ನರಸಿಂಹರಾಜಪುರ: ‘ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಕನ್ನಡದ ಮನಸ್ಸನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದೆ’ ಎಂದು ಜ್ವಾಲಾಮಾಲಿನಿ ಬಾಲಿಕಾ ಪ್ರೌಢಶಾಲೆಯ ವೃತ್ತಿ ಶಿಕ್ಷಕ ಗುಣಪಾಲ್ ಜೈನ್ ಹೇಳಿದರು.
ಪಟ್ಟಣದ ಬಸ್ತಿಮಠದ ಮಹಾವೀರ ಭವನದಲ್ಲಿ ಗುರುವಾರ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ, ಜ್ವಾಲಾಮಾಲಿನಿ ಬಾಲಿಕಾ ಪ್ರೌಢಶಾಲೆ ಹಾಗೂ ಜ್ವಾಲಾಮಾಲಿನಿ ಜೇಸಿ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಮಕ್ಕಳಿಗೆ ಕನ್ನಡ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದಿಂದ ಹಲವು ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸ ಮಾಡಲಾಗುತ್ತಿದೆ. ಮಕ್ಕಳಲ್ಲಿ ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಅಭಿಮಾನ ಬೆಳೆಸುವ ಕೆಲಸವಾಗುತ್ತಿದೆ. ಸಾಹಿತ್ಯ ಪರಿಷತ್ತಿನಲ್ಲಿ ಯುವ ಘಟಕ, ಮಹಿಳಾ ಘಟಕಗಳು ಪ್ರಾರಂಭವಾಗಿದ್ದು ಸಾಹಿತ್ಯದ ಬೇರುಗಳು ಗಟ್ಟಿಯಾಗುತ್ತಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯ ನಂಜುಂಡಸ್ವಾಮಿ ಮಾತನಾಡಿ, ‘ಮಕ್ಕಳು ಪ್ರತಿನಿತ್ಯ ದಿನಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಕನ್ನಡ ಭಾಷಾ ಜ್ಞಾನ ಹೆಚ್ಚಾಗಲಿದೆ. ಪ್ರಚಲಿತ ಸುದ್ದಿಗಳು, ರಾಜ್ಯ, ದೇಶದ ಸುದ್ದಿಗಳು ತಿಳಿಯಲಿದ್ದು, ಜ್ಞಾನದ ಮಟ್ಟ ಹೆಚ್ಚಾಗಲಿದೆ. ಅಲ್ಲದೆ ಕನ್ನಡ ಸಾಹಿತ್ಯ ಪರಿಷತ್‌ನ ಕಾರ್ಯಕ್ರಮಗಳಲ್ಲೂ ಭಾಗವಹಿಸಬೇಕು’ ಎಂದರು.
ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎಚ್. ಪೂರ್ಣೇಶ್ ಮಾತನಾಡಿ, ‘ಕಸಾಪದಿಂದ ಮಕ್ಕಳಲ್ಲಿ ಸಾಹಿತ್ಯದ ಬಗ್ಗೆ ಆಸಕ್ತಿ ಬರುವ ಹಲವು ಕಾರ್ಯಕ್ರಮ ರೂಪಿಸಲಾಗಿದ್ದು, ಯುವಜನರನ್ನು ಸಾಹಿತ್ಯ ಪರಿಷತ್‌ನ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹ ನೀಡಲಾಗುತ್ತಿದೆ. ನೂರಾರು ವರ್ಷಗಳ ಇತಿಹಾಸವುಳ್ಳ ಕನ್ನಡ ಸಾಹಿತ್ಯ ಪರಿಷತ್ ಚಟುವಟಿಕೆ ಮನೆ ಮನೆಗೆ ತಲುಪಬೇಕು ಎಂಬುದೇ ನಮ್ಮ ಉದ್ದೇಶ’ ಎಂದರು.
ಜ್ವಾಲಾಮಾಲಿನಿ ಬಾಲಿಕಾ ಪ್ರೌಢಶಾಲೆ ಶಿಕ್ಷಣ ಸಂಸ್ಥೆಯ ಹಿರಿಯ ಸದಸ್ಯೆ ಮಾಲಿನಿ ದೊಡ್ಡಣ್ಣನವರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜ್ವಾಲಾಮಾಲಿನಿ ಬಾಲಿಕಾ ಪ್ರೌಢಶಾಲೆಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸುನಿಲ್ ಕುಮಾರ್, ಜೇಸಿ ಸಂಸ್ಥೆ ಅಧ್ಯಕ್ಷ ಸಾರ್ಥಕ ಗೌಡ, ಕಾರ್ಯದರ್ಶಿ ಮಿಥುನ್ ಗೌಡ, ಜ್ವಾಲಾಮಾಲಿನಿ ಬಾಲಿಕಾ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಸುಜಾತಾ ಕುಮಾರಿ, ಸಾಹಿತ್ಯ ಪರಿಷತ್ ಕಸಬಾ ಹೋಬಳಿ ಘಟಕದ ಅಧ್ಯಕ್ಷ ಉದಯಗಿಲ್ಲಿ, ಯುವ ಘಟಕದ ಅಧ್ಯಕ್ಷ ಸತ್ಯಪ್ರಕಾಶ್ ಇದ್ದರು.
ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡದಲ್ಲಿ 125ಕ್ಕೆ 123 ಅಂಕ ಪಡೆದ ಜ್ವಾಲಾಮಾಲಿನಿ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ಬ್ಲಸ್ಸಿ ಥೋಮಸ್ ಹಾಗೂ ಸಿ.ನವ್ಯ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಬಳಿಕ, ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಜರುಗಿತು. ವಿಜೇತರಿಗೆ ಬಹುಮಾನ ನೀಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.