ನರಸಿಂಹರಾಜಪುರ: ಕೊಪ್ಪದಿಂದ ಶಿವಮೊಗ್ಗದ ವಿಮಾನ ನಿಲ್ದಾಣದವರೆಗೆ ರಸ್ತೆ ವಿಸ್ತರಣೆಗೆ ಆದ್ಯತೆ ನೀಡಬೇಕು ಎಂದು ಶಿವಮೊಗ್ಗ ಭದ್ರಾ ಕಾಡ ನಿಗಮದ ಅಧ್ಯಕ್ಷ ಕೆ.ಪಿ.ಅಂಶುಮಂತ್ ಮನವಿ ಮಾಡಿದರು.
ಪಟ್ಟಣಕ್ಕೆ ಈಚೆಗೆ ಭೇಟಿ ನೀಡಿದ್ದ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಎಸ್.ಸತ್ಯನಾರಾಯಣ ಅವರಿಗೆ ಮನವಿ ಸಲ್ಲಿಸಿದ ಅವರು, ಮಲೆನಾಡಿನಲ್ಲಿ ಮಳೆಗಾಲದಲ್ಲಿ ಅತಿವೃಷ್ಟಿಯಿಂದ ಸಾಕಷ್ಟು ಹಾನಿಗೊಳಗಾಗುತ್ತದೆ. ಭಾಗದಲ್ಲಿ ತುಂಗಾ ಮತ್ತು ಭದ್ರಾ ನದಿಯ ಹರಿಯುವ ಮಧ್ಯಭಾಗದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗುತ್ತವೆ. ಮಂಗಳೂರು– ಮೊಳಕಾಲ್ಮೂರು ರಾಜ್ಯ ಹೆದ್ದಾರಿ ಇದ್ದು, ಇದನ್ನು ಕೊಪ್ಪದಿಂದ ಶಿವಮೊಗ್ಗದ ವಿಮಾನ ನಿಲ್ದಾಣದವರೆಗೆ ವಿಸ್ತರಣೆ ಮಾಡಿದರೆ ಜನರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಮೂಲಕ ರಾಷ್ಟ್ರೀಯ ಹೆದ್ದಾರಿ 169 ಹಾದು ಹೋಗುತ್ತದೆ. ಇದನ್ನು ಮುಡುಬದಿಂದ ಶಂಕರಾಪುರದವರೆಗೆ ಅಭಿವೃದ್ಧಿ ಪಡಿಸಿದರೆ ಅನುಕೂಲವಾಗುತ್ತದೆ ಎಂದರು.
ಈ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕಾರ್ಯದರ್ಶಿ ಎಸ್.ಸತ್ಯನಾರಾಯಣ ಎಂಜಿನಿಯರ್‌ಗೆ ಸೂಚಿಸಿದರು. ಈಗಾಗಲೇ ಕೊಪ್ಪದಿಂದ ಶಿವಮೊಗ್ಗದವರೆಗೆ ರಸ್ತೆ ಅಭಿವೃದ್ಧಿಗೆ ₹39ಕೋಟಿ ವೆಚ್ಚದ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಎಂಜಿನಿಯರ್ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.