
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಡಿ. 21ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಲಿದ್ದು, ಐದು ವರ್ಷ ವಯಸ್ಸಿನೊಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೊ ಲಸಿಕೆ ಹಾಕಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಿ. 21ರಂದು ಬೂತ್ ಮಟ್ಟದಲ್ಲಿ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, 22ರಿಂದ 23ರವರೆಗೆ ಗ್ರಾಮೀಣ ಪ್ರದೇಶದಲ್ಲಿ ಹಾಗೂ 22ರಿಂದ 24ರವರೆಗೆ ನಗರ ಪ್ರದೇಶದ ಬೂತ್‌ಗಳಲ್ಲಿ ಬಿಟ್ಟು ಹೋದ ಮಕ್ಕಳಿಗಾಗಿ ಮನೆ ಮನೆಗೆ ಭೇಟಿ ನೀಡಿ ಪಲ್ಸ್ ಪೋಲಿಯೊ ಹನಿ ಹಾಕಲಾಗುವುದು ಎಂದರು.
ಯಾವುದೇ ಅರ್ಹ ಮಗು ಈ ಲಸಿಕೆಯಿಂದ ವಂಚಿತವಾಗಬಾರದು. ಆ ನಿಟ್ಟಿನಲ್ಲಿ ನಿಗಾ ವಹಿಸಬೇಕು. ತಂಡಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆರ್‌ಸಿಎಚ್ ಅಧಿಕಾರಿಗಳು, ತಹಶೀಲ್ದಾರ್‌ಗಳು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು, ಗ್ರಾಮೀಣ ಪ್ರದೇಶಗಳಲ್ಲಿ ಪಿಡಿಒಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ 5 ವರ್ಷ ವಯಸ್ಸಿನೊಳಗಿನ ಮಕ್ಕಳು ಪಲ್ಸ್ ಪೋಲಿಯೊ ಲಸಿಕೆಯಿಂದ ವಂಚಿತರಾಗದಂತೆ ನಿಗಾ ವಹಿಸಬೇಕು ತಿಳಿಸಿದರು.
ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಜನನಿಬೀಡ ಸ್ಥಳಗಳು, ವಲಸೆ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಬೇಕು ಎಂದರು.
ಪಲ್ಸ್ ಪೋಲಿಯೊ ಕಾರ್ಯಕ್ರಮದ ಬಗ್ಗೆ ಶಾಲಾ ಮಕ್ಕಳ ಮೂಲಕ ಜಾಗೃತಿ ಜಾಥಾ, ಪಾಲಕರಲ್ಲಿ ಅರಿವು, ಶಿಕ್ಷಕರ ಮೂಲಕ ಮಕ್ಕಳಿಗೆ ಲಸಿಕೆ ಹಾಕಿಸಲು ಅರಿವು ಮೂಡಿಸುವ ಮೂಲಕ ಅಗತ್ಯ ಕ್ರಮ ಕೈಗೊಳ್ಳಬೇಕು. ಲಸಿಕಾ ಸಿಬ್ಬಂದಿಗಳಿಗೆ ಸೂಕ್ತ ವಾಹನದ ವ್ಯವಸ್ಥೆ ಮಾಡಬೇಕು. ಬೂತ್‌ಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್ಥಬಾಬು, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಮಂಜುನಾಥ್, ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಬಾಲಕೃಷ್ಣ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಭರತ್, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ. ಹರೀಶ್ ಬಾಬು, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶಶಿಕಲಾ, ಚಿಕ್ಕಮಗಳೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸೀಮಾ ಹಾಜರಿದ್ದರು.
92230 ಮಕ್ಕಳಿಗೆ ಗುರಿ
ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ 5 ವರ್ಷ ವಯಸ್ಸಿನೊಳಗಿನ 92230 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ 784 ಸ್ಥಿರ ಬೂತ್‌ಗಳು ನಗರ ಪ್ರದೇಶದಲ್ಲಿ 82 ಸ್ಥಿರ ಬೂತ್‌ಗಳನ್ನು ಗುರುತಿಸಲಾಗಿದೆ. ನಗರ ಪ್ರದೇಶದಲ್ಲಿ 2 ಮತ್ತು ಗ್ರಾಮೀಣ ಪ್ರದೇಶದಲ್ಲಿ 72 ಸಂಚಾರ ತಂಡಗಳನ್ನು ರಚಿಸಲಾಗಿದೆ ಎಂದು ಎಚ್.ಎಸ್.ಕೀರ್ತನಾ ವಿವರಿಸಿದರು. ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ನಗರ ಪ್ರದೇಶದಲ್ಲಿ 19 ಗ್ರಾಮೀಣ ಪ್ರದೇಶದಲ್ಲಿ 177 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಲಸಿಕೆ ನೀಡಲು ನಗರ ಪ್ರದೇಶಕ್ಕೆ 392 ಗ್ರಾಮೀಣ ಪ್ರದೇಶಕ್ಕೆ 3368 ಲಸಿಕಾ ಕಾರ್ಯಕರ್ತರನ್ನು ನೇಮಿಸಲಾಗಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.