ADVERTISEMENT

‘ನಿಯಮಿತ ಆರೋಗ್ಯ ತಪಾಸಣೆ ಅಗತ್ಯ’

ನ್ಯಾಯಾಂಗ ಇಲಾಖೆ ಸಿಬ್ಬಂದಿಗೆ ಆರೋಗ್ಯ ತಪಾಸಣಾ ಶಿಬಿರ

​ಪ್ರಜಾವಾಣಿ ವಾರ್ತೆ
Published 11 ಜುಲೈ 2025, 5:48 IST
Last Updated 11 ಜುಲೈ 2025, 5:48 IST
ನರಸಿಂಹರಾಜಪುರದ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ನಡೆದ ಆರೋಗ್ಯ ತಪಾಸಣಾ ಶಿಬಿರಕ್ಕೆ ಹಿರಿಯ ಸಿವಿಯಲ್ ನ್ಯಾಯಾಧೀಶ ಕೆ.ಟಿ.ರಘುನಾಥ್ ಗೌಡ ಚಾಲನೆ ನೀಡಿದರು
ನರಸಿಂಹರಾಜಪುರದ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ನಡೆದ ಆರೋಗ್ಯ ತಪಾಸಣಾ ಶಿಬಿರಕ್ಕೆ ಹಿರಿಯ ಸಿವಿಯಲ್ ನ್ಯಾಯಾಧೀಶ ಕೆ.ಟಿ.ರಘುನಾಥ್ ಗೌಡ ಚಾಲನೆ ನೀಡಿದರು   

ನರಸಿಂಹರಾಜಪುರ: ‘ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಒತ್ತಡದ ಬದುಕನ್ನು ನಡೆಸುತ್ತಿದ್ದು, ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಇದರಿಂದ ಅನೇಕ ಆರೋಗ್ಯ ಸಮಸ್ಯೆಗಳು ತಲೆದೋರುತ್ತಿದ್ದು, ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಹಿರಿಯ ಸಿವಿಯಲ್ ನ್ಯಾಯಾಧೀಶ ಕೆ.ಟಿ.ರಘುನಾಥ್ ಗೌಡ ಹೇಳಿದರು.

ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ಆರೋಗ್ಯ ಇಲಾಖೆ, ವಕೀಲರ ಸಂಘ ಆಶ್ರಯದಲ್ಲಿ ನಡೆದ ನ್ಯಾಯಾಂಗ ಇಲಾಖೆ ಸಿಬ್ಬಂದಿಗೆ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಿವಿಲ್ ನ್ಯಾಯಾಲಯ ಕಿರಿಯ ವಿಭಾಗದ ನ್ಯಾಯಾಧೀಶ ಆರ್.ಎಸ್.ಜೀತು ಮಾತನಾಡಿ, ‘ನ್ಯಾಯಾಂಗ ಇಲಾಖೆ ಸಿಬ್ಬಂದಿ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸದೆ ಇರುವುದು ಅನೇಕ ಸಮಸ್ಯೆಗಳಿಗೆ ಕಾರಣವಾಗಿದೆ. ಈ ರೀತಿಯ ಆರೋಗ್ಯ ಶಿಬಿರ ನಿರಂತರವಾಗಿ ನಡೆಯುವುದರಿಂದ ಅನೇಕ ಕಾಯಿಲೆಗಳನ್ನು ಪ್ರಾರಂಭದಲ್ಲಿ ಕಂಡುಹಿಡಿದು, ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ’ ಎಂದರು.

ADVERTISEMENT

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ನರಸಿಂಹಮೂರ್ತಿ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಹೃದಯಾಘಾತ, ಕ್ಯಾನ್ಸರ್‌ನಂತಹ ರೋಗಗಳಿಂದ ಮರಣ ಹೊಂದುವರ ಸಂಖ್ಯೆ ಹೆಚ್ಚಳವಾಗಿದ್ದು, ಸಾರ್ವಜನಿಕರು ಆರೋಗ್ಯ ಕಾಳಜಿ ವಹಿಸಬೇಕು. ಧೂಮಪಾನ, ಮದ್ಯಪಾನ ತ್ಯಜಿಸುವುದು, ವ್ಯಾಯಾಮ ಮಾಡುವುದು, ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯಕ’ ಎಂದರು.

ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಚ್.ಎ.ಸಾಜು, ಸರ್ಕಾರಿ ವಕೀಲ ಗದಿಗಪ್ಪ, ದಂತ ವೈದ್ಯಾಧಿಕಾರಿ ಶ್ರೀನಿವಾಸ್, ವೈದ್ಯ ಡಾ.ನಿಶಾಲ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ, ಛಾಯ ಇದ್ದರು. 43 ಜನ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.