ADVERTISEMENT

₹ 4 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 1:59 IST
Last Updated 3 ಜುಲೈ 2022, 1:59 IST
ಕಡೂರು ತಾಲ್ಲೂಕಿನ ಹೇಮಗಿರಿಯ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಬಳಿಯಲ್ಲಿ ಗ್ರಾಮಗಳ ಸಂಪರ್ಕ ಕಲ್ಪಿಸುವ ಆಯ್ದಭಾಗಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬೆಳ್ಳಿಪ್ರಕಾಶ್ ಭೂಮಿಪೂಜೆ ನೆರವೇರಿಸಿದರು.
ಕಡೂರು ತಾಲ್ಲೂಕಿನ ಹೇಮಗಿರಿಯ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಬಳಿಯಲ್ಲಿ ಗ್ರಾಮಗಳ ಸಂಪರ್ಕ ಕಲ್ಪಿಸುವ ಆಯ್ದಭಾಗಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬೆಳ್ಳಿಪ್ರಕಾಶ್ ಭೂಮಿಪೂಜೆ ನೆರವೇರಿಸಿದರು.   

ಕಡೂರು: ಕ್ಷೇತ್ರದ ಅಭಿವೃದ್ಧಿಗಾಗಿ ನಿರಂತರ ಶ್ರಮ ನನ್ನದಾಗಿದೆ ಎಂದು ಶಾಸಕ ಬೆಳ್ಳಿಪ್ರಕಾಶ್ ತಿಳಿಸಿದರು.

ತಾಲ್ಲೂಕಿನ ಹೇಮಗಿರಿಯ ಮಲ್ಲಿಕಾರ್ಜುನಸ್ವಾಮಿ ದೇವಾಲಯದ ಬಳಿಯಲ್ಲಿ ರಾಜ್ಯ ಹೆದ್ದಾರಿ 152ರಿಂದ ವೈ. ಮಲ್ಲಾಪುರ, ವಿ.ಯರದಕೆರೆ, ನಂಜಪ್ಪನಹಳ್ಳಿ ಕೆರೆಸಂತೆ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ 206ಕ್ಕೆ ಸಂಪರ್ಕ ಕಲ್ಪಿಸುವ ಆಯ್ದ ಭಾಗಗಳ ರಸ್ತೆ ಅಭಿವೃದ್ಧಿಗಾಗಿ ಎಸ್‌ಎಚ್‌ಡಿಪಿ ಯೋಜನೆಯಡಿ ₹ 4 ಕೋಟಿ ವೆಚ್ಚದ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಗ್ರಾಮೀಣ ಭಾಗದ ವಿವಿಧ ರಸ್ತೆ ಅಭಿವೃದ್ಧಿಗಾಗಿ ಕ್ಷೇತ್ರಕ್ಕೆ ₹ 80 ಕೋಟಿ ಅನುದಾನ ಮಂಜೂರಾಗಿದ್ದು, ಗ್ರಾಮೀಣ ರಸ್ತೆಗಳ ಸುಧಾರಣೆಯಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಕ್ಷೇತ್ರದ ಶಾಶ್ವತ ನೀರಾವರಿಗಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೊಡುಗೆ ಅನನ್ಯ. ಪ್ರಸ್ತುತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನೆಮನೆಗೂ ಕುಡಿಯುವ ನೀರನ್ನು ಒದಗಿಸುವ ಯೋಜನೆ ಮಂಜೂರು ಮಾಡಿದ್ದಾರೆ. ಕ್ಷೇತ್ರದ ಜನತೆಯ ಪರವಾಗಿ ಅವರಿಗೆ ಕೃತಜ್ಞತೆ ಸಲ್ಲುತ್ತವೆ. ಕ್ಷೇತ್ರದ ಜನತೆಯ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಆತ್ಮತೃಪ್ತಿ ನನಗಿದೆ’ ಎಂದರು.

ADVERTISEMENT

ಹೇಮಗಿರಿ ಮಲ್ಲಿಕಾರ್ಜುನ ಸ್ವಾಮಿ ದೇವಾಲಯ ಸಮಿತಿಯ ಅಧ್ಯಕ್ಷ ಕಪನೇಗೌಡ ಮಾತನಾಡಿ, ಹೇಮಗಿರಿಯ ಅಭಿವೃದ್ಧಿಗಾಗಿ ಕೋಟ್ಯಂತರ ಮೊತ್ತದ ಅನುದಾನ ಬರುವಲ್ಲಿ ಶಾಸಕ ಬೆಳ್ಳಿಪ್ರಕಾಶ್ ಅವರ ಶ್ರಮಕ್ಕೆ ಕ್ಷೇತ್ರದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ತಹಶೀಲ್ದಾರ್ ಜೆ.ಉಮೇಶ್, ಇಒ ಡಾ.ಟಿ.ಎಂ. ದೇವರಾಜ್‌ನಾಯ್ಕ, ಎಇಇ ದಯಾನಂದ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾಪ್ರಸನ್ನ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಚ್.ಎಂ. ರೇವಣ್ಣಯ್ಯ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಮಲ್ಲಪ್ಪನಹಳ್ಳಿ ಶಶಿಕುಮಾರ್, ಮಾರ್ಗದ ಮಧು, ಬಿಜೆಪಿ ಮಂಡಲ ಅಧ್ಯಕ್ಷ ಬಿ.ಪಿ. ದೇವಾನಂದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.