
ನರಸಿಂಹರಾಜಪುರ: ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯಡಿ ರಾಜ್ಯದ 258 ಗ್ರಾಮ ಪಂಚಾಯಿತಿಗಳಿಗೆ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ತಾಲ್ಲೂಕಿನ 8 ಗ್ರಾಮ ಪಂಚಾಯಿತಿಗಳು ಅವಕಾಶ ಪಡೆದಿವೆ.
2024–25ನೇ ಸಾಲಿನ ರಾಷ್ಟ್ರೀಯ ಗ್ರಾಮಸ್ವರಾಜ್ ಅಭಿಯಾನ ಯೋಜನೆಯಡಿ 3 ಅಕ್ಟೋಬರ್ 2024ರಂದು ನಡೆದ
ರಾಷ್ಟ್ರೀಯ ಗ್ರಾಮಸ್ವರಾಜ್ ಅಭಿಯಾನದ 8ನೇ ಕೇಂದ್ರ ಕಾರ್ಯಕಾರಿ ಸಮಿತಿಯಲ್ಲಿ ಗ್ರಾಮ ಪಂಚಾಯಿತಿಗಳ ಮೂಲ ಸೌಕರ್ಯ ಒದಗಿಸುವ ಸಲುವಾಗಿ ಹೊಸ ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ಅನುಮೋದನೆ ನೀಡಲಾಗಿತ್ತು.
2025ರ ಜನವರಿ 28ರಂದು ನಡೆದ ರಾಜ್ಯ ಕಾರ್ಯಕಾರಿ ಸಭೆಯ ತೀರ್ಮಾನದಂತೆ 2024–25ನೇ ಸಾಲಿನ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯಡಿ ರಾಜ್ಯದ 258 ಗ್ರಾಮ ಪಂಚಾಯಿತಿಗಳ ನೂತನ ಕಟ್ಟಡ ನಿರ್ಮಾಣಕ್ಕೆ ಮಾರ್ಚ್ ತಿಂಗಳಲ್ಲಿ ತಲಾ ₹8 ಲಕ್ಷದಂತೆ ₹20.64 ಕೋಟಿ ಅನುದಾನ ಬಿಡುಗಡೆ ಆಗಿದ್ದು, ಅದರಂತೆ ನರಸಿಂಹರಾಜಪುರ ತಾಲ್ಲೂಕಿನ ಸೀತೂರು, ಆಡುವಳ್ಳಿ, ಮುತ್ತಿನಕೊಪ್ಪ, ಕಡಹಿನಬೈಲು, ಮಾಗುಂಡಿ, ಕಾನೂರು, ಬನ್ನೂರು, ಬಾಳೆ ಗ್ರಾಮಪಂಚಾಯಿತಿಗಳಿಗೆ ₹64 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಅನುದಾನದ ಜತೆಗೆ ನವೆಂಬರ್ 4ರಂದು ಹೆಚ್ಚುವರಿಯಾಗಿ ಪ್ರತಿ ಗ್ರಾಮ ಪಂಚಾಯಿತಿಗೆ ತಲಾ ₹17 ಲಕ್ಷ ಅನುದಾನ ಬಿಡುಗಡೆಯಾಗಿದೆ. ಅದರಂತೆ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯಿತಿಗೆ ಕಟ್ಟಡ ನಿರ್ಮಾಣಕ್ಕೆ ₹25 ಲಕ್ಷ ಅನುದಾನ ಬಿಡುಗಡೆಯಾಗಿದೆ. ಇದರ ಜತೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ₹20 ಲಕ್ಷ ಕ್ರಿಯಾಯೋಜನೆಯನ್ನು ರೂಪಿಸಲಾಗಿದ್ದು, ಇದರನ್ವಯ ಒಗ್ಗೂಡಿಸುವಿಕೆ ಕಾಮಗಾರಿಯಡಿ ಒಟ್ಟು ₹45 ಲಕ್ಷ ವೆಚ್ಚದಲ್ಲಿ ಸುಸಜ್ಜಿತವಾದ ಕಟ್ಟಡ ನಿರ್ಮಿಸಲಾಗುವುದು. ಕಟ್ಟಡ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ ನೀಡಲು ಇಲಾಖೆ ಸಿದ್ಧತೆ ಕೈಗೊಂಡಿದೆ.
