ADVERTISEMENT

ಚಿಕ್ಕಮಗಳೂರು | ಸೆ.13 ಮೂರನೇ ರಾಷ್ಟ್ರೀಯ ಲೋಕ ಅದಾಲತ್: ನ್ಯಾ.ರಾಜೇಶ್ವರಿ ಹೆಗಡೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 2:59 IST
Last Updated 2 ಸೆಪ್ಟೆಂಬರ್ 2025, 2:59 IST
ಜಿಲ್ಲಾ ನ್ಯಾಯಾಲಯ ಸಂಕೀರ್ಣ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಉದ್ಘಾಟಿಸಿದರು.
ಜಿಲ್ಲಾ ನ್ಯಾಯಾಲಯ ಸಂಕೀರ್ಣ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಉದ್ಘಾಟಿಸಿದರು.   

ಚಿಕ್ಕಮಗಳೂರು: ಈ ವರ್ಷದ ಮೂರನೇ ರಾಷ್ಟ್ರೀಯ ಲೋಕ ಅದಾಲತ್ ಸೆ.13 ರಂದು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು.

ಜಿಲ್ಲಾ ನ್ಯಾಯಾಲಯ ಸಂಕೀರ್ಣ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವರ್ಷದಲ್ಲಿ ನಾಲ್ಕು ರಾಷ್ಟ್ರೀಯ ಲೋಕ ಅದಾಲತ್‌ಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈಗಾಗಲೇ ಮಾ.8, ಜು.12ರಂದು ಅದಾಲತ್‌ಗಳು ಯಶಸ್ವಿಯಾಗಿ ನಡೆದಿವೆ. ಇದೀಗ ಸೆ.13 ರಂದು ಅದಾಲತ್ ಆಯೋಜಿಸಲಾಗಿದೆ ಎಂದರು.

ಪ್ರತಿಯೊಬ್ಬ ನಾಗರಿಕ ಕೂಡ ಗೌರವ –ಘನತೆಯಿಂದ ಬದುಕಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ. ಬಡವರು, ಅನಕ್ಷರಸ್ಥರು, ಅಂಗವಿಕಲರು, ಮಹಿಳೆಯರು, ಮಕ್ಕಳು ಎಲ್ಲಾರಿಗೂ ಸುಲಭದಲ್ಲಿ ನ್ಯಾಯ ಒದಗಿಸುವ ಸಲುವಾಗಿ ಕಾನೂನು ಸೇವೆಗಳ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದ್ದು, ಅದರ ಕಾಯ್ದೆಯಡಿಯಲ್ಲಿ ಲೋಕ ಅದಾಲತ್ ನಡೆಸಲಾಗುತ್ತಿದೆ. ಜು.12 ರಂದು ನಡೆದ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಒಟ್ಟು 4,498 ಪ್ರಕರಣವಲ್ಲದೆ, ಸುಮಾರು 1,62,129 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಲೋಕ ಅದಾಲತ್‌ನಿಂದ ಖರ್ಚಿಲ್ಲದೇ ಶೀಘ್ರ ನ್ಯಾಯ ದೊರೆಯುತ್ತದೆ. ಜತೆಗೆ ಸಮಯ ಉಳಿತಾಯವಾಗಲಿದ್ದು, ಕಕ್ಷಿದಾರರಲ್ಲಿ ಪರಸ್ಪರ ಬಾಂಧವ್ಯ ಕೂಡ ಉಳಿಯಲಿದೆ ಎಂದು ತಿಳಿಸಿದರು.

ADVERTISEMENT

ಕಾಯಂ ಜನತಾ ನ್ಯಾಯಾಲಯದ ವ್ಯಾಪ್ತಿಗೆ ಸರಕು ಸಾಗಣೆ, ಭೂ ಸಾರಿಗೆ, ಜಲಸಾರಿಗೆ, ಅಂಚೆ ಮತ್ತು ತಂತಿ ವ್ಯವಸ್ಥೆ, ದೂರವಾಣಿ ಸೌಲಭ್ಯ, ವಿದ್ಯುತ್ ಮತ್ತು ನೀರು ಸರಬರಾಜು, ಸಾರ್ವಜನಿಕ ನೈರ್ಮಲ್ಯ, ಆಸ್ಪತ್ರೆ, ವಿಮಾ ಸೇವೆ, ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆ, ಶಿಕ್ಷಣ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದ ಸೇವೆ, ರಿಯಲ್ ಎಸ್ಟೇಟ್‌ಗಳಿಗೆ ಸಂಬಂಧಪಟ್ಟ ಸೇವೆಗಳು ಒಳಪಟ್ಟಿವೆ. ಸಂಬಂಧಿಸಿದ ವೆಬ್‌ಸೈಟ್ ಮೂಲಕ ಯಾವುದೇ ಶುಲ್ಕವಿಲ್ಲದೆ ಅರ್ಜಿ ಸಲ್ಲಿಸಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದು. ಈ ಜಿಲ್ಲೆಗೆ ಸಂಬಂಧಪಟ್ಟಂತೆ ಕಾಯಂ ಜನತಾ ನ್ಯಾಯಾಲಯ ಮಂಗಳೂರಿನ ಕೊಡಿಯಾಲಬೈಲ್‌ನಲ್ಲಿದೆ ಎಂದು ಮಾಹಿತಿ ನೀಡಿದರು.

ಮಧ್ಯಸ್ಥಿಕೆಯಲ್ಲಿ ಕೂಡ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಅವಕಾಶವಿದ್ದು, 90 ದಿನಗಳ ಕಾಲ ಅಂದರೆ ಜು.1ರಿಂದ ಅ.6 ರವರೆಗೆ ಮಧ್ಯಸ್ಥಿಕೆ ಮೂಲಕ ಪ್ರಕರಣಗಳ ವಿಲೇವಾರಿ ಮಾಡಲು ಆಂದೋಲನ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಮಧ್ಯಸ್ಥಿಕೆಯ ಮೂಲಕ 31 ಪ್ರಕರಣಗಳಲ್ಲಿ ರಾಜಿ ಸಂಧಾನ ನಡೆಸಲಾಗಿದೆ ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ಡಿ.ಬಿ.ಸುಜೇಂದ್ರ ಮಾತನಾಡಿ, ನ್ಯಾಯವನ್ನು ಅರಸಿ ಬರುವ ಕಕ್ಷಿದಾರರೇ ಆಸಕ್ತಿ ವಹಿಸಿದಲ್ಲಿ ಲೋಕ ಅದಾಲತ್‌ನಲ್ಲಿ ಪ್ರಕರಣ ಇತ್ಯರ್ಥಗೊಳ್ಳಲು ಸಾಧ್ಯ. ಮನುಷ್ಯ ಸ್ವತಃ ಸಂಘರ್ಷ ಜೀವಿಯಾಗಿದ್ದು, ನ್ಯಾಯಾಲಯದಲ್ಲಿ ನಡೆಯುವ ಪ್ರಕರಣಗಳಲ್ಲಿ ಒಬ್ಬರಿಗೆ ಸೋಲು, ಇನ್ನೊಬ್ಬರಿಗೆ ಗೆಲುವು ಸಹಜ. ಈ ಹಿನ್ನೆಲೆಯಲ್ಲಿ ಕಕ್ಷಿದಾರರು ಈ ನಿಟ್ಟಿನಲ್ಲಿ ಮಧ್ಯಸ್ಥಿಕೆಯಲ್ಲಿ ವಿವಾದಗಳನ್ನು ಬಗೆಹರಿಸಿಕೊಳ್ಳುವುದರಿಂದ ಸೋಲು-ಗೆಲುವಿನ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ,ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಭಾನುಮತಿ, ನ್ಯಾಯಾಧೀಶರಾದ ದ್ಯಾವಪ್ಪ, ವಿ.ಪ್ರಕಾಶ್, ರಾಘವೇಂದ್ರ ಕುಲಕರ್ಣಿ, ಅನುರಾಧ, ಶರತ್ ಕುಮಾರ್, ನಂದಿನಿ, ವಕೀಲರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.