ADVERTISEMENT

ಸರ್ಕಾರದ ಯೋಜನೆ ಪ್ರತಿಯೊಬ್ಬರಿಗೂ ತಲುಪಬೇಕು: ಶಾಸಕ ಎಚ್.ಡಿ.ತಮ್ಮಯ್ಯ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2025, 14:21 IST
Last Updated 16 ಫೆಬ್ರುವರಿ 2025, 14:21 IST
<div class="paragraphs"><p>ಜನ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿದರು</p></div>

ಜನ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿದರು

   

ಚಿಕ್ಕಮಗಳೂರು: ‘ಸರ್ಕಾರದ ಯೋಜನೆಗಳನ್ನು ಕ್ಷೇತ್ರದ ಪ್ರತಿಯೊಬ್ಬ ಪ್ರಜೆಗೂ ತಲುಪಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಬಗೆಹರಿಸುವುದೇ ನನ್ನ ಗುರಿ’ ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದರು.

ತಾಲ್ಲೂಕಿನ ಲಕ್ಕಮ್ಮನಹಳ್ಳಿ, ಬಿಳೇಕಲ್ಲಹಳ್ಳಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಜನ ಜನಸಂಪರ್ಕ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ADVERTISEMENT

ಸಾರ್ವಜನಿಕರು ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಿಗೆ ಪ್ರತಿದಿನ ಅಲೆದರೂ ಕೆಲವೊಮ್ಮೆ ಅಧಿಕಾರಿಗಳು ಸಂಪರ್ಕಕ್ಕೆ ಸಿಗದೆ, ತಮ್ಮ ಸಮಸ್ಯೆಗಳು ಬಗೆಹರಿಸಿಕೊಳ್ಳಲು ಕಷ್ಟವಾಗುತ್ತದೆ ಎಂಬ ಉದ್ದೇಶದಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನ ಸಂಪರ್ಕ ಸಭೆ ಆಯೋಜಿಸಲಾಗುತ್ತಿದೆ ಎಂದರು.

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಗೆಹರಿಸಬಹುದಾದ ಎಲ್ಲಾ ಸಮಸ್ಯೆಗಳಿಗೆ ಸ್ಥಳದಲ್ಲೆ ಪರಿಹಾರ ನೀಡಿ ಬಗೆಹರಿಸಲಾಗುವುದು. ಸಾರ್ವಜನಿಕರು ಸಮಸ್ಯೆಗಳನ್ನು ಹೊತ್ತು ತಂದರೆ ಅಧಿಕಾರಿಗಳು ಶೀಘ್ರವಾಗಿ ಪರಿಹರಿಸಬೇಕು ಎಂದು ಹೇಳಿದರು.

ಪ್ರತಿ ಗ್ರಾಮದಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್ ಹಾಗೂ ಸ್ವಚ್ಛತೆ ಸೇರಿದಂತೆ ಮೂಲ ಸೌಕರ್ಯಗಳನ್ನು ವ್ಯವಸ್ಥಿತವಾಗಿ ಪೂರೈಸಬೇಕು. ಕ್ಷೇತ್ರದ ಅಭಿವೃದ್ಧಿಗೆ ₹25 ಕೋಟಿ ವಿಶೇಷ ಅನುದಾನ ನೀಡುತ್ತಿದ್ದು, ಇದರಲ್ಲಿ ಹಲವು ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.

ಲಕ್ಕಮ್ಮನಹಳ್ಳಿ ಹಾಗೂ ಬಿಳೇಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆ, ಸಮುದಾಯ ಭವನ, ದೇವಸ್ಥಾನ ಸೇರಿದಂತೆ ಒಟ್ಟು ₹2.25 ಕೋಟಿಗಳ  ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಕುನ್ನಾಳು ಗ್ರಾಮದಲ್ಲಿ ವಿದ್ಯುತ್ ತಂತಿ ಕೈಗೆ ಎಟುಕುವ ರೀತಿಯಲ್ಲಿ ಜೋತು ಬಿದ್ದಿವೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಇದರಿಂದ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ಎದುರಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಶೀಘ್ರ ಸಮಸ್ಯೆ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬಿಳೇಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾನು ಪ್ರಕಾಶ್, ಲಕ್ಕಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷ ಲಕ್ಷಣಗೌಡ, ಚಂದ್ರಶೇಖರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.