
ಚಿಕ್ಕಮಗಳೂರು: ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಪ್ರತಿಮ ವೀರ. ಅವರು ಯುವಕರಿಗೆ ಸ್ಫೂರ್ತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.
ತಾಲ್ಲೂಕಿನ ಮರ್ಲೆ ರಾಮನಹಳ್ಳಿಯಲ್ಲಿ ನಿರ್ಮಿಸಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಜೀವದ ಹಂಗು ತೊರೆದು ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದ ವೀರ ಸಂಗೊಳ್ಳಿ ರಾಯಣ್ಣ ಅವರು, ಜನಿಸಿದ ದಿನ ಆಗಸ್ಟ್ 15ರಂದು ದೇಶಕ್ಕೆ ಸ್ವಾತಂತ್ರ್ಯ ದಿನವಾಗಿದೆ. ವೀರ ಮರಣ ಹೊಂದಿರುವುದು ಜನವರಿ 26, ಅಂದು ಗಣರಾಜ್ಯೋತ್ಸವ ಆಚರಣೆ ಇಡೀ ದೇಶದಲ್ಲಿ ನಡೆಯುತ್ತದೆ. ಅವರ ಜನನ ಮತ್ತು ಮರಣ ಎರಡೂ ದಾಖಲೆಯ ದಿನಗಳಾಗಿವೆ ಎಂದರು.
ಪ್ರಜಾಪ್ರಭುತ್ವದಲ್ಲಿ ಪೂರ್ವಿಕರು ತಮ್ಮ ಪ್ರಾಣ ಲೆಕ್ಕಿಸದೆ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದಾರೆ. ಮಹಾತ್ಮಗಾಂಧಿ, ಪಂಡಿತ್ ಜವಾಹರಲಾಲ್ ನೆಹರು, ಸುಭಾಷ್‌ಚಂದ್ರ ಬೋಸ್, ಸರ್ದಾರ್ ವಲ್ಲಭಬಾಯಿ ಪಟೇಲ್, ಕಿತ್ತೂರು ರಾಣಿ ಚೆನ್ನಮ್ಮ, ಝಾನ್ಸಿರಾಣಿ ಲಕ್ಷ್ಮಿಬಾಯಿ ಸೇರಿ ಹಲವರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸರ್ವರಿಗೂ ಮತದಾನದ ಹಕ್ಕು ನೀಡಿದ್ದಾರೆ ಎಂದು ಹೇಳಿದರು.
ಶೋಷಿತ ವರ್ಗದ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ನೀಡಿದಾಗ ಮಾತ್ರ ಸಮಾನತೆ ಕಾಣಲು ಸಾಧ್ಯ. ಈ ನಿಟ್ಟಿನಲ್ಲಿ ಅಂದು ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಅವರು ಸಮಾಜದ ಎಲ್ಲರನ್ನು ಮೇಲೆತ್ತುವ ದೃಷ್ಟಿಯಿಂದ 20 ಅಂಶಗಳ ಕಾರ್ಯಕ್ರಮಗಳ ಮೂಲಕ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದರು. ಸರ್ವರಿಗೂ ಸಮಪಾಲು ಸಮಬಾಳು ನೀಡಿದ್ದಾರೆ ಎಂದು ಶ್ಲಾಘಿಸಿದರು.
ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಜನರ ಹಸಿವು ಮುಕ್ತಗೊಳಿಸಿದೆ. ಗೃಹಜ್ಯೋತಿ ಯೋಜನೆಯಡಿ ಶೇ 90ಕ್ಕಿಂತ ಹೆಚ್ಚು ಉಚಿತ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಶಕ್ತಿ ಯೋಜನೆ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳ ಜಾರಿಯಲ್ಲಿದ್ದು, ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಸಚಿವರು, ಶಾಲಾಭಿವೃದ್ಧಿಗೆ ₹50 ಲಕ್ಷ ನೀಡುವುದಾಗಿ ಭರವಸೆ ನೀಡಿದರು.
ಕಾಂಗ್ರೆಸ್ ಮುಖಂಡರಾದ ಗಾಯತ್ರಿ ಶಾಂತೇಗೌಡ, ಕೆ.ವಿ. ಮಂಜುನಾಥ್, ಸೇವಾದಳ ಮುಖಂಡ ಬಸವರಾಜು, ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.