ADVERTISEMENT

ಚಿಕ್ಕಮಗಳೂರು: ಜಂತು ಹುಳು ನಿವಾರಣಾ ಕಾರ್ಯ ಆರಂಭ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2026, 6:35 IST
Last Updated 10 ಫೆಬ್ರುವರಿ 2026, 6:35 IST
ರಾಷ್ಟ್ರೀಯ ಜಂತು ಹುಳು ನಿವಾರಣಾ ಅಭಿಯಾನದ ಪ್ರಯುಕ್ತ ಸೋಮವಾರ ನಡೆದ ಅಂತರ ಇಲಾಖೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಬಿತ್ತಿ ಪತ್ರಗಳನ್ನು ಬಿಡುಗಡೆ ಮಾಡಲಾಯಿತು
ರಾಷ್ಟ್ರೀಯ ಜಂತು ಹುಳು ನಿವಾರಣಾ ಅಭಿಯಾನದ ಪ್ರಯುಕ್ತ ಸೋಮವಾರ ನಡೆದ ಅಂತರ ಇಲಾಖೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಬಿತ್ತಿ ಪತ್ರಗಳನ್ನು ಬಿಡುಗಡೆ ಮಾಡಲಾಯಿತು   

ಚಿಕ್ಕಮಗಳೂರು: ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ  ಫೆ.10 ರಿಂದ 18 ರವರೆಗೆ ನಡೆಯಲಿದ್ದು, ಒಂದರಿಂದ 19 ವರ್ಷದೊಳಗಿನ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆಗಳನ್ನು ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ಅಭಿಯಾನದ ಪ್ರಯುಕ್ತ ಸೋಮವಾರ ನಡೆದ ಅಂತರ ಇಲಾಖೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಡಿ ಜಂತುಹುಳು ನಿವಾರಣಾ ಕಾರ್ಯಕ್ರಮದ ಚಟುವಟಿಕೆಗಳನ್ನು 2015-16ನೇ ಸಾಲಿನಿಂದ ಯಶಸ್ವಿಯಾಗಿ ನಡೆಸಲಾಗುತ್ತಿದೆ. ಕಾರ್ಯಕ್ರಮದ ಮಾರ್ಗಸೂಚಿಯಂತೆ ವರ್ಷದಲ್ಲಿ 2 ಬಾರಿ ಫೆಬ್ರುವರಿ ಮತ್ತು ಆಗಸ್ಟ್ ತಿಂಗಳಿನಲ್ಲಿ  ನಡೆಸಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ರಾಜ್ಯದಾದ್ಯಂತ 1 ರಿಂದ 19 ವರ್ಷದ ಎಲ್ಲಾ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆಗಳನ್ನು ಶಾಲಾ-ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ವಿತರಿಸಲಾಗುತ್ತಿದೆ. ತರಬೇತಿ ಹೊಂದಿದ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಸಿಬ್ಬಂದಿ ಮೇಲ್ವಿಚಾರಣೆಯಲ್ಲಿ ಮಾತ್ರೆ ನೀಡಲಾಗುವುದು. ಜಿಲ್ಲೆಯಲ್ಲಿ ಈಗಾಗಲೇ 1 ರಿಂದ 19 ವರ್ಷದೊಳಗಿನ ಮಕ್ಕಳ ಪಟ್ಟಿಯನ್ನು ಪಡೆಯಲಾಗಿದೆ. ಆದಂತೆ 2.23 ಲಕ್ಷ ಮಕ್ಕಳಿದ್ದು, ಈ ಕಾರ್ಯಕ್ರಮಕ್ಕಾಗಿ ಈಗಾಗಲೇ ರಾಜ್ಯಮಟ್ಟದಿಂದ 2.80 ಲಕ್ಷ ಮಾತ್ರೆಗಳು ಬಂದಿದ್ದು ಸಂಸ್ಥೆವಾರು ಔಷಧಿನು ವಿತರಣೆ ಮಾಡಲಾಗಿದೆ ಎಂದರು.

ಈ ಕಾರ್ಯಕ್ರಮಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಮನ್ವಯದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಲಾಗುವುದು ಎಂದು ಹೇಳಿದರು.

ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಎಚ್.ಕೆ. ಮಂಜುನಾಥ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ತಿಮ್ಮಯ್ಯ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.