
ಚಿಕ್ಕಮಗಳೂರು: ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಜನಪರ ಕೆಲಸ ಮಾಡದಿದ್ದರೆ ಜನ ತೊಂದರೆ ಅನುಭವಿಸಲಿದ್ದಾರೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಶ್ರೀನಿವಾಸ್ ನಗರದಲ್ಲಿ ₹30 ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಮಾತನಾಡಿದ ಅವರು, ‘ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಎಸ್.ಎಲ್.ಬೋಜೇಗೌಡ ಸೇರಿ ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದೇವೆ’ ಎಂದರು.
ನಗರದ ರೈಲ್ವೆ ನಿಲ್ದಾಣ ರಸ್ತೆ, ದೀಪ ನರ್ಸಿಂಗ್ ಹೋಂ ರಸ್ತೆ, ನಾಯ್ಡು ರಸ್ತೆ, ಜಿಲ್ಲಾ ಒಕ್ಕಲಿಗರ ಸಮುದಾಯ ಭವನ ಎದುರಿನ ರಸ್ತೆ ಸೇರಿ ಬಹುತೇಕ ರಸ್ತೆಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
‘ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕಾರಣ ಮಾಡುತ್ತೇವೆ. ಗೆದ್ದ ನಂತರ ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ರಾಜಕೀಯ ಮಾಡದೆ ಮೂವರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ’ ಎಂದರು.
ಸೈಕಲ್ ತುಳಿ, ಸಮಸ್ಯೆ ತಿಳಿ ಕಾರ್ಯಕ್ರಮದ ಮೂಲಕ ಜನರ ಸಮಸ್ಯೆಗೆ ಸ್ಪಂದಿಸುತ್ತಿದ್ದೇವೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ ಕೆಲಸ ಮಾಡಬೇಕೆಂದು ಸೂಚಿಸಿದರು.
ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ‘ವಿಶೇಷ ಅನುದಾನ ತಂದು ಶ್ರೀನಿವಾಸ್ ನಗರದ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿರುವ ಶಾಸಕ ಎಚ್.ಡಿ ತಮ್ಮಯ್ಯ ಅವರ ಕಾರ್ಯ ಶ್ಲಾಘನೀಯ’ ಎಂದರು.
₹20 ಕೋಟಿ ವೆಚ್ಚದಲ್ಲಿ ನಗರದಲ್ಲಿ ಸುಸಜ್ಜಿತ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿರುವ ಶಾಸಕರ ಕಾರ್ಯ ಮೆಚ್ಚುವಂತದ್ದು ಎಂದು ಹೇಳಿದರು.
ನಗರಸಭೆ ಉಪಾಧ್ಯಕ್ಷೆ ಲಲಿತಾ ರವಿನಾಯಕ್, ಸದಸ್ಯ ಪರಮೇಶ್ ರಾಜ್ ಅರಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ ಮಂಜೇಗೌಡ, ನಗರ ಘಟಕ ಅಧ್ಯಕ್ಷ ತನುಜ್ ನಾಯ್ಡ್, ಹಿರೇಮಗಳೂರು ರಾಮಚಂದ್ರ, ಮುಖಂಡರಾದ ರೇಖಾ ಜಯಕುಮಾರ್, ವೀಣಾ ಶೆಟ್ಟಿ, ಶಿವಪ್ರಸಾದ್, ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.