ಚಿಕ್ಕಮಗಳೂರು: ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕ ರಾಜ್ಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯನ್ನು ಸೆ. 15ರಿಂದ ಆರಂಭಿಸಲಾಗುತ್ತಿದ್ದು, ಎಲ್ಲ ಲಿಂಗತ್ವ ಅಲ್ಪಸಂಖ್ಯಾತರು ತಮ್ಮ ನಿಖರವಾದ ಮಾಹಿತಿ ನೀಡಿ ಸಹಕರಿಸುವಂತೆ ಸಚಿವ ಕೆ.ಜೆ.ಜಾರ್ಜ್ ಕೋರಿದರು.
ನಗರದ ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶುಕ್ರವಾರ ಸಮೀಕ್ಷೆಯ ಬಿತ್ತಿ ಪತ್ರ ಬಿಡುಗಡೆಗೊಳಿಸುವ ಮೂಲಕ ಸಮೀಕ್ಷೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯದಲ್ಲಿ ಈ ಸಮೀಕ್ಷೆ ಒಟ್ಟು 45 ದಿನಗಳ ಕಾಲ ನಡೆಯಲಿದ್ದು, ಈ ಸಮೀಕ್ಷೆಯಿಂದ ಲಿಂಗತ್ವ ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಮಾಹಿತಿಯನ್ನು ಸಂಗ್ರಹಿಸುವುದರಿಂದ ಈ ಸಮುದಾಯಕ್ಕೆ ಪುನರ್ ವಸತಿ ಕಲ್ಪಿಸಲು ಸಹಾಯಕವಾಗುವುದು ಎಂದು ಅವರು ತಿಳಿಸಿದರು.
ಈ ವೇಳೆ ಶಾಸಕರಾದ ಟಿ.ಡಿ.ರಾಜೇಗೌಡ, ಎಚ್.ಡಿ.ತಮ್ಮಯ್ಯ, ನಯನಾ ಮೋಟಮ್ಮ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಸಿ.ಟಿ.ರವಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ ವೈ.ಆಲದಾರ್ತಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.