
ಅಳಲಗೆರೆ (ನರಸಿಂಹರಾಜಪುರ): ‘ಮಕ್ಕಳು ಎಲ್ಲ ಚಟುವಟಿಕೆ, ಸ್ಪರ್ಧೆಗಳಲ್ಲೂ ಭಾಗವಹಿಸಬೇಕು. ಭಾಗವಹಿಸಿದ ಎಲ್ಲ ಮಕ್ಕಳು ಗೆದ್ದಂತೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್ ಹೇಳಿದರು.
ಮೆಣಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಳಲಗೆರೆ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶುಕ್ರವಾರ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಅವಕಾಶಗಳು ಕಡಿಮೆ ಇತ್ತು. ಈಗ ತಂತ್ರಜ್ಞಾನ ಮುಂದುವರಿದಿದೆ. ಸರ್ಕಾರವು ಶಿಕ್ಷಣಕ್ಕೆ ಎಲ್ಲಾ ಪ್ರೋತ್ಸಾಹ ನೀಡುತ್ತಿದ್ದು, ಉನ್ನತ ಶಿಕ್ಷಣ ಪಡೆಯಲು ಅವಕಾಶಗಳು ಹೆಚ್ಚಾಗಿದೆ. ಸಿಕ್ಕ ಅವಕಾಶಗಳನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಂಡು ಉನ್ನತ ಶಿಕ್ಷಣ ಪಡೆದು ಜೀವನದಲ್ಲಿ ಮುಂದೆ ಬರಬೇಕು. ಕಷ್ಟಪಟ್ಟು ಶಿಕ್ಷಣ ನೀಡಿದ ತಂದೆ–ತಾಯಿಗಳಿಗೆ ಕೀರ್ತಿ ತರಬೇಕು. ವಸತಿ ಶಾಲೆಗಳಲ್ಲಿ ಶಿಕ್ಷಣ ಪಡೆದ ಅನೇಕ ಮಕ್ಕಳು ಇಂದು ಉನ್ನತ ಸ್ಥಾನ ತಲುಪಿಸಿದ್ದಾರೆ ಎಂದರು.
ಮೆಣಸೂರು ಗ್ರಾಮ ಪಂಚಾಯಿತಿ ಸದಸ್ಯ ಡಿ.ಆರ್. ಶ್ರೀನಾಥ್ ಮಾತನಾಡಿ, ಸರ್ಕಾರಿ ವಸತಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಇಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯು ಕಳೆದ ಹಲವು ವರ್ಷದಿಂದ ಎಸ್‌ಎಸ್‌ಎಲ್‌ಸಿಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆಯುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೇ ಎನ್.ಆರ್.ಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ವಿಶೇಷ ಸ್ಥಾನಮಾನ ಸಿಕ್ಕಿದ್ದು, ಶಿಕ್ಷಣದ ಜೊತೆಗೆ ಸಂಸ್ಕಾರ ಸಹ ಕಲಿಸುತ್ತಿದೆ. ಶಿಕ್ಷಣ, ಊಟದ ವ್ಯವಸ್ಥೆ, ಪಠ್ಯೇತರ ಚಟುವಟಿಕೆ, ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ಮುಂಚೂಣಿಯಲ್ಲಿದೆ ಎಂದರು.
ಶಿಕ್ಷಕ ರಾಮಮೋಹನ್ ವರದಿ ವಾಚಿಸಿದರು. ಮೆಣಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಚಿತಾ ರಮೇಶ್ ಅಧ್ಯಕ್ಷತೆ ವಹಿಸಿದ್ದರು. ಮೆಣಸೂರು ಗ್ರಾಮ ಪಂಚಾಯಿತಿ ಸದಸ್ಯೆ ಬಿಂದು ಸತೀಶ್, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಪೂರ್ಣಿಮಾ, ಪೋಷಕ ಪರಿಷತ್ ಅಧ್ಯಕ್ಷ ಸುರೇಶ್, ಜ್ವಾಲಾಮಾಲಿನಿ ಬಾಲಿಕಾ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಕ ಪವಂನಜಯ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ಅಜ್ಜಪ್ಪ, ಸಿ.ಆರ್.ಪಿ ದೇವರಾಜ್, ಶಿಕ್ಷಕರಾದ ಪೂಜಾಜೈನ್, ಮಹಾತ್ಮಗಾಂಧಿ ಇದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್ ಹಾಗೂ ಕಳೆದ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಾದ ಅನ್ವಿನಿ, ಅನಿಷ, ಮೇಘರ್ಷ, ಧೀರಜ್, ಪ್ರಸಾದ್, ಬಿ.ಆರ್. ಯಶವಂತ