ADVERTISEMENT

ಚಿಕ್ಕಮಗಳೂರು: ದ್ವಿತೀಯ ಪಿ.ಯು ಪರೀಕ್ಷೆ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯ 18 ಕೇಂದ್ರಗಳಲ್ಲಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2024, 15:25 IST
Last Updated 23 ಫೆಬ್ರುವರಿ 2024, 15:25 IST
ಮೀನಾ ನಾಗರಾಜ್
ಮೀನಾ ನಾಗರಾಜ್   

ಚಿಕ್ಕಮಗಳೂರು: ದ್ವಿತೀಯ ಪಿ.ಯು ವಾರ್ಷಿಕ ಪರೀಕ್ಷೆ ಮಾ.1 ರಿಂದ 22 ರವರೆಗೆ ರಾಜ್ಯದಾದ್ಯಂತ ಏಕ ಕಾಲದಲ್ಲಿ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.

ದ್ವಿತೀಯ ಪಿ.ಯು ವಾರ್ಷಿಕ ಪರೀಕ್ಷೆ ಕುರಿತು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯು ಪರೀಕ್ಷೆ ಮಹತ್ವದ್ದಾಗಿದೆ. ಆದ್ದರಿಂದ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಲೋಪಗಳಿಗೆ ಆಸ್ಪದವಾಗದಂತೆ ಶಾಂತಿ ಮತ್ತು ಶಿಸ್ತು ಪಾಲನೆ ಜತೆಗೆ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಯಯಬೇಕು. ನಿಯೋಜನೆಗೊಂಡಿರುವ ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ADVERTISEMENT

ಚಿಕ್ಕಮಗಳೂರು ಹಾಗೂ ನರಸಿಂಹರಾಜಪುರ ತಾಲ್ಲೂಕು ಖಜಾನೆಗಳಲ್ಲಿ ಇರಿಸಲಾಗುವ ಪರೀಕ್ಷಾ ಗೌಪ್ಯ ಬಂಡಲ್‍ಗಳನ್ನು ಪರೀಕ್ಷಾ ದಿನದಂದು ಸ್ವೀಕರಿಸಿ ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ಮೂವರ ಸಮಿತಿ ರಚಿಸಿದೆ. ಅದರಂತೆ ಸಮಿತಿ ಸದಸ್ಯರುಗಳು ಮುಂಜಾಗೃತ ಕ್ರಮ ಕೈಗೊಂಡು ಪರೀಕ್ಷಾ ಸಮಯಕ್ಕೆ ಸರಿಯಾಗಿ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ 18 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕುಡಿಯುವ ನೀರು, ಬೆಳಕು, ಶೌಚಾಲಯ ಸಮಸ್ಯೆಯಾಗಬಾರದು. ಸಿ.ಸಿ ಟಿವಿ ಕ್ಯಾಮೆರಾ ಸುಸ್ಥಿತಿಯಲ್ಲಿರಬೇಕು. ಪರೀಕ್ಷಾ ಕೇಂದ್ರ ಸುತ್ತ ಜೆರಾಕ್ಸ್ ಅಂಗಡಿಗಳು ಇರದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ದ್ವಿತಿಯ ಪಿಯುಸಿ ಪರೀಕ್ಷೆ ಸುಗಮವಾಗಿ ನಡೆಯಲು ನೇಮಕವಾಗಿರುವ ಮೇಲುಸ್ತುವಾರಿ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ತಹಶೀಲ್ದಾರ್ ಮತ್ತು ಇತರೆ ಅಧಿಕಾರಿಗಳು ಯಾವುದೇ ರಜೆಯನ್ನು ಹಾಕಬಾರದು. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶದಂತೆ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳು ಪರೀಕ್ಷೆಯಲ್ಲಿ ಹಾಜರಾಗಬೇಕು ಎಂದು ಹೇಳಿದರು. 

ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೃಷ್ಣಮೂರ್ತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟನಾಯ್ಕ, ಬಿಇಒ ರವಿಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್ಥ ಬಾಬು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.