ADVERTISEMENT

ತಂದೆ-ತಾಯಿ ಪೋಷಣೆ ಮಾಡದಿದ್ದರೆ ಆಸ್ತಿ ವಾಪಸ್‌: ವಿ.ಹನುಮಂತಪ್ಪ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2025, 4:57 IST
Last Updated 17 ಸೆಪ್ಟೆಂಬರ್ 2025, 4:57 IST
ಚಿಕ್ಕಮಗಳೂರಿನ ಕೆಂಪನಹಳ್ಳಿಯ ಆಶಾಕಿರಣ ಅಂಧ ಮಕ್ಕಳ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಾ.ಜೆ.ಪಿ.ಕೃಷ್ಣೇಗೌಡ ಉದ್ಘಾಟಿಸಿದರು
ಚಿಕ್ಕಮಗಳೂರಿನ ಕೆಂಪನಹಳ್ಳಿಯ ಆಶಾಕಿರಣ ಅಂಧ ಮಕ್ಕಳ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಡಾ.ಜೆ.ಪಿ.ಕೃಷ್ಣೇಗೌಡ ಉದ್ಘಾಟಿಸಿದರು   

ಚಿಕ್ಕಮಗಳೂರು: ತಂದೆ– ತಾಯಿಯಿಂದ ಆಸ್ತಿ ಪಡೆದ ನಂತರ ಅವರ ಪಾಲನೆ, ಪೋಷಣೆ ಮಾಡದಿದ್ದರೆ ಕಾನೂನಿನ ಮೂಲಕ ಆಸ್ತಿ ವಾಪಸ್‌ ಪಡೆದುಕೊಳ್ಳುವ ಅವಕಾಶವಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಹೇಳಿದರು.

ನಗರದ ಕೆಂಪನಹಳ್ಳಿಯ ಆಶಾಕಿರಣ ಅಂಧ ಮಕ್ಕಳ ಶಾಲೆಯಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಿರಿಯರ ಹಿತದೃಷ್ಟಿ ಕಾಪಾಡಲು ಹಿರಿಯರ ಪೋಷಣೆ ಮತ್ತು ಸಂರಕ್ಷಣೆ ಕಾಯ್ದೆ ಜಾರಿಗೆ ಬಂದಿದೆ. ಜಿಲ್ಲಾ ಕಾನೂನು ಪ್ರಾಧಿಕಾರವು ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ತಮ್ಮ ಹಕ್ಕುಗಳು ಮತ್ತು ಕಾನೂನಿನ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ADVERTISEMENT

ಆಶಾಕಿರಣ ಅಂಧ ಮಕ್ಕಳ ಶಾಲೆಯ ಅಧ್ಯಕ ಡಾ.ಜೆ.ಪಿ.ಕೃಷ್ಣೇಗೌಡ ಮಾತನಾಡಿ, ‘ಇಡೀ ಜಗತ್ತಿನ 221 ದೇಶಗಳಲ್ಲಿ ವಿಶೇಷವಾಗಿ ಹಿರಿಯರನ್ನು ಗೌರವಿಸುವ ದಿನವನ್ನು ಆಚರಿಸುತ್ತಿರುವುದು ಹೆಮ್ಮೆಯ ವಿಷಯ’ ಎಂದು ಹೇಳಿದರು.

ಸಮಾಜಕ್ಕೆ ಹಿರಿಯ ನಾಗರಿಕರ ಕೊಡುಗೆ ಗುರುತಿಸಲು ಹಾಗೂ ಅವರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ಈ ದಿನ ಅವಕಾಶ ಕಲ್ಪಿಸಿದೆ. ಯುವಕರ ಜೀವನವು ವೇಗವಾಗಿ ಓಡುತ್ತಿದೆ. ಈ ಸಮಯದಲ್ಲಿ ಮನೆಯಲ್ಲಿರುವ ವೃದ್ಧರು ಒಂಟಿತನಕ್ಕೆ ಗುರಿಯಾಗುತ್ತಾರೆ. ವಿಶ್ವ ಹಿರಿಯ ನಾಗರಿಕರ ದಿನದ ಸಂದರ್ಭದಲ್ಲಿ ಮನೆಯ ಹಿರಿಯರೊಂದಿಗೆ ಕೆಲವು ಸುಂದರ ಕ್ಷಣಗಳನ್ನು ಕಳೆಯುವಂತೆ ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ವೈ.ಆಲದಾರ್ತಿ ಮಾತನಾಡಿ, ‘ಹಿರಿಯ ನಾಗರಿಕರ ದಿನದ ಅಂಗವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದವರಿಗೆ ಬಹುಮಾನ ವಿತರಣೆ ಮಾಡಲಾಗುವುದು’ ಎಂದು ಹೇಳಿದರು.

ಮಹಿಳಾ ಮತ್ತು ಅಭಿವೃದ್ದಿ ಇಲಾಖೆಯ ಡಿ.ಸಂತೋಷ್, ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಗೋಪಾಲಕೃಷ್ಣ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಂಕರ ಕೊರವರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.