ADVERTISEMENT

27ರಿಂದ 29ರ ವರೆಗೆ ದತ್ತ ಜಯಂತ್ಯುತ್ಸವ

ಕೋವಿಡ್‌–19 ಮಾರ್ಗಸೂಚಿ ಪಾಲನೆಗೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೂಚನೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2020, 3:39 IST
Last Updated 19 ಡಿಸೆಂಬರ್ 2020, 3:39 IST
ಚಿಕ್ಕಮಗಳೂರಿನಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಮಾತನಾಡಿದರು.
ಚಿಕ್ಕಮಗಳೂರಿನಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಮಾತನಾಡಿದರು.   

ಚಿಕ್ಕಮಗಳೂರು: ದತ್ತ ಜಯಂತಿ ಇದೇ 27ರಿಂದ 29ರ ವರೆಗೆ ಜರುಗಲಿದ್ದು, ಕೋವಿಡ್-19 ಮಾರ್ಗಸೂಚಿ ಅನುಸಾರ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಶುಕ್ರವಾರ ನಡೆದ ದತ್ತ ಜಯಂತಿ ಆಚರಣೆ ಕುರಿತ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದರು. ‘ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಮೊದಲಾದ ಕೋವಿಡ್‌ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಶಾಂತಿ, ಸುವ್ಯವಸ್ಥೆ, ಶಿಸ್ತು ಪಾಲಿಸಬೇಕು’ ಎಂದು ತಿಳಿಸಿದರು.

‘ಗುರು ದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾ ಮಾರ್ಗದ ರಸ್ತೆ ದುರಸ್ತಿ ಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಗಿರಿಯಲ್ಲಿ ತಾತ್ಕಾಲಿಕ ಕ್ಲಿನಿಕ್‌ ತೆರೆದು, ವೈದ್ಯರು, ಸಿಬ್ಬಂದಿ ನಿಯೋಜಿಸಬೇಕು’ ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು.

ADVERTISEMENT

ಅಲ್ಲಂಪುರ ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲುಗಡೆ, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಭಕ್ತರ ಸಂಖ್ಯೆಗೆ ತಕ್ಕಂತೆ ಬಸ್ ಸೌಕರ್ಯ ಹಾಗೂ ಖಾಸಗಿ ಮಿನಿ ಬಸ್ ಸೌಕರ್ಯ ನಿಯೋಜಿಸುವಂತೆ ಕೆಎಸ್‌ಆರ್‌ಟಿಸಿ ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದರು.

ದತ್ತ ಪೀಠಕ್ಕೆ ಬರುವ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ, ಇತರ ಮೂಲಸೌಕರ್ಯ ಕಲ್ಪಿಸಬೇಕು. ದತ್ತ ಜಯಂತಿ ದಿನಗಳಲ್ಲಿ ಗಿರಿ ಶ್ರೇಣಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗುವುದು ಎಂದರು.

ನಗರ ಅಲಂಕಾರಕ್ಕೆ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಅವಕಾಶ ಕಲ್ಪಿಸಬೇಕು. ಬೇರೆ ಸ್ಥಳಗಳಲ್ಲಿ ಹಾಕುವ ಬಂಟಿಂಗ್ಸ್, ಬ್ಯಾನರ್, ಪ್ಲೆಕ್ಸ್‌ ಅಳವಡಿಸದಂತೆ ನಿಗಾ ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಪೂವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕುಮಾರ, ಉಪವಿಭಾಗಾಧಿಕಾರಿ ಡಾ.ಎಚ್.ಎಲ್. ನಾಗರಾಜ್, ವಿಶ್ವ ಹಿಂದೂ ಪರಿಷತ್, ಬಜರಂಗದಳದ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.