
ಚಿಕ್ಕಮಗಳೂರು: ಲಭ್ಯ ಇರುವ ₹10.30 ಕೋಟಿ ಅನುದಾನದಲ್ಲಿ ವೈದ್ಯಕೀಯ ಕಾಲೇಜಿಗೆ ಕುಡಿಯುವ ನೀರು ಮತ್ತು ವಿದ್ಯುತ್ ಸಮಸ್ಯೆ ಶೀಘ್ರವೇ ಪೂರ್ಣಗೊಳಿಸಲು ತಿಳಿಸಲಾಗಿದೆ ಎಂದು ವಿಧಾನ ಪರಿಷತ್ ಅರ್ಜಿಗಳ ಸಮಿತಿ ಅಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಹೇಳಿದರು.
ವೈದ್ಯಕೀಯ ಕಾಲೇಜು ಸೇರಿದಂತೆ ಜಿಲ್ಲೆಯ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ನಂತರ ಅಧಿಕಾರಿಗಳ ಸಭೆ ನಡೆಸಿದ ಅವರು, ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.
‘ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ್ದೇವೆ. ಸಮಸ್ಯೆ ಇರುವುದು ನಿಜ, ಸಮೀಪದಲ್ಲಿ ಕೆರೆ ಅಥವಾ ನೀರಿನ ಮೂಲ ಇರುವ ಕಡೆ 2 ಕೊಳವೆಬಾವಿ ಕೊರೆಸಿ ತಾತ್ಕಾಲಿಕ ನೀರು ಪೂರೈಸಬೇಕು. ವಿದ್ಯುತ್ ಸಂಪರ್ಕ ಕಲ್ಪಿಸಲು ಇರುವ ಅಡಚಣೆ ಬಗೆಹರಿಸಿ ಶೀಘ್ರದಲ್ಲಿ ಸಂಪರ್ಕ ಕಲ್ಪಿಸಬೇಕು. ಸದ್ಯಕ್ಕೆ ಇಲ್ಲಿರುವ ₹10.30 ಕೋಟಿ ಅನುದಾನವನ್ನು ಬಳಕೆ ಮಾಡಿಕೊಳ್ಳಲು ಸೂಚಿಸಲಾಗಿದೆ’ ಎಂದರು.
ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಾಣವಾಗುತ್ತಿರುವ ವಸತಿಗೃಹ ಕಾಮಗಾರಿ ಪೂರ್ಣಕ್ಕೆ ಇರುವ ಸಮಸ್ಯೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಇದಕ್ಕೆ ಸಾಕಷ್ಟು ಅನುದಾನ ಅಗತ್ಯ ಇರುವುದರಿಂದ ಸದ್ಯದಲ್ಲೇ ಆರಂಭವಾಗುವ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಕಡೂರು ತಾಲ್ಲೂಕಿನ ಎಮ್ಮೆದೊಡ್ಡಿ ಸುತ್ತಮುತ್ತ ಇರುವ 22 ಗ್ರಾಮಗಳ ಜನ ವಾಸಿಸುವ ಭೂಮಿ ಈಗ ಅರಣ್ಯ ಇಲಾಖೆ ಹೆಸರಿನಲ್ಲಿದೆ. ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಅರಣ್ಯ ಇಲಾಖೆ ಕಾರ್ಯದರ್ಶಿ ಮನೋಜ್‌ಕುಮಾರ್ ಅವರು ಸಭೆಯಲ್ಲಿ ಭಾಗವಹಿಸಿದ್ದರು ಎಂದು ವಿವರಿಸಿದರು.
ಎಮ್ಮೆದೊಡ್ಡಿ ಸೇರಿ 22 ಗ್ರಾಮಗಳ 13 ಸಾವಿರ ಎಕರೆಗೆ ಬದಲಿಯಾಗಿ ಭೂಮಿ ನೀಡಲು ಗುರುತಿಸಲಾಗಿದೆ ಎಂಬ ಮಾಹಿತಿಯನ್ನು ಜಿಲ್ಲಾಧಿಕಾರಿ ನೀಡಿದ್ದಾರೆ. ಪರ್ಯಾಯ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಿದರೆ ಅಲ್ಲಿನ ಜನರ ಸಮಸ್ಯೆ ಪರಿಹಾರವಾಗಲಿದೆ ಎಂದರು.
‘ಕಡೂರು, ಚಿಕ್ಕಮಗಳೂರು ಮತ್ತು ತರೀಕೆರೆ ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸಿರುವ ಬಹುಗ್ರಾಮ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಚರ್ಚಿಸಲಾಯಿತು. ಅಲ್ಲಿನ ಕೆಲವು ಕಡೆ ಪೈಲ್‌ಲೈನ್ ಮತ್ತಿತರೆ ಕಾಮಗಾರಿ ನಡೆಸಲು ಅರಣ್ಯ ಇಲಾಖೆ ಎನ್‌ಒಸಿ ಬೇಕಿದೆ. ಅದಕ್ಕೆ ಅರ್ಜಿ ಹಾಕಿದ್ದಾರೆ. ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇವೆ’ ಎಂದು ತಿಳಿಸಿದರು.
ಭದ್ರಾ ಉಪಕಣಿವೆ ಯೋಜನೆಯ ಭೂಮಿ ಪೂಜೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯದಲ್ಲೇ ನೆರವೇರಿಸಲಿದ್ದಾರೆ ಎಂದು ಹೇಳಿದರು. ಸಮಿತಿ ಸದಸ್ಯರಾದ ಯು.ಬಿ.ಬಣಕರ್, ಎಚ್.ಡಿ.ತಮ್ಮಯ್ಯ, ಕೆ.ಎಸ್.ಆನಂದ್,ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.