜ್ಜೆಯ ಯೋಜನೆ ಕಾರಣ ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ವರಸಿದ್ಧಿ ವೇಣುಗೋಪಾಲ್ ಮಾತನಾಡಿ, ‘ವಿದ್ಯಾರ್ಥಿನಿಯರು ಈಗಿನಿಂದಲೇ ಶ್ರಮವಹಿಸಿ, ಅಧ್ಯಯನಶೀಲರಾಗಿ ಉತ್ತಮ ಶಿಕ್ಷಣ ಪಡೆದು ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆಯುವ ಮೂಲಕ ಕಾಲೇಜಿಗೆ ಮತ್ತು ಉಪನ್ಯಾಸಕರಿಗೆ ಹೆಸರು ತರಬೇಕು’ ಎಂದು ಕರೆ ನೀಡಿದರು.
ಪ್ರಾಂಶುಪಾಲ ಸತೀಶ್ ಶಾಸ್ತ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಶುಭಾನ್ ಹಾಗೂ ಉಪನ್ಯಾಸಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.