ADVERTISEMENT

ಆಮ್ಲಜನಕ ವ್ಯವಸ್ಥೆಯ ಬಸ್ ಸೇವೆ ನಾಳೆ ಆರಂಭ: ಲಕ್ಷ್ಮಣ ಸವದಿ

​ಪ್ರಜಾವಾಣಿ ವಾರ್ತೆ
Published 16 ಮೇ 2021, 8:57 IST
Last Updated 16 ಮೇ 2021, 8:57 IST
   

ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ವತಿಯಿಂದ ಆರಂಭಿಸಲಾದ ಆಮ್ಲಜನಕ ವ್ಯವಸ್ಥೆಯ ಬಸ್ ಸೇವೆ ಯಶಸ್ವಿಯಾಗಿದ್ದು, ಈ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದೇ 17ರಂದು ಚಿಕ್ಕಮಗಳೂರಿನಲ್ಲಿ ಆರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಪ್ರಸ್ತುತ ಬಹುತೇಕ ಎಲ್ಲ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿದೆ. ಹೀಗಾಗಿ, ಹೊಸ ರೋಗಿಗಳು ಆಸ್ಪತ್ರೆಗೆ ಬಂದಾಗ ಅವರಿಗೆ ಆಸ್ಪತ್ರೆಯಲ್ಲಿ ಆಮ್ಲಜನಕ ಒದಗಿಸುವುದು ವಿಳಂಬವಾಗಿ ತೊಂದರೆಯಾಗುತ್ತಿದೆ. ಅಷ್ಟೇ ಅಲ್ಲ, ಆಸ್ಪತ್ರೆಯಲ್ಲಿ ಸ್ಥಳಾಭಾವದಿಂದ ರೋಗಿಗಳಿಗೆ ಅಲ್ಲಿ ಕುಳಿತು ಕಾಯುವುದಕ್ಕೂ ಕಷ್ಟವಾಗುತ್ತಿದೆ. ಇದನ್ನು ತಪ್ಪಿಸುವ ಉದ್ದೇಶದಿಂದ ಉಚಿತವಾಗಿ ಬಸ್‌ನಲ್ಲಿಯೇ ತುರ್ತು ಆಕ್ಸಿಜನ್ ಸೌಲಭ್ಯ ಒದಗಿಸಲು ಈ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ನಾಯೋನಿಕ ಐ ಕೇರ್ ಟ್ರಸ್ಟ್, ಸಿಟ್ರಿಕ್ ಇಂಡಿಯಾ. ಜಿಲ್ಲಾ ಆಡಳಿತಗಳ ಸಹಯೋಗದಲ್ಲಿ ಈ ವ್ಯವಸ್ಥೆ ಕಲ್ಪಿಸಲಾಗಿದೆ. ಆಕ್ಸಿಜನ್ ಪೂರೈಸಲು ಅನುಕೂಲವಾಗುವಂತೆ ವಿನ್ಯಾಸಗೊಳಿಸಿರುವ ಈ ಕೆಎಸ್‌ಆರ್‌ಟಿಸಿ ಬಸ್‌ನ ಅನ್ನು ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನಿಲ್ಲಿಸಲಾಗುವುದು. ಹೊರಗಿನಿಂದ ಕೋವಿಡ್ ಪೀಡಿತರು ಬಂದಾಗ ತಕ್ಷಣಕ್ಕೆ ಆಸ್ಪತ್ರೆಯ ಒಳಗೆ ಆಮ್ಲಜನಕ ಸಿಗದಿದ್ದರೆ ಬಸ್‌ನಲ್ಲಿಯೇ ತುರ್ತಾಗಿ ಪಡೆದುಕೊಳ್ಳಲು ಸಾಧ್ಯವಾಗುವಂತೆ ವೈದ್ಯಕೀಯ ಉಪಕರಣಗಳನ್ನು ಅಳವಡಿಸಲಾಗಿದೆ.ಏಕಕಾಲಕ್ಕೆ ಎಂಟು ಮಂದಿಗೆ ಆಮ್ಲಜನಕ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

‘ಆಮ್ಲಜನಕ ವ್ಯವಸ್ಥೆಯ ಬಸ್‌ ಸಜ್ಜುಗೊಳಿಸಲಾಗಿದೆ. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಸೋಮವಾರ ಬೆಳಿಗ್ಗೆ 11.30ಕ್ಕೆ ಆಮ್ಲಜನಕ ಸೌಕರ್ಯದ ಬಸ್‌ಗೆ ಚಾಲನೆ ನೀಡುವರು’ ಎಂದು ಕೆಎಸ್‌ಆರ್‌ಟಿಸಿ ಚಿಕ್ಕಮಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್‌.ಟಿ.ವಿರೇಶ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.