
ಸೀತೂರು (ನರಸಿಂಹರಾಜಪುರ): ‘ಇತ್ತೀಚಿನ ವರ್ಷಗಳಲ್ಲಿ ಯುವಜನರಲ್ಲಿ ಓದುವ ಸಂಸ್ಕೃತಿ ಮರೆಯಾಗುತ್ತಿದೆ. ಯುವಕರು ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು’ ಎಂದು ನಿವೃತ್ತ ಪ್ರಾಂಶುಪಾಲ ಬೆಮ್ಮನೆ ದಯಾನಂದ್ ಹೇಳಿದರು.
ತಾಲ್ಲೂಕಿನ ಸೀತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎನ್.ಆರ್.ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ಶಿಬಿರದಲ್ಲಿ ಭಾನುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪುಸ್ತಕಗಳನ್ನು ಓದುವುದರಿಂದ ಜ್ಞಾನದ ಮಟ್ಟ ಹೆಚ್ಚಾಗುತ್ತದೆ. ಕನ್ನಡ ಭಾಷೆಯ ಬಗ್ಗೆ ಹೆಚ್ಚು ಅರಿವು ಮೂಡುತ್ತದೆ. ವಿದ್ಯಾರ್ಥಿಗಳು ಸಾಹಿತ್ಯ, ಸಾಂಸ್ಕೃತಿಕವಾಗಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದರು.
ಸೀತೂರು ವಿ.ಎಸ್.ಎಸ್.ಎನ್. ಅಧ್ಯಕ್ಷ ಬಿ.ಪಿ. ಮೋಹನ್ ಮಾತನಾಡಿ, ಚಿಕ್ಕ ಮಕ್ಕಳು ಮೊಬೈಲ್ ಗೀಳಿಗೆ ಬಲಿಯಾಗುತ್ತಿರುವುದು ವಿಷಾದಕರ. ತಂದೆ ತಾಯಿ ಮಕ್ಕಳ ಕೈಗೆ ಮೊಬೈಲ್ ನೀಡುವ ಮುನ್ನ ಜಾಗೃತೆ ವಹಿಸಬೇಕು. ಯುವಕ– ಯುವತಿಯರು ಅಗತ್ಯವಿದ್ದಷ್ಟು ಮಾತ್ರ ಮೊಬೈಲ್ ಬಳಕೆ ಮಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ದಿನಕರ ನಾಯ್ಕ ಮಾತನಾಡಿ, ಎನ್ಎಸ್ಎಸ್ ಶಿಬಿರಾರ್ಥಿಗಳು 7 ದಿನಗಳ ಶಿಬಿರದಲ್ಲಿ ಸಂವಹನ ಕೌಶಲ ಬೆಳೆಸಿಕೊಳ್ಳಬೇಕು ಎಂದರು.
ಸೀತೂರು ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷೆ ಜ್ಯೋತಿ, ಸದಸ್ಯೆ ವಿಶಾಲಾಕ್ಷಿ, ಎನ್.ಎಸ್.ಎಸ್ ಶಿಬಿರಾಧಿಕಾರಿಗಳಾದ ಸತೀಶ್, ಶಂಕರ ನಾಯ್ಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.