ಚಿಕ್ಕಮಗಳೂರು: ‘ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಜಾರಿ ನಿರ್ದೇಶನಾಲಯ (ಇ.ಡಿ)ವನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ವಿರುದ್ಧ ಚಾರ್ಜ್ಶೀಟ್ ಹಾಕುವ ಮೂಲಕ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಆರೋಪಿಸಿದರು.
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
‘ಕೇಂದ್ರ ಸರ್ಕಾರವು ಸ್ಪಷ್ಟ ಬಹುಮತದಿಂದ ಆಡಳಿತ ನಡೆಸುತ್ತಿಲ್ಲ. ಕೆಲವೇ ದಿನಗಳಲ್ಲಿ ನಿಮ್ಮ ಪಾಪದ ಕೊಡ ತುಂಬಲಿದೆ. ಸರ್ಕಾರ ಪತನವಾಗಲಿದೆ. ಜಾತಿಗಳ ಮಧ್ಯೆ ವಿಷಬೀಜ ಬಿತ್ತಿ ಬಿಜೆಪಿ ಒಡೆದು ಆಳುವ ನೀತಿ ಅನುಸರಿಸುತ್ತಿದೆ. 2029ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ನಿಮಗೆ ಪಾಠ ಕಲಿಸಲಿದೆ’ ಎಂದರು.
‘ಬಿಜೆಪಿ ಮುಖಂಡರ ಮನೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಬೆಂಕಿಗಾಹುತಿಯಾದರೂ ತನಿಖೆ ಕೈಗೊಳ್ಳದ ಇ.ಡಿ., ವಿರೋಧ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಮೇಲೆ ಚಾರ್ಜ್ಶೀಟ್ ಸಲ್ಲಿಸಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ’ ಎಂದು ಆರೋಪಿಸಿದರು.
‘ಗುಜರಾತ್‌ನಲ್ಲಿ ನಡೆದ ನರಮೇಧದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕೆ ಜೈಲಿಗೆ ಕಳಿಸಿದ್ದ ಸೇಡನ್ನು ಅಮಿತ್ ಶಾ ಅವರು ತೀರಿಸಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿಗೆ ಕಾಂಗ್ರೆಸ್ ಪಕ್ಷ ತಕ್ಕ ಪಾಠ ಕಲಿಸುತ್ತದೆ’ ಎಂದು ಹೇಳಿದರು.
‘ದೇಶದ ಭದ್ರತೆಗೆ, ಏಕತೆಗಾಗಿ 4 ಸಾವಿರ ಕಿ.ಮೀ.ಗಳ ಪಾದಯಾತ್ರೆ ನಡೆಸಿದ ರಾಹುಲ್ ಗಾಂಧಿ ಅವರು ದೇಶದ ಎಲ್ಲ ವರ್ಗದ ಬಡವರನ್ನು ಪ್ರೀತಿಯಿಂದ ಕಾಣುವ ಏಕೈಕ ನಾಯಕ. ಅಂಥವರ ಮೇಲೆ ಚಾರ್ಜ್ಶೀಟ್ ಹಾಕುವ ಮೂಲಕ ಅಪಮಾನ ಮಾಡಿ ಸೇಡಿನ ರಾಜಕಾರಣವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ’ ಎಂದು ದೂರಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್, ಸದಸ್ಯರಾದ ರಘು, ಸೋಮಶೇಖರ್, ನಗರಸಭೆ ಸದಸ್ಯರಾದ ಮುನೀರ್, ಪರಮೇಶ್, ಕಾಂಗ್ರೆಸ್ ಮುಖಂಡರಾದ ಹಿರೇಮಗಳೂರು ರಾಮಚಂದ್ರ, ಇಂದಾವರ ಲೋಕೇಶ್, ಪ್ರಕಾಶ್, ಸೋಮಶೇಖರ್, ರಾಘವೇಂದ್ರ, ಕೆ.ಭರತ್, ರಾಜೇಶ್, ಪುನೀತ್, ಲಕ್ಯಾ ಸಂತೋಷ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.