ADVERTISEMENT

ಚಿಕ್ಕಮಗಳೂರು | ಯುವಪೀಳಿಗೆ ಪ್ರಜಾಪ್ರಭುತ್ವದ ಮಹತ್ವ ಅರಿಯಬೇಕು: ಎಸ್.ಎಲ್.ಬೋಜೇಗೌಡ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 3:12 IST
Last Updated 16 ಸೆಪ್ಟೆಂಬರ್ 2025, 3:12 IST
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೋಮವಾರ ಆಯೋಜಿಸಿದ್ದ ಸೈಕಲ್ ಜಾಥಾಕ್ಕೆ ಚಾಲನೆ ಎಸ್.ಎಲ್.ಭೋಜೇಗೌಡ ಚಾಲನೆ ನೀಡಿದರು
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೋಮವಾರ ಆಯೋಜಿಸಿದ್ದ ಸೈಕಲ್ ಜಾಥಾಕ್ಕೆ ಚಾಲನೆ ಎಸ್.ಎಲ್.ಭೋಜೇಗೌಡ ಚಾಲನೆ ನೀಡಿದರು   

ಚಿಕ್ಕಮಗಳೂರು: ಯುವ ಪೀಳಿಗೆ ಪ್ರಜಾಪ್ರಭುತ್ವದ ಮಹತ್ವ ಅರಿಯಬೇಕು ಎಂಬ ಸದುದ್ದೇಶದಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಹೇಳಿದರು.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ನಗರಸಭೆಯ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

‘ದೇಶದ ಏಕತೆ, ಅಖಂಡತೆ, ರಾಷ್ಟ್ರೀಯತೆ ಈ ಎಲ್ಲಾ ವಿಚಾರವನ್ನು ನಮ್ಮ ಸಂವಿಧಾನ ಒಳಗೊಂಡಿದೆ. ಪ್ರಜಾಪ್ರಭುತ್ವದ ಮಹತ್ವವನ್ನು ನಮ್ಮ ಯುವಜನತೆ ಅರಿಯಬೇಕು. ಸಾಮಾಜಿಕ ನ್ಯಾಯ, ಸಮಾನತೆ, ಶಿಕ್ಷಣ ಮತ್ತು ಆರೋಗ್ಯ ಅಂಬೇಡ್ಕರ್ ನೀಡಿರುವ ಸಂವಿಧಾನದ ಆಶಯವಾಗಿದ್ದು, ಈ ಆಶಯವನ್ನು ಪ್ರತಿಯೊಬ್ಬ ಪ್ರಜೆಯು ಅರಿತು ನಡೆದರೆ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುತ್ತದೆ’ ಎಂದು ಹೇಳಿದರು.

ADVERTISEMENT

‘ಸಂವಿಧಾನದ ಆಶಯ ಆಧರಿಸಿ ಹಿಂದಿನವರು ಈಗಾಗಲೇ ನಾಡಿಗೆ ಕೊಡುಗೆ ಕೊಟ್ಟಿದ್ದಾರೆ. ಅವುಗಳನ್ನು ಕಾರ್ಯಗತ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ. ಇನ್ನು ಕೆಲವು ಯಶಸ್ಸಿನ ಹಾದಿಯಲ್ಲಿವೆ. ಯುವ ಪೀಳಿಗೆಗೆ ಈ ದಿನ ಜಾಗೃತಿ ಮೂಡಿಸುವ ಕೆಲಸ ನಡೆಯಬೇಕಿದೆ. ಮುಂದಿನ ದಿನಗಳಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಕೆಲಸ ಆಗಬೇಕಿದೆ’ ಎಂದರು.

ರಾಜ್ಯದಾದ್ಯಂತ ಸೈಕಲ್ ಜಾಥಾ ಆಯೋಜನೆ ಮಾಡಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಯುವಜನರಲ್ಲಿ ಅರಿವು ಮೂಡಿಸಬೇಕಿದೆ ಎಂದರು.

ಜಿಲ್ಲಾ ಆಟದ ಮೈದಾನದಿಂದ ಹೊರಟ ಸೈಕಲ್ ರ್‍ಯಾಲಿಯು ಆಜಾದ್ ಪಾರ್ಕ್, ಹಿರೇಮಗಳೂರು, ಎಐಟಿ ಸರ್ಕಲ್, ದಂಟರಮಕ್ಕಿ, ಎಂ.ಜಿ. ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಸ್‌.ಎಸ್.ಕೀರ್ತನಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕಿ ಮಂಜುಳಾ ಹುಲ್ಲಹಳ್ಳಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಾಲತಿ, ಮುಖಂಡರಾದ ಕೆ.ಟಿ ರಾಧಾಕೃಷ್ಣ  ಭಾಗವಹಿಸಿದ್ದರು.

ನಮ್ಮದು ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶ. ಇದಕ್ಕೆ ಮೂಲ ಕಾರಣ ಸಂವಿಧಾನ ಕರ್ತೃ ಬಿ.ಆರ್.ಅಂಬೇಡ್ಕರ್. ಅವರು ಸಂವಿಧಾನದಲ್ಲಿ ನೀಡಿದ ಅವಕಾಶಗಳಿಂದ ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿಯೂ ತೊಡಗಿಕೊಂಡಿದ್ದಾರೆ
ಬಿ.ಮಾಲತಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.