ಕಡೂರು: ಮಹಿಳೆಯರ ಜೊತೆ ಸೌಜನ್ಯದಿಂದ ವರ್ತಿಸುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸಿಬ್ಬಂದಿಗೆ ಸೂಚನೆ ನೀಡಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಆಸಂದಿ ಕಲ್ಲೇಶ್ ಹೇಳಿದರು.
ಗುರುವಾರ ಕಡೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ದೊಡ್ಡ ಮಟ್ಟದ ಅನುಕೂಲವಾಗಿದೆ. ಆದರೆ, ಮಹಿಳೆಯರು ಬಸ್ ನಿಲ್ದಾಣದಲ್ಲಿ ಮಾಹಿತಿ ಕೇಳಿದಾಗ ಸಿಬ್ಬಂದಿ ಸೌಜನ್ಯ ಮೀರಿ ವರ್ತಿಸುತ್ತಾರೆಂಬ ಎಂಬ ಬಗ್ಗೆ ವ್ಯಾಪಕವಾಗಿ ದೂರುಗಳು ಬಂದಿವೆ. ಗ್ರಾಮೀಣ ಭಾಗದಲ್ಲಿ ಕೆಲವೆಡೆ ಬಸ್ ನಿಲುಗಡೆ ನೀಡುತ್ತಿಲ್ಲ. ಈ ಮನಸ್ಥಿತಿ ಬದಲಾಗಬೇಕು’ ಎಂದರು.
ಯುವನಿಧಿ ಯೋಜನೆ ಬಗ್ಗೆ ಕಾಲೇಜುಗಳಿಗೆ ತೆರಳಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು. ಅಗತ್ಯ ಬಿದ್ದರೆ ಅನುಷ್ಠಾನ ಸಮಿತಿ ಸದಸ್ಯರನ್ನೂ ಕರೆದುಕೊಂಡು ಹೋಗಬೇಕು. ಕಾಲೇಜು ಆವರಣದಲ್ಲಿ ಯುವನಿಧಿ ಬಗ್ಗೆ ಫ್ಲೆಕ್ಸ್ ಮತ್ತು ಬ್ಯಾನರ್ ಅಳವಡಿಸಿ ಎಂದು ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ಬಿ.ಬಿ.ಜಾನ್ ಅವರಿಗೆ ಸೂಚಿಸಿದರು.
ತಾಲ್ಲೂಕು ಪಂಚಾಯಿತಿ ಇಒ ಸಿ.ಆರ್.ಪ್ರವೀಣ್, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.