ADVERTISEMENT

ಬಾಲ ಕಾರ್ಮಿಕರ ನೇಮಕ ಕಂಡರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಮೀನಾ ನಾಗರಾಜ್

​ಪ್ರಜಾವಾಣಿ ವಾರ್ತೆ
Published 5 ಜೂನ್ 2025, 13:11 IST
Last Updated 5 ಜೂನ್ 2025, 13:11 IST
<div class="paragraphs"><p>ಮೀನಾ ನಾಗರಾಜ್</p></div>

ಮೀನಾ ನಾಗರಾಜ್

   

ಚಿಕ್ಕಮಗಳೂರು: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯೋಗ ಹಾಗೂ ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕರ ಯೋಜನಾ ಸೊಸೈಟಿ ವತಿಯಿಂದ ಆಯೋಜಿಸಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪೂರ್ವಭಾವಿ ಸಭೆಯ ಅದ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ADVERTISEMENT

2024–25ನೇ ಸಾಲಿನ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ, ‘ಜಿಲ್ಲೆಯಲ್ಲಿ ಬಾಲ ಕಾರ್ಮಿಕರು ಕೆಲಸ ಮಾಡುವುದು ಕಂಡುಬಂದರೆ ನೇಮಕ ಮಾಡಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಂಗಡಿ, ಗ್ಯಾರೇಜ್, ಪ್ಲಾಂಟೇಷನ್, ಕೈಗಾರಿಕೆ, ಹೋಟೆಲ್‌ಗಳಿಗೆ ಅನಿರೀಕ್ಷಿತ ದಾಳಿ ಮಾಡಿ ಪತ್ತೆಗೆ ಕ್ರಮ ಕೈಗೊಳ್ಳಬೇಕು. ಪತ್ತೆಯಾದ ಬಾಲ ಕಾರ್ಮಿಕರಿಗೆ ಮರಳಿ ಶಿಕ್ಷಣ ಕೊಡಿಸಬೇಕು ಎಂದು ಹೇಳಿದರು.

ಪ್ರತಿ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕಂಡು ಬರುವ ಬಾಲಕಾರ್ಮಿಕರ ಪುನರ್ವಸತಿ ಹಾಗೂ ಸರ್ಕಾರದ ಸವಲತ್ತು ಕಲ್ಪಿಸಿ ಶಾಲೆ ಬಿಟ್ಟ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು. ಪ್ರಥಮ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳ ಹಾಜರಾತಿ ಪರೀಕ್ಷೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಅವರಿಗೆ ಸರಿಯಾದ ಮಾರ್ಗದರ್ಶನ ಮಾಡಿ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೇರಣೆಯಾಗುವಂತೆ ಅರಿವು ಮೂಡಿಸಬೇಕು. ಎಸ್ಇಪಿ ಮತ್ತು ಟಿಎಎಸ್‌ಪಿ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ದೊರೆಯುವಂತೆ ಮಾಡಬೇಕು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಮಾತನಾಡಿ, ‘ಜಿಲ್ಲೆಯಲ್ಲಿ ಹಲವು ಮಕ್ಕಳು ಕಾಣೆಯಾಗಿರುವ ಬಗ್ಗೆ ಅಧಿಕಾರಿಗಳು ತುರ್ತಾಗಿ ಕ್ರಮ ಕೈಗೊಳ್ಳಬೇಕು. ಶಾಲೆ ಬಿಟ್ಟ ವಿದ್ಯಾರ್ಥಿಗಳು ಹಾಗೂ ವಲಸೆ ಕಾರ್ಮಿಕರನ್ನು ಗುರುತಿಸಿ ಗುರುತಿನ ಚೀಟಿ ಹಾಗೂ ಸರ್ಕಾರದ ಸೌಲಭ್ಯಗಳನ್ನು ನೀಡಲು ಯೋಜನೆ ರೂಪಿಸಿಕೊಂಡು ಅಷ್ಠಾನಗೊಳಿಸಬೇಕು’ ಎಂದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಬಿ.ಸಿ.ಸುರೇಶ್, ಸುಭಾಷ ಆಲದಕಟ್ಟಿ, ಉಪವಿಭಾಗಾಧಿಕಾರಿ ದೇವರಾಜ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.