ಚಿಕ್ಕಮಗಳೂರು: ಗ್ರಾಮ ಆಡಳಿತಾಧಿಕಾರಿಗಳನ್ನು(ವಿ.ಎ) ಜನ ಹುಡುಕಾಡುವ ಸ್ಥಿತಿ ಇದ್ದು, ಇದನ್ನು ತಪ್ಪಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಅವರಿಗೆ ಕಚೇರಿ ತೆರೆಯಲಾಗುತ್ತಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ತಿಳಿಸಿದರು.
ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಗ್ರಾಮ ಆಡಳಿತಾಧಿಕಾರಿಗಳು ಎಲ್ಲಿ ಸಿಗುತ್ತಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಹೋಬಳಿ, ತಾಲ್ಲೂಕು, ಜಿಲ್ಲಾ ಕೇಂದ್ರಗಳಿಗೆ ಹುಡುಕಿಕೊಂಡು ಜನ ಹೋಗಬೇಕಿದೆ. ಆದ್ದರಿಂದ ಅವರು ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಜನರಿಗೆ ಲಭ್ಯವಾಗುವಂತೆ ಮಾಡಲಾಗುತ್ತಿದೆ’ ಎಂದರು.
‘ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಜಾಗ ಇದ್ದರೆ ಅಲ್ಲೇ ಕುರ್ಚಿ ಮತ್ತು ಟೇಬಲ್ ವ್ಯವಸ್ಥೆ ಮಾಡಬೇಕು. ಜಾಗ ಇಲ್ಲದಿದ್ದರೆ ಅದೇ ಕಚೇರಿಯಲ್ಲಿ ಸಣ್ಣ ಕೊಠಡಿ ನಿರ್ಮಿಸಿ ಅವರು ಕೂರಲು ಮತ್ತು ದಾಖಲೆಗಳನ್ನು ಸಂಗ್ರಹಿಸಿಡಲು ವ್ಯವಸ್ಥೆ ಮಾಡಬೇಕು. ಈ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳು ನೋಡಿಕೊಳ್ಳಬೇಕು. ಒಟ್ಟಾರೆಯಾಗಿ ಗ್ರಾಮ ಆಡಳಿತಾಧಿಕಾರಿಗಳು ಜನರಿಗೆ ಸುಲಭವಾಗಿ ಸಿಗಬೇಕು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.