ADVERTISEMENT

ಮರಾಠಾ ಅಭಿವೃದ್ಧಿ ನಿಗಮ ರಚನೆ ಆದೇಶ ಕೈಬಿಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 6:26 IST
Last Updated 20 ನವೆಂಬರ್ 2020, 6:26 IST
ಚಿಕ್ಕಮಗಳೂರಿನಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚಿಕ್ಕಮಗಳೂರಿನಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.   

ಚಿಕ್ಕಮಗಳೂರು: ರಾಜ್ಯ ಸರ್ಕಾರವು ಮರಾಠಾ ಅಭಿವೃದ್ಧಿ ನಿಗಮ ರಚನೆ ಆದೇಶ ರದ್ದುಗೊಳಿಸಬೇಕು ಎಂದು ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನ ಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಕನ್ನಡಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಸಿ.ರಾಜೇಗೌಡ ಮಾತನಾಡಿ, ‘ಕೋವಿಡ್‌–19 ತಲ್ಲಣದಿಂದಾಗಿ ಜನರು ಸಂಕಷ್ಟ ದಲ್ಲಿದ್ದಾರೆ. ಬಿಬಿಎಂಪಿ ನೌಕರರಿಗೆ ಸರ್ಕಾರ ವೇತನ ನೀಡಿಲ್ಲ. ಕನ್ನಡಿಗರ ಸಮಸ್ಯೆಗೆ ಸರ್ಕಾರ ಸ್ಪಂದಿಸಿಲ್ಲ. ಮರಾಠಾ ಅಭಿವೃದ್ಧಿ ನಿಗಮ ರಚಿಸಲು ಹಾಗೂ ನಿಗಮಕ್ಕೆ ₹ 50 ಕೋಟಿ ಅನುದಾನ ಮಂಜೂರು ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿದ್ದಾರೆ. ಮುಖ್ಯಮಂತ್ರಿ ಅವರು ಎಚ್ಚೆತ್ತು ಕೊಳ್ಳಬೇಕು. ನಿಗಮ ರಚನೆ ಆದೇಶ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಜಿಲ್ಲಾ ಘಟಕದ ಅಧ್ಯಕ್ಷ ನೂರುಲ್ಲಾ ಖಾನ್ ಮಾತನಾಡಿ, ‘ಸರ್ಕಾರದ ನಿಲುವು ಖಂಡಿಸಿ ರಾಜ್ಯದಾದ್ಯಂತ ಡಿ. 5ರಂದು ಪ್ರತಿಭಟನೆ ನಡೆಸಲಾಗುವುದು’ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಾಗರ ಹೋಬಳಿ ಅಧ್ಯಕ್ಷ ಕಳವಾಸೆ ರವಿ, ಡಾ.ರಾಜ್‌ಕುಮಾರ್ ಅಭಿಮಾನಿ ಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಓಂಕಾರೇಗೌಡ, ಕನ್ನಡ ಸೇನೆಯ ನಿಲೇಶ್, ಶಂಕರೇ ಗೌಡ, ಹೇಮಂತ್, ತಿಮ್ಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.