ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಾಲ್ಕು ತಿಂಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಈವರೆಗೆ ₹106 ಕೋಟಿಗೂ ಅಧಿಕ ಮೌಲ್ಯದ ಸಾರ್ವಜನಿಕ ಆಸ್ತಿಗೆ ಹಾನಿಯಾಗಿದೆ.
ಮೇ ತಿಂಗಳಲ್ಲಿ ಆರಂಭವಾಗಿರುವ ಮಳೆ ಬಿಟ್ಟು ಬಿಡದೆ ಸುರಿಯುತ್ತಲೇ ಇದೆ. ಆಗಸ್ಟ್ ಅಂತ್ಯದ ತನಕ ನಿರಂತರವಾಗಿ ಸುರಿದಿದ್ದು, ಈಗಲೂ ಮಳೆ ಸಣ್ಣದಾಗಿ ಮುಂದುವರಿದಿದೆ. ಜನವರಿಯಿಂದ ಈವರೆಗಿನ ಜಿಲ್ಲೆಯ ಸರಾಸರಿ ವಾಡಿಕೆ ಮಳೆ ಪ್ರಮಾಣ 146 ಸೆಂಟಿ ಮೀಟರ್ ಆಗಿದ್ದರೆ, ಈ ಬಾರಿ 159 ಸೆಂಟಿ ಮೀಟರ್ ಮಳೆಯಾಗಿದೆ.
ರಸ್ತೆ, ಸೇತುವೆ, ಶಾಲಾ ಕಟ್ಟಡ, ಅಂಗನವಾಡಿ ಕಟ್ಟಡ, ವಿದ್ಯುತ್ ಕಂಬ, ವಿದ್ಯುತ್ ತಂತಿ ಹಾನಿ ಅಧಿಕವಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ ತಾಲ್ಲೂಕಿನಲ್ಲಿ ಹೆಚ್ಚಿನದಾಗಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆಗಳು ಮತ್ತು ಜಿಲ್ಲಾ ಪ್ರಮುಖ ರಸ್ತೆಗಳು ಹಾಳಾಗಿವೆ. ರಸ್ತೆ ಮತ್ತು ಸೇತುವೆ ಹಾನಿಯಿಂದ ₹56.89 ಕೋಟಿಯಷ್ಟು ನಷ್ಟವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಅಂದಾಜಿಸಿದೆ.
ಒಟ್ಟು 471 ಕಿಲೋ ಮೀಟರ್ ಗ್ರಾಮೀಣ ರಸ್ತೆ ಹಾಳಾಗಿದ್ದರೆ, 46 ಸೇತುವೆಗಳಿಗೆ ಹಾನಿಯಾಗಿದೆ. ಎನ್.ಆರ್.ಪುರ, ಕೊಪ್ಪ, ಶೃಂಗೇರಿ ಮತ್ತು ಮೂಡಿಗೆರೆ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗ್ರಾಮೀಣ ರಸ್ತೆಗಳು ಹಾನಿಗೀಡಾಗಿವೆ. ಇದೇ ತಾಲ್ಲೂಕಿನಲ್ಲಿ ಗ್ರಾಮೀಣ ಭಾಗದಲ್ಲಿನ ಸೇತುವೆಗಳಿಗೂ ಹೆಚ್ಚಿನದಾಗಿ ಹಾಳಾಗಿವೆ. ಗ್ರಾಮೀಣ ರಸ್ತೆ ಮತ್ತು ಸೇತುವೆ ಹಾನಿಯಿಂದ ₹44.46 ಕೋಟಿ ನಷ್ಟವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಅಂದಾಜಿಸಿದ್ದಾರೆ.
3,253 ವಿದ್ಯುತ್ ಕಂಬ, 65 ಕಿಲೋ ಮೀಟರ್ ವಿದ್ಯುತ್ ತಂತಿ ಹಾಳಾಗಿದ್ದು, ಮಲೆನಾಡಿನ ಭಾಗದಲ್ಲೇ ಹೆಚ್ಚಿನದಾಗಿ ಹಾನಿಯಾಗಿದೆ. ₹5.55 ಕೋಟಿಯಷ್ಟು ನಷ್ಟವಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದಾರೆ.
ಇನ್ನು 281 ಅಂಗನವಾಡಿ ಕಟ್ಟಡ, 151 ಶಾಲಾ ಕಟ್ಟಡ ಮತ್ತು 55 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡಗಳಿಗೂ ಹಾನಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.