ADVERTISEMENT

ಅರಣ್ಯ–ಕಂದಾಯ ಸಮಸ್ಯೆ ಅನಾವರಣ

ಕೆ.ಜೆ.ಜಾರ್ಜ್ ಅಧ್ಯಕ್ಷತೆಯಲ್ಲಿ ಜನ ಸಂಪರ್ಕ ಸಭೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2025, 4:37 IST
Last Updated 7 ಡಿಸೆಂಬರ್ 2025, 4:37 IST
ಜನ ಸಂಪರ್ಕ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಉದ್ಘಾಟಿಸಿದರು
ಜನ ಸಂಪರ್ಕ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಉದ್ಘಾಟಿಸಿದರು   

ಚಿಕ್ಕಮಗಳೂರು: ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಜನ ಸಂಪರ್ಕ ಸಭೆಯಲ್ಲಿ ಕಂದಾಯ ಮತ್ತು ಅರಣ್ಯ ಸಮಸ್ಯೆಗಳು ಅನಾವರಣಗೊಂಡವು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ಜನ ಸಂಪರ್ಕ ಸಭೆ ನಡೆಯಿತು.

ಅರಣ್ಯ ಇಲಾಖೆಯ ಹಠದಿಂದ ಕಡೂರು ತಾಲ್ಲೂಕಿನ ಎಮ್ಮೆದೊಡ್ಡಿ ಭಾಗದ ಐನರಕ್ಕೂ ಹೆಚ್ಚು ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಜಿಲ್ಲಾಧಿಕಾರಿ ಸಾಗುವಳಿ ಚೀಟಿ ನೀಡಿದ್ದರೂ ಅರಣ್ಯ ಇಲಾಖೆ ಅಡ್ಡಗಾಲು ಹಾಕುತ್ತಿದೆ. ನ್ಯಾಯಾಲಯಕ್ಕೆ ಅಲೆದಾಡುವ ಸ್ಥಿತಿ ಇದೆ ಎಂದು ಕಡೂರಿನ ಸೋಮಶೇಖರ್ ಅಹವಾಲು ಹೇಳಿಕೊಂಡರು.

ADVERTISEMENT

ಅಮೃತ್ ಮಹಲ್ ಜಾಗ ಕಂದಾಯ ಇಲಾಖೆಗೆ ಹಸ್ತಾಂತರವಾಗಿದೆ. ಆ ಜಾಗದಲ್ಲಿ ರೈತರು ಸಾಗುವಳಿ ಮಾಡುತ್ತಿದ್ದಾರೆ. ಆದರೆ, ಸೆಕ್ಷನ್ 4 ಜಾರಿ ನೆಪದಲ್ಲಿ ಅರಣ್ಯ ಇಲಾಖೆ ರೈತರಿಗೆ ತೊಂದರೆ ನೀಡುತ್ತಿದೆ ಎಂದರು.

ರೈತರಿಗೆ ಜಮೀನು ಕಳೆದುಕೊಳ್ಳುವ ಆತಂಕ ಎದುರಾಗಿದೆ. ಹತ್ತಾರು ವರ್ಷಗಳಿಂದ ಇಲಾಖೆಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಹೇಳಿದರು.

ಕಂದಾಯ ಇಲಾಖೆಗೆ ಹಸ್ತಾಂತರವಾಗುವ ಮುನ್ನವೇ ಅರಣ್ಯ ಇಲಾಖೆ ಸೆಕ್ಷನ್ 4 ಜಾರಿಗೊಳಿಸಿದೆ. ಆದ್ದರಿಂದ ಎಫ್‌ಎಸ್‌ಒ(ಅರಣ್ಯ ವ್ಯವಸ್ಥಾಪನಾಧಿಕಾರಿ) ವಿಚಾರಣೆ ನಡೆಸುತ್ತಿದ್ದಾರೆ ಎಂದು ಉಪಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಬಾಬು ತಿಳಿಸಿದರು.

ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ‘ಸೆಕ್ಷನ್ 17 ಜಾರಿಯಾದರೆ ಅರಣ್ಯ ಇಲಾಖೆಗೆ ಹಸ್ತಾಂತರವಾಗಲಿದೆ. ರೈತರು ಸಾಗುವಳಿ ಮಾಡುತ್ತಿದ್ದರೆ ಅವರಿಗೆ ತೊಂದರೆ ನೀಡಬಾರದು. ಇದನ್ನು ಅರಣ್ಯ ಒತ್ತುವರಿ ಎಂದು ಪರಿಗಣಿಸಬಾರದು’ ಎಂದು ತಿಳಿಸಿದರು.

ಎಮ್ಮೆದೊಡ್ಡಿ ವಿಷಯವನ್ನು ಶೀಘ್ರವೇ ಪರಿಹರಿಸಬೇಕು. ರೈತರೊಂದಿಗೆ ಚರ್ಚೆ ನಡೆಸುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಮಹಲ್ ಗ್ರಾಮದ ಸುರೇಂದ್ರ ಮಾತನಾಡಿ,  ‘ಬಾಬಾಬುಡನ್ ಗಿರಿಭಾಗಕ್ಕೆ ಸರಿಯಾಗಿ ಬಸ್ ಸೌಕರ್ಯ ಇಲ್ಲ. ಬಸ್ ಆಗಾಗ ಕೆಟ್ಟು ನಿಲ್ಲುವುದರಿಂದ ವಿದ್ಯಾರ್ಥಿಗಳು, ಸಾರ್ವಜನಿಕರು ಪರದಾಡುವಂತಾಗಿದೆ’ ಎಂದರು.

ಇದಕ್ಕೆ ಸ್ಪಂದಿಸಿದ ಸಚಿವರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗೌಡನಹಳ್ಳಿ ಗ್ರಾಮದ ಲೋಕೇಶ್, ‘ನ್ಯಾಯಬೆಲೆ ಅಂಗಡಿ ಇಲ್ಲದೆ ಪಡಿತರ ಪಡೆಯಲು ಪರದಾಡಬೇಕಿದೆ. ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಬೇಕು’ ಎಂದು ಮನವಿ ಮಾಡಿದರು.

ರಸ್ತೆ, ಪಿಂಚಣಿ, ನ್ಯಾಯಬೆಲೆ ಅಂಗಡಿ ಸಮಸ್ಯೆ ಸೇರಿದಂತೆ 123 ದೂರು ಅರ್ಜಿಗಳು ಸ್ವೀಕೃತಗೊಂಡಿದ್ದು, ಇವುಗಳಲ್ಲಿ 60 ಅರ್ಜಿದಾರರು ಭಾಗವಹಿಸಿದ್ದರು. 

ಶಾಸಕ ಟಿ.ಡಿ. ರಾಜೇಗೌಡ, ಜಿ.ಎಚ್. ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಹರೀಶಕುಮಾರ್, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಎಚ್. ಹರೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ, ಹೆಚ್ಚುವರಿ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಇದ್ದರು.

ಕಂದಾಯ ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳೇ ಹೆಚ್ಚು

ಕಂದಾಯ ಮತ್ತು ಅರಣ್ಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳೇ ಹೆಚ್ಚಾಗಿದ್ದು ಅವುಗಳ ಪರಿಹಾರಕ್ಕೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಮದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ರಾಜಧಾನಿಗೆ ಬರುವ ಬದಲು ಆಯಾ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು. ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿ ‘ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ಬಳಿಗೆ ಸಚಿವರೇ ತೆರಳಿ ಜನರ ಸಮಸ್ಯೆ ಅರಿತು ಬಗೆಹರಿಸಬೇಕು ಎಂಬ ಪರಿಕಲ್ಪನೆಯಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಿರ್ದೇಶನದಂತೆ ಜನ ಸಂಪರ್ಕ ಸಭೆ ನಡೆಸಲಾಗುತ್ತಿದೆ’ ಎಂದರು. ಜಿಲ್ಲಾಧಿಕಾರಿ ಮೀನಾ ನಾಗರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ ಎರಡೂವರೆ ವರ್ಷದಲ್ಲಿ ಜನತಾ ದರ್ಶನ ಕಾರ್ಯಕ್ರಮಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ನಡೆಸಲಾಗಿದೆ. ಒಟ್ಟು 829 ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಅವುಗಳಲ್ಲಿ 496 ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದವು. ಈ ಪೈಕಿ ಶೇ 27ರಷ್ಟು ಅರ್ಜಿಗಳನ್ನು ಸಕಾರಾತ್ಮಕವಾಗಿ ಇತ್ಯರ್ಥ ಮಾಡಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.