
ಚಿಕ್ಕಮಗಳೂರು: ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಪೌರ ನೌಕರರ ಸಂಘದ ಜಿಲ್ಲಾ ಶಾಖೆ ಮುಖಂಡರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.
ಬೇಡಿಕೆಗೆ ಸ್ಪಂದಿಸದ ಸರ್ಕಾರದ ಕ್ರಮ ಖಂಡಿಸಿ ಡಿ. 5ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಅಣ್ಣಯ್ಯ ತಿಳಿಸಿದರು.
ಮೇ. 27ರಂದು ನಡೆದ ಪ್ರತಿಭಟನೆ ಸಂದರ್ಭದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ, ಇವರೆಗೆ ಸ್ಪಂದನೆ ದೊರೆತಿಲ್ಲ. ಡಿ. 4ರಂದು ಒಂದು ದಿನ ಸಾಂಕೇತಿಕವಾಗಿ ರಾಜ್ಯದಾದ್ಯಂತ ಎಲ್ಲ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಲೇಖನಿ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಡಿ. 5ರಿಂದ ಎಲ್ಲಾ ಕೆಲಸ ಸ್ಥಗಿತಗೊಳಿಸಿ ಮುಷ್ಕರ ನಡೆಸಲಾಗುವುದು. ಪೌರ ಸೇವಾ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿರುವ ಮಾದರಿಯಲ್ಲಿ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಜಿವಿಎಫ್, ಕೆಜಿಐಡಿ, ಜ್ಯೋತಿ ಸಂಜೀವಿನಿ ಸೇರಿ ಸರ್ಕಾರಿ ನೌಕರರಿಗೆ ನೀಡುತ್ತಿರುವ ಎಲ್ಲಾ ಸೌಲಭ್ಯಗಳನ್ನು ಪೌರ ಕಾರ್ಮಿಕರಿಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕೃಷ್ಣ, ಲತಾ, ನಳಿನಿ, ಭರತ್, ಪ್ರಜ್ವಲ್, ನಂದೀಶ್, ಸಂತೋಷ್ ಇದ್ದರು.