
ನರಸಿಂಹರಾಜಪುರ: ‘ದೇಶದಲ್ಲಿ ಪದೇಪದೇ ಉಗ್ರರ ದಾಳಿಯಾಗುತ್ತಿದ್ದರೂ, ಅದನ್ನು ತಡೆಯುವಲ್ಲಿ ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ’ ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಘಟಕದಿಂದ ಬುಧವಾರ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಹಿಂದೆಂದಿಗಿಂತಲೂ ಹೆಚ್ಚಾಗಿ ಉಗ್ರರ ದಾಳಿಯಾಗುತ್ತಿದೆ. ಕಾಶ್ಮೀರದ ಕಹಿ ಘಟನೆ ಮರೆಯುವ ಮುನ್ನವೇ ನವದೆಹಲಿಯ ಕೆಂಪು ಕೋಟೆಯ ಕೂಗಳತೆಯ ದೂರದಲ್ಲಿ ಉಗ್ರರು ಬಾಂಬ್ ಸ್ಫೋಟಿಸಿ, ಅಮಾಯಕ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯನ್ನು ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದ ಮೇಲೆ ಉಗ್ರರ ದಾಳಿಯಾಗುತ್ತಿದೆ. 2019ರ ಫೆಬ್ರುವರಿ 14ರಂದು ಬಿಗಿಭದ್ರತೆ ಇರುವ ಪ್ರದೇಶಕ್ಕೆ 800 ಕೆ.ಜಿಗೂ ಅಧಿಕ ತೂಕದ ಗ್ರೇನೈಡ್‌ಗಳನ್ನು ತಂದು ಸೈನಿಕರ ವಾಹನ ಗುರಿಯಾಗಿಸಿ ದಾಳಿ ಮಾಡಲಾಗಿತ್ತು. 2025ರ ಏ. 22ರಂದು ಕಾಶ್ಮೀರದ ಪಹಲ್ಗಾಮ್‍ನಲ್ಲಿ ನಾಗರಿಕರನ್ನು ಗುರಿಯಾಗಿಸಿಕೊಂಡಿದ್ದ ಉಗ್ರರು ಗುಂಡಿನ ಸುರಿಮಳೆಗೈದು, 26 ಅಮಾಯಕ ನಾಗರಿಕರನ್ನು ಹತ್ಯೆಗೈದಿದ್ದರು. ಇದೀಗ ದೇಶದ ರಾಜಧಾನಿಯಲ್ಲೇ ಉಗ್ರರ ದಾಳಿಯಾಗಿದ್ದು, ಈ ಘಟನೆಯಿಂದ ಕೇಂದ್ರ ಸರ್ಕಾರ ನಾಗರಿಕರ ಸುರಕ್ಷತೆಗಾಗಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಅಮಿತ್ ಶಾ ಅವರು ಸಚಿವರಾಗಿ ತಮ್ಮ ಜವಾಬ್ದಾರಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎನ್ನುವುದನ್ನು ಸಾಬೀತು ಪಡಿಸಿದೆ ಎಂದು ದೂರಿದ್ದಾರೆ.
2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪುಲ್ವಾಮಾ ದಾಳಿ ನಡೆದಿತ್ತು. ನಂತರ ಮಣಿಪುರದಲ್ಲಿ, ಪ್ರಸ್ತುತ ಬಿಹಾರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಬಿಹಾರ ಚುನಾವಣೆಯಲ್ಲಿ ಎನ್‌ಡಿಎಗೆ ಮುಖಭಂಗವಾಗುವುದು ಖಚಿತ ಎಂದು ಸಮೀಕ್ಷೆಗಳು ಹೇಳಿದ ಬೆನ್ನಲ್ಲೇ ದಾಳಿ ನಡೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಆರೋಪಿಸಲಾಗಿದೆ.
ರಾಷ್ಟ್ರಪತಿ ಅವರು, ಅಮಿತ್ ಶಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ದಾಳಿಯ ತನಿಖೆಯನ್ನು ಪಾರದರ್ಶಕವಾಗಿ ನಡೆಸಬೇಕು. ದೇಶದ ಮತ್ತು ನಾಗರಿಕರ ಸುರಕ್ಷತೆಗಾಗಿ ಉಗ್ರರು ದೇಶದೊಳಗೆ ಪ್ರವೇಶಿಸದಂತೆ ರಕ್ಷಣಾ ವ್ಯವಸ್ಥೆಯನ್ನು ಬಲಗೊಳಿಸಲು ಕೇಂದ್ರ ಸರ್ಕಾರಕ್ಕೆ ಕಟ್ಟುನಿಟ್ಟಿನ ಆದೇಶ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭ ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ರತನ್ ಗೌಡ ಅರಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮಂಜೇಶ್ ಬೀಳುವ, ಅಕ್ಸಿರ, ಯುವ ಕಾಂಗ್ರೆಸ್ ಮುಖಂಡರಾದ ವಿಜಯ್, ವಿವೇಕ್, ಕಾಂಗ್ರೆಸ್ ಮುಖಂಡ ಮಹೇಶ್ ಕಟ್ಟಿನ ಮನೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.