ADVERTISEMENT

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಸಿ.ಟಿ.ರವಿ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2021, 5:14 IST
Last Updated 2 ಆಗಸ್ಟ್ 2021, 5:14 IST
 ಹಿರೇಕೊಳಲೆ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಸಿ.ಟಿ.ರವಿ
ಹಿರೇಕೊಳಲೆ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಸಿ.ಟಿ.ರವಿ   

ಚಿಕ್ಕಮಗಳೂರು: ‘ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷವು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ನೀಡಿದೆ, ಆ ಹುದ್ದೆಯನ್ನು ನಿರ್ವಹಿಸುತ್ತಿದ್ದೇನೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಪ್ರತಿಕ್ರಿಯಿಸಿದರು.

ತಾಲ್ಲೂಕಿನ ಹಿರೇಕೊಳಲೆ ಕೆರೆಗೆ ಬಾಗಿನ ಅರ್ಪಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ‘ಚಿಕ್ಕಮಗಳೂರು ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡಬೇಕು ಎಂಬುದು ಜನರ, ಕಾರ್ಯಕರ್ತರ ಅಪೇಕ್ಷೆಯಾಗಿದೆ. ಆ ವಿಚಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದಿದ್ದೇನೆ’ ಎಂದು ಉತ್ತರಿಸಿದರು.

‘ಜನರ ಹಿತದೃಷ್ಟಿ ಇಟ್ಟುಕೊಂಡು ಸಂಪುಟ ವಿಸ್ತರಣೆ ಮಾಡಬೇಕು. ಬಸವರಾಜ ಬೊಮ್ಮಾಯಿ ಅವರು ಅನುಭವಿ ಇದ್ದಾರೆ. ಆಡಳಿತ ದೃಷ್ಟಿ ಇಟ್ಟುಕೊಂಡು ಮತ್ತು ರಾಜಕೀಯ ಸಮತೋಲನ ಇಟ್ಟುಕೊಂಡು ನಿರ್ವಹಿಸುತ್ತಾರೆ ಎಂಬ ನಂಬಿಕೆ ಇದೆ. ಜನಹಿತ ಮತ್ತು ಪಕ್ಷ ಬಲವರ್ಧನೆಯ ಕೆಲಸ ಮಾಡುವವರಿಗೆ ಆದ್ಯತೆ ನೀಡಬೇಕು ’ ಎಂದು ಹೇಳಿದರು.

ADVERTISEMENT

‘ಸಂಕಷ್ಟ ಒದಗಿದರೆ ಬೆಂಬಲಕ್ಕೆ ಇರರುವುದಾಗಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಬೊಮ್ಮಾಯಿ ಅವರಿಗೆ ಭರವಸೆ ನೀಡಿರುವುದನ್ನು ಸ್ವಾಗತಿಸುತ್ತೇನೆ. ದೇಶದ ಹಿತಕ್ಕೆ ಆದ್ಯತೆ ನೀಡುವ ರಾಜಕಾರಣವೇ ಮೊದಲಾಗಬೇಕು’ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.