ADVERTISEMENT

ಪರಿಶಿಷ್ಟರ ಮೀಸಲು ಅನುದಾನ ದುರ್ಬಳಕೆ: ಬಿಎಸ್‌ಪಿ ಪ್ರತಿಭಟನೆ

ಆಜಾದ್ ಪಾರ್ಕ್ ವೃತ್ತದಲ್ಲಿ 26 ರಂದು ಪ್ರತಿಭಟನೆ, ವಿವಿಧ ಸಂಘಟನೆಗಳ ಬೆಂಬಲ

​ಪ್ರಜಾವಾಣಿ ವಾರ್ತೆ
Published 24 ಜುಲೈ 2024, 14:02 IST
Last Updated 24 ಜುಲೈ 2024, 14:02 IST
ಕೆ.ಬಿ.ಸುಧಾ
ಕೆ.ಬಿ.ಸುಧಾ   

ಚಿಕ್ಕಮಗಳೂರು: ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಯ ವಿಶೇಷ ಮೀಸಲು ಅನುದಾನ ದುರ್ಬಳಕೆ ಮಾಡಿಕೊಂಡಿರುವುದನ್ನು ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಜುಲೈ 26ರಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ರಾಜ್ಯ ಘಟಕದ ಕಾರ್ಯದರ್ಶಿ ಕೆ.ಬಿ.ಸುಧಾ ಹೇಳಿದರು.

ರಾಜ್ಯದಲ್ಲಿ ದಲಿತರು, ಹಿಂದುಳಿದವರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಈಗ ಸಮುದಾಯದ ಏಳಿಗೆಗೆ ಮೀಸಲಿಟ್ಟಿದ್ದ ವಿಶೇಷ ಅನುದಾನವನ್ನು(ಎಸ್‌ಸಿಎಸ್‌ಪಿ–ಟಿಎಸ್‌ಪಿ) ನಿಯಮ ಬಾಹಿರವಾಗಿ ದುರ್ಬಳಕೆ ಮಾಡಿಕೊಂಡು ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳಿಗೆ ಅನ್ಯಾಯ ಮಾಡಿದೆ. ಇದನ್ನು ಖಂಡಿಸಿ ಹಣವನ್ನು ವಾಪಸ್ ಸಮುದಾಯಗಳಿಗೆ ಹಂಚಿಕೆ ಮಾಡುವಂತೆ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಹೇಳಿದರು.

ಪರಿಶಿಷ್ಟ ಸಮುದಾಯಗಳ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಶೈಕ್ಷಣಿಕ ಪ್ರೋತ್ಸಾಹಧನಕ್ಕೂ ನಿಯಮಾವಳಿ ರೂಪಿಸಿ ಕತ್ತರಿ ಹಾಕಲು ಮುಂದಾಗಿದೆ. ಅನುದಾನ ಕಿತ್ತುಕೊಂಡು ಯೋಜನೆ, ಸವಲತ್ತು ಕಸಿಯುವ ಯತ್ನಕ್ಕೆ ಸರ್ಕಾರ ಮುಂದಾಗಿದೆ ಎಂದು ಕಿಡಿಕಾರಿದರು.

ADVERTISEMENT

ಬಿಎಸ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ.ರಾಧಾಕೃಷ್ಣ ಮಾತನಾಡಿ, ಜನಸಂಖ್ಯೆಗೆ ಅನುಗುಣವಾಗಿ ಇರುವ ಪರಿಶಿಷ್ಟರ ಮೀಸಲು ಅನುದಾನವನ್ನು ಅನ್ಯ ಉದ್ದೇಶಕ್ಕೆ ಬಳಸುವಂತಿಲ್ಲ ಎಂಬ ಕಾಯ್ದೆ ಇದೆ. ಆದರೆ, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಸುಮಾರು ₹25 ಸಾವಿರ ಕೋಟಿ ದುರ್ಬಳಕೆ ಮಾಡಿಕೊಂಡು ದಲಿತರ ಬುಡಕ್ಕೆ ಕೊಡಲಿ ಪೆಟ್ಟು ನೀಡಿದೆ ಎಂದು ವಾಗ್ದಾಳಿ ನಡೆಸಿದರು.

ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ. 2014ರಿಂದ ಈವರೆಗೆ ₹70 ಸಾವಿರ ಕೋಟಿ ಪರಿಶಿಷ್ಟರ ಮೀಸಲು ಅನುದಾನದಲ್ಲಿ ಶೇ 10ರಷ್ಟು ಮಾತ್ರ ಖರ್ಚು ಮಾಡಿದೆ. ಈ ಮೂಲಕ ಸಮುದಾಯಕ್ಕೆ ದ್ರೋಹ ಬಗೆದಿದೆ ಎಂದು ಖಂಡಿಸಿದರು.

ಸರ್ಕಾರದ ಈ ನಿರ್ಧಾರವನ್ನು ಖಂಡಿಸಿ ರಾಜ್ಯವ್ಯಾಪಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದ್ದು, ರೈತ ಸಂಘ, ದಲಿತ ಸಂಘರ್ಷ ಸಮಿತಿ, ಪ್ರಗತಿಪರ ಸಂಘಟನೆಗಳು ಬೆಂಬಲ ನೀಡಲಿವೆ. ದುರ್ಬಳಕೆ ಮಾಡಿಕೊಂಡಿರುವ ಹಣವನ್ನು ಸರ್ಕಾರ ಸಮುದಾಯದ ಏಳಿಗೆಗೆ ವಿನಿಯೋಗಿಸಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಸ್ವಾವಲಂಬಿ ಸಾರಥಿ ಯೋಜನೆಯಡಿ ಪರಿಶಿಷ್ಟ ಸಮುದಾಯದ ನಿರುದ್ಯೋಗಿ ಯುವಕರಿಗೆ ನೀಡುವ ವಾಹನ ವಿತರಣೆ ಸವಲತ್ತುಗಳಲ್ಲಿಯೂ ತಾರತಮ್ಯ ನಡೆಯುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿಯೂ ದೊಡ್ಡ ಹಗರಣ ನಡೆದಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ರಾಜ್ಯ ಘಟಕದ ಕಾರ್ಯದರ್ಶಿ ಪರಮೇಶ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ಕೆ.ಮಂಜುನಾಥ್‌, ಉಪಾಧ್ಯಕ್ಷೆ ಮಂಜುಳಾ, ಗಂಗಾಧರ್, ಕುಮಾರ್, ರತ್ನಮ್ಮ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.