ಮೀನಾ ನಾಗರಾಜ್
ಚಿಕ್ಕಮಗಳೂರು: ದೀಪಾವಳಿ ಹಬ್ಬ ಆಚರಣೆಗೆ ಮಾರಾಟ ಮಾಡಲು ದಾಸ್ತಾನು ಮಾಡಿರುವ ಪಟಾಕಿಗಳ ಗೋದಾಮು ಮತ್ತು ಮಳಿಗೆ ಪರಿಶೀಲನೆ ನಡೆಸಲು ಕಾರ್ಯಪಡೆ ರಚಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಎಲ್ಲಾ ತಹಶೀಲ್ದಾರ್‌ಗಳ ಅಧ್ಯಕ್ಷತೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರಸಭೆ ಆಯುಕ್ತರು, ಅಗ್ನಿ ಶಾಮಕ ಇಲಾಖೆ ಅಧಿಕಾರಿಗಳು, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ರಚನೆ ಮಾಡಿದ್ದಾರೆ.
ಪಟಾಕಿ ಬಳಸುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಗೋದಾಮುಗಳಲ್ಲಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟ ಮಾಡಲು ಅವಕಾಶ ನೀಡಬಾರದು. ಕೂಡಲೇ ಪರಿಶೀಲನೆ ನಡೆಸಿ ಅಲ್ಲಿ ಹಸಿರು ಪಟಾಕಿಯಲ್ಲದೆ ಬೇರೆ ಪಟಾಕಿ ದಾಸ್ತಾನು ಮಾಡಿದ್ದರೆ ಗೋದಾಮ ಮುಟ್ಟುಗೋಲು ಹಾಕಿಕೊಳ್ಳಬೇಕು. ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಪಟಾಕಿ ತಯಾರಿಕೆಯಲ್ಲಿ ಅನೇಕ ರಾಸಾಯನಿಕ ಬಳಕೆ ಮಾಡಲಾಗುತ್ತಿದೆ. ಪಟಾಕಿ ಸಿಡಿಸಿದ ನಂತರ ಅದರಿಂದ ಬಿಡುಗಡೆಯಾಗುವ ರಾಸಾಯನಿಕ ವಸ್ತುಗಳು ವಾತಾವರಣದಲ್ಲಿ ಬಿಡುಗಡೆಗೊಂಡು ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹಸಿರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಬೇಕು ಎಂದು ತಿಳಿಸಿದ್ದಾರೆ.
ಪಟಾಕಿ ಸಿಡಿಸಲು ಸಮಯವನ್ನೂ ಸುಪ್ರೀಂ ಕೋರ್ಟ್ ನಿಗದಿ ಮಾಡಿದೆ. ಅದರಂತೆ ರಾತ್ರಿ 8ರಿಂದ 10ರವರೆಗೆ ಮಾತ್ರ ಅವಕಾಶ ನೀಡಬೇಕು. ಎಲ್ಲಿಯೂ ಆದೇಶ ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕು ಎಂದು ಆದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.