ADVERTISEMENT

ಅತಿವೃಷ್ಟಿಯಿಂದ ರೈತರ ಬೆಳೆ ಹಾನಿ: ವಿಶೇಷ ಪ್ಯಾಕೇಜ್ ಘೋಷಿಸಲು ಆಗ್ರಹ

ಅಜ್ಜಂಪುರದಲ್ಲಿ ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2022, 5:35 IST
Last Updated 17 ಸೆಪ್ಟೆಂಬರ್ 2022, 5:35 IST
ಅಜ್ಜಂಪುರದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದ ಬಳಿಕ ತಹಶೀಲ್ದಾರ್ ವಿಶ್ವೇಶ್ವರ ರೆಡ್ಡಿ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ನೀಡಿದರು.
ಅಜ್ಜಂಪುರದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದ ಬಳಿಕ ತಹಶೀಲ್ದಾರ್ ವಿಶ್ವೇಶ್ವರ ರೆಡ್ಡಿ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ನೀಡಿದರು.   

ಅಜ್ಜಂಪುರ: ಅತಿವೃಷ್ಟಿಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಸರ್ಕಾರ ಕೂಡಲೇ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಅಂಶುಮಂತ್ ಮಾತನಾಡಿ, ಅಜ್ಜಂಪುರ ತಾಲ್ಲೂಕಿನ ಮುಖ್ಯಬೆಳೆ ಈರುಳ್ಳಿ ಮಳೆಯಿಂದಾಗಿ ನೆಲಕಚ್ಚಿದೆ. ಜತೆಗೆ ಶೇಂಗಾ, ಹತ್ತಿ, ಆಲೂಗಡ್ಡೆ ಹಾನಿಗೀಡಾಗಿವೆ. ಅಡಿಕೆಯೂ ಕೊಳೆ ರೋಗಕ್ಕೆ ತುತ್ತಾಗಿದೆ. ಬೆಳೆ ಮಾಡಲು ಹಾಕಿರುವ ಬಂಡವಾಳ ಬಾರದಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಕೂಡಲೇ ಸರ್ಕಾರ, ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.

ಮಾಜಿ ಶಾಸಕ ಎಸ್.ಎಂ.ನಾಗರಾಜ್ ಮಾತನಾಡಿ, ಇಂದು ಸಾಂಕೇತಿಕ ಮುಷ್ಕರ ನಡೆಸಿದ್ದೇವೆ. ಸರ್ಕಾರ ರೈತರಿಗೆ ಶೀಘ್ರ ಪರಿಹಾರ ನೀಡದಿದ್ದರೆ, ಗ್ರಾಮ-ತಾಲ್ಲೂಕು-ಜಿಲ್ಲಾ ಕೇಂದ್ರದಲ್ಲಿ ಜನಜಾಗೃತಿ ಮೂಲಕ ಪಾದಯಾತ್ರೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ADVERTISEMENT

ಮಾಜಿ ಶಾಸಕ ಜಿ.ಎಚ್.ಶ್ರೀನಿವಾಸ್, ರಾಜ್ಯದಲ್ಲಿ ಮಳೆಯಿಂದ
₹ 65 ಸಾವಿರ ಕೋಟಿ ನಷ್ಟ ಸಂಭವಿಸಿರುವ ಅಂದಾಜಿದೆ. ಈ ಮೊತ್ತವನ್ನು ಕೇಂದ್ರದಿಂದ ಪಡೆಯಲು ರಾಜ್ಯದ ನಾಯಕರಿಗೆ ಸಾಧ್ಯವಾಗಿಲ್ಲ. ಬೆಳೆ ಕಳೆದುಕೊಂಡ ರೈತರ ಪ್ರತಿ ಎಕರೆಗೆ ಕನಿಷ್ಠ ₹ 40 ಸಾವಿರ ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೃಷ್ಣಮೂರ್ತಿ ಮಾತನಾಡಿ, ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡಿದೆ. ಮಳೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಲು ಸಚಿವರು, ಶಾಸಕರು ಮೀನಮೇಷ ಎಣಿಸುತ್ತಿದ್ದಾರೆ. ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡಿರುವ ರೈತರಿಗೆ ಪರಿಹಾರ ನೀಡಲು ಹಿಂದೇಟು ಹಾಕುತ್ತಿರುವುದು ನಾಚಿಕೆಗೇಡು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಕಿಸಾನ್ ಸಂಘ ತಾಲ್ಲೂಕು ಅಧ್ಯಕ್ಷ ಸಿದ್ದೇಗೌಡ, ಸರ್ಕಾರವು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ. ಅನವಶ್ಯಕವಾಗಿ ಸಂಘದ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿಸುತ್ತಿದೆ ಎಂದು ಆರೋಪಿಸಿದರು.

ತಹಶೀಲ್ದಾರ್ ವಿಶ್ವೇಶ್ವರ ರೆಡ್ಡಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ನೀಡಲಾಯಿತು.

ಮಾಜಿ ಶಾಸಕ ಟಿ.ಎಚ್.ಶಿವಶಂಕರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಜೆ.ಆನಂದ್ ಕುಮಾರ್, ಫಾರೂಕ್, ಕಾಂಗ್ರೆಸ್ ಮುಖಂಡ ಧ್ರುವಕುಮಾರ್, ಜಿ.ನಟರಾಜ್, ಜಿ.ಎಲ್. ಮಂಜುನಾಥ್, ಜಿ.ಜಿ.ತಿಪ್ಪೇಶ್, ಯುವ ಘಟಕ ಅಧ್ಯಕ್ಷ ಸುನೀಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.