ಚಿಕ್ಕಮಗಳೂರು: ‘ಅಲ್ಲಂಪುರದ ಓಂಕಾರಮೂರ್ತಿ ಮೇಲಿನ ಹಲ್ಲೆ ಪ್ರಕರಣವನ್ನು ಪೊಲೀಸ್ ಅಧಿಕಾರಿಗಳು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ. ಪ್ರಕರಣವನ್ನು ಸಿಒಡಿ ತನಿಖೆಗೆ ಶಿಫಾರಸು ಮಾಡಬೇಕು’ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ದಂಟರಮಕ್ಕಿ ಶ್ರೀನಿವಾಸ್ ಆಗ್ರಹಿಸಿದರು.
ಓಂಕಾರಮೂರ್ತಿ ಮೇಲಿನ ಹಲ್ಲೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಸಬೇಕಿದ್ದ ಅಧಿಕಾರಿಗಳು ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಪ್ರಕರಣದ ಕುರಿತು ತ್ವರಿತವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರನ್ನು ಬಂಧಿಸಬೇಕು. ಅ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.
ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ಮಾಡಿದರೆ ಪ್ರಕರಣ ದಾಖಲಿಸುವುದಾಗಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು.
ದಸಂಸ ರಾಜ್ಯ ಸಮಿತಿ ಸದಸ್ಯ ಮರ್ಲೆ ಅಣ್ಣಯ್ಯ, ಮುಖಂಡರಾದ ಮಂಜಯ್ಯ, ಪುಟ್ಟಸ್ವಾಮಿ, ಸಂತೋಷ್, ನಾಗೇಶ್, ಪೂರ್ಣೇಶ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.