ADVERTISEMENT

ಮತ ಅಮೂಲ್ಯ,ಮತದಾನ ಶ್ರೇಷ್ಠ ದಾನ: ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್

ರಾಷ್ಟ್ರೀಯ ಮತದಾರರ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 5:31 IST
Last Updated 26 ಜನವರಿ 2023, 5:31 IST
ಚಿಕ್ಕಮಗಳೂರಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಅಧಿಕಾರಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು
ಚಿಕ್ಕಮಗಳೂರಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಅಧಿಕಾರಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು   

ಚಿಕ್ಕಮಗಳೂರು: ‘ಮತದಾನ ಸಂವಿಧಾನ ನೀಡಿರುವ ಅಮೂಲ್ಯ ಹಕ್ಕು. ‌ಮತದಾರರು ಆಮಿಷಕ್ಕೆ ಒಳಗಾಗದೆ ಹಕ್ಕು ಚಲಾವಣೆ ಮಾಡಿದಾಗ ಸಮರ್ಥ ಸರ್ಕಾರದ ಆಯ್ಕೆ ಸಾಧ್ಯ’ ಎಂದು ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್ ಹೇಳಿದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಕುವೆಂಪು ಕಲಾಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಎಂಬುದು ಸಂವಿಧಾನಿಕ ಹಕ್ಕು.18 ವರ್ಷ ದಾಟಿದವರಿಗೆ ಚುನಾವಣೆಯಲ್ಲಿ ಮತದಾನದ ಹಕ್ಕು ಇದೆ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು 2011ರಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಮಾಡಲಾಗುತ್ತಿದೆ. ಯುವಜನರು ಈ ಹಕ್ಕಿನ ಮಹತ್ವ ಅರಿತುಕೊಳ್ಳಬೇಕು. ಮತದಾನದಲ್ಲಿ ಪಾಲ್ಗೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ಜಿಲ್ಲೆಯ ವಿವಿಧ ಕಾಲೇಜುಗಳಲ್ಲಿನ 10,568 ಯುವ ಮತದಾರರು ಈವರೆಗೂ ನೋಂದಣಿಯಾಗಿದ್ದಾರೆ. ಜಿಲ್ಲಾ ಪಂಚಾಯಿತಿ ಮೂಲಕ ಕಾಲೇಜುಗಳಲ್ಲಿ ಮತದಾನದ ಅರಿವು ಮೂಡಿಸಿ ನೋಂದಣಿಗೆ ಕ್ರಮ ವಹಿಸಲಾಗಿದೆ’ ಎಂದರು.

ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಬಿ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸಿದರು. ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಶ್ರೇಷ್ಠವಾದುದು. ಜವಾಬ್ದಾರಿ ಅರಿತು ಹಕ್ಕು ಚಲಾಯಿಸಬೇಕು. ಬಲಿಷ್ಠ ದೇಶ ಕಟ್ಟಲು ಎಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ‘ಚುನಾವಣೆಯಲ್ಲಿ ಸ್ಪರ್ಧಿಸುವವರ ಜತೆಗೆ ಪಾಲ್ಗೊಳ್ಳುವವರ ಪಾತ್ರ ಮುಖ್ಯ. ವಿಶ್ವದ 96 ದೇಶಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದೆ. ಪ್ರಚೋದನೆಗೆ ಒಳಗಾಗದೆ ಚುನಾವಣೆಯಲ್ಲಿ ಮುಕ್ತವಾಗಿ ಪಾಲ್ಗೊಳ್ಳಬೇಕು’ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಸ್.ಸೋಮ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು. ಶಾಲಾ, ತಾಲ್ಲೂಕು, ಜಿಲ್ಲಾ ಹಂತದಲ್ಲಿ ಪ್ರಬಂಧ, ರಸಪ್ರಶ್ನೆ, ಭಿತ್ತಿಚಿತ್ರ ರಚನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್‌, ಉಪವಿಭಾಗಾಧಿಕಾರಿ ರಾಜೇಶ್, ತಹಶೀಲ್ದಾರ್ ವಿನಾಯಕಸಾಗರ್, ಡಿಡಿಪಿಐ ರಂಗನಾಥಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.