ಅನುದಾನವನ್ನು ಯಾವ ಉದ್ದೇಶಕ್ಕೆ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಗಳಿಗೆ ಮಾತ್ರ ವಿನಿಯೋಗಿಸಬೇಕು. ಗ್ರಾಮ ಪಂಚಾಯಿತಿ ಕಟ್ಟಡಗಳನ್ನು ನಿರ್ಮಿಸಿ, ಪೂರ್ಣಗೊಂಡ ವರದಿ, ಹಸ್ತಾಂತರಗೊಂಡ ವರದಿ, ಕಟ್ಟಡಗಳ ಛಾಯಾಚಿತ್ರಗಳನ್ನು ಮತ್ತು ಹಣ ಬಳಕೆಯ ಪ್ರಮಾಣಗಳನ್ನು ಪಂಚಾಯತ್ ರಾಜ್ ಆಯುಕ್ತಾಲಯಕ್ಕೆ ಸಲ್ಲಿಸುವಂತೆ ನಿಬಂಧನೆ ವಿಧಿಸಲಾಗಿದೆ.
‘ಗ್ರಾಮ ಪಂಚಾಯಿತಿಗಳ ಹಳೆಯ ಕಟ್ಟಡಗಳನ್ನು ತೆರವುಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗಾಗಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ಅದರಂತೆ ತಾಲ್ಲೂಕಿನ 8 ಗ್ರಾಮ ಪಂಚಾಯಿತಿಗಳಿಗೆ ಅನುದಾನ ಬಿಡುಗಡೆಯಾಗಿದೆ. ₹45 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲು ಶೀಘ್ರದಲ್ಲೇ ದಿನ ನಿಗದಿಪಡಿಸಿ ಶಂಕುಸ್ಥಾಪನೆ ನೆರವೇರಿಸಲಾಗುವುದು’ ಎಂದು ಶಾಸಕ ಟಿ.ಡಿ.ರಾಜೇಗೌಡ ಪ್ರಜಾವಾಣಿ ಗೆ ತಿಳಿಸಿದರು.
ತಾಲ್ಲೂಕಿನ ವ್ಯಾಪ್ತಿಯಲ್ಲಿ ಹಳೆಯ ಕಟ್ಟಡ ಹೊಂದಿರುವ ಗ್ರಾಮ ಪಂಚಾಯಿತಿಗಳ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಅದರಂತೆ ಸರ್ಕಾರದಿಂದ ತಾಲ್ಲೂಕಿನ 8 ಗ್ರಾಮ ಪಂಚಾಯಿತಿಗಳಿಗೆ ₹25ಲಕ್ಷ ಅನುದಾನ ಬಿಡುಗಡೆ ಆಗಿದೆ. ಅನುದಾನ ಮಂಜೂರಾಗಿರುವ ಗ್ರಾಮ ಪಂಚಾಯಿತಿ ಕಟ್ಟಡದ ನಿರ್ಮಾಣಕ್ಕೆ ಕ್ರಿಯಾಯೋಜನೆ ರೂಪಿಸಲಾಗುತ್ತಿದ್ದು, ಶೀಘ್ರದಲ್ಲೇ ಶಂಕುಸ್ಥಾಪನೆ ನಡೆಸಲಾಗುವುದು. ಈ ಎಂಟು ಗ್ರಾಮ ಪಂಚಾಯಿತಿ ನೂತನ ಕಟ್ಟಡ ನಿರ್ಮಾಣವಾದರೆ ತಾಲ್ಲೂಕಿನ 14 ಗ್ರಾಮ ಪಂಚಾಯಿತಿಗಳೂ ನೂತನ ಕಟ್ಟಡ ಹೊಂದಿದಂತಾಗುತ್ತದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಕಾಧಿಕಾರಿ ಎಚ್.ಡಿ.ನವೀನ್ ಕುಮಾರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.