
ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ನಿಂತ ನೀರಾಗಿದೆ. ಶಾಸಕರು ಕೇವಲ ಮಾತಿನಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಜನಸಾಮಾನ್ಯರ ಸಮಸ್ಯೆಗಳಿಗೂ ತಮಗೂ ಸಂಬಂಧವೇ ಇಲ್ಲ ಎನ್ನುವ ರೀತಿ ವರ್ತಿಸುತ್ತಿದ್ದಾರೆ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಹೇಳಿದರು.
ಭೀಕರ ಅತಿವೃಷ್ಟಿಯಿಂದ ಸಂತ್ರಸ್ತರಾಗಿರುವ ಮಲೆಮನೆ, ಮಧುಗುಂಡಿ ಗ್ರಾಮಗಳ ಜನರಿಗೆ ಪರಿಹಾರ ಕೊಡಿಸುವಲ್ಲಿ ಶಾಸಕರು ವಿಫಲರಾಗಿದ್ದಾರೆ. ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಸಂತ್ರಸ್ತರಿಗೆ ಬದಲಿ ಭೂಮಿ ಗುರುತಿಸುವ ಪ್ರಕ್ರಿಯೆ ನಡೆದಿತ್ತು. ಅದನ್ನು ಮುಂದಕ್ಕೆ ಕೊಂಡೊಯ್ಯುವ ಕೆಲಸ ಶಾಸಕರು ಮಾಡಲಿಲ್ಲ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಆನೆ ದಾಳಿ ಸೇರಿದಂತೆ ಕಾಡು ಪ್ರಾಣಿಗಳ ಹಾವಳಿಯಿಂದ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳು ಕ್ಷೇತ್ರದಲ್ಲಿದ್ದ ದಿನವೇ ಒಬ್ಬ ವ್ಯಕ್ತಿ ಆನೆ ದಾಳಿಯಿಂದ ಮೃತಪಟ್ಟಿದ್ದರು. ಆದರೂ ಸರ್ಕಾರ ಮಾನವ-ಪ್ರಾಣಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲಿಲ್ಲ. ಶಾಸಕರು ಈ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡ ತಂದು ಪರಿಹಾರ ತರುವಲ್ಲಿ ವಿಫಲರಾಗಿದ್ದಾರೆ ಎಂದರು.
‘ಸಾವು-ನೋವು ಸಂಭವಿಸಿದಾಗ ಮಾತ್ರ ಅರಣ್ಯ ಸಚಿವರು ಆದೇಶ ಹೊರಡಿಸುತ್ತಾರೆ. ಆದರೆ, ಕಾರ್ಯರೂಪಕ್ಕೆ ಬರುವುದೇ ಇಲ್ಲ. ಆನೆ ಹಾವಳಿ ತಡೆಗೆ ಬೇಲಿ ನಿರ್ಮಿಸುವುದು. ಆನೆ ಶಿಬಿರ ಸ್ಥಾಪಿಸುವುದು ಸೇರಿದಂತೆ ಹಲವು ಆದೇಶಗಳು ಈ ರೀತಿ ನನೆಗುದಿಗೆ ಬಿದ್ದಿವೆ’ ಎಂದು ಹೇಳಿದರು.
ಹಿಂದಿನ ಸರ್ಕಾರದಲ್ಲೇ ಕಳಸ ಪಟ್ಟಣವನ್ನು ತಾಲ್ಲೂಕು ಕೇಂದ್ರವಾಗಿ ಘೋಷಿಸಲಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದು ಮೂರು ವರ್ಷ ಕಳೆದರೂ ಯಾವುದೇ ಮೂಲ ಸೌಕರ್ಯ ಕಲ್ಪಿಸಿಲ್ಲ. ತಾಲ್ಲೂಕು ಕಚೇರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿರುವುದಾಗಿ ಹೇಳಲಾಗುತ್ತಿದ್ದರೂ ಕಾಮಗಾರಿಗೆ ಚಾಲನೆ ಸಿಕ್ಕಿಲ್ಲ ಎಂದರು.
ತೀವ್ರ ಹಾಳಾಗಿದ್ದ ಕ್ಷೇತ್ರದ ರಸ್ತೆಗಳಲ್ಲಿ ಗುಂಡಿ ಮುಚ್ಚುವ ಕೆಲಸ ಆರಂಭಿಸಲಾಗಿದೆ. ಆದರೂ, ತೇಪೆ ಹಚ್ಚುವ ಕೆಲಸ ಮಾತ್ರ ನಡೆದಿದೆ. ಅವೈಜ್ಞಾನಿಕ ಹಾಗೂ ಕಳಪೆ ಕೆಲಸ ನಡೆದಿದೆ. ಅಪಾರ ಪ್ರಮಾಣದ ಅಕ್ರಮಗಳು ನಡೆದಿದ್ದರೂ ಶಾಸಕರು ಚಕಾರವೆತ್ತದೆ ಇರುವುದು ಅನುಮಾನಗಳಿಗೆ ಕಾರಣವಾಗಿದೆ. ಕಳಸದ ಸಂಸೆ ಗ್ರಾಮದಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆ ಕಾಮಗಾರಿ ಇದಕ್ಕೊಂದು ಉದಾಹರಣೆ ಎಂದು ತಿಳಿಸಿದರು.
ಅಭಿವೃದ್ಧಿ ವಿಚಾರದಲ್ಲಿ ಶಾಸಕರು ಶೂನ್ಯ ಸಾಧನೆ ಮಾಡಿದ್ದಾರೆ. ಉಳಿದಿರುವ ಎರಡು ವರ್ಷಗಳಲ್ಲಾದರೂ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಅವರು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಮಂಜುನಾಥ್, ಯುವಮೋರ್ಚಾ ಕಾರ್ಯದರ್ಶಿ ಲಿಖಿತ್, ದೀಕ್ಷಿತ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.