
ಚಿಕ್ಕಮಗಳೂರು: ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು.
ಜಿಲ್ಲಾಧಿಕಾರಿಯಾಗಿ ಎನ್.ಎಂ ನಾಗರಾಜ್ ಅವರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಧಿಕಾರ ಸ್ವೀಕರಿಸಿದರು. ಕಂದಾಯ ಇಲಾಖೆಯ ಆಯುಕ್ತರಾಗಿ ಬೆಂಗಳೂರಿಗೆ ವರ್ಗಾವಣೆಗೊಂಡಿರುವ, ನಿಕಟಪೂರ್ವ ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಅವರು, ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿ ಹೂಗುಚ್ಛ ನೀಡಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಸುದರ್ಶನ್, ತರೀಕೆರೆ ಉಪವಿಭಾಗಾಧಿಕಾರಿ ಎನ್.ವಿ. ನಟೇಶ್ ಹಾಗೂ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್‌ಗಳು ಇದ್ದರು.
ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿರುವ ಜಿತೇಂದ್ರ ಕುಮಾರ್ ದಯಾಮ ಅವರು, ನಗರದ ಎಸ್‌ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿಕ್ರಮ ಅಮಟೆ ಅವರನ್ನು ರಾಜ್ಯ ಸರ್ಕಾರ ಬೆಂಗಳೂರು ಸಿಟಿ ಈಸ್ಟ್ ಡಿವಿಜನ್‌ನ ಡಿಸಿಪಿಯಾಗಿ ನೇಮಿಸಿ ವರ್ಗಾವಣೆ ಮಾಡಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಜಿತೇಂದ್ರಕುಮಾರ್ ದಯಾಮ ಅವರನ್ನು ಎಸ್‌ಪಿಯಾಗಿ ನೇಮಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿತ್ತು. ಈ ಆದೇಶದ ಹಿನ್ನೆಲೆ ದಯಾಮ ಅವರು ಗುರುವಾರ ಚಿಕ್ಕಮಗಳೂರು ಎಸ್‌ಪಿ ಕಚೇರಿಗೆ ಬಂದು ಅಧಿಕಾರ ಕರಿಸಿದರು.
ದಯಾಮ ಅವರು, ಈ ಹಿಂದೆ ನಕ್ಸಲ್ ನಿಗ್ರಹ ಪಡೆಯ ಎಸ್‌ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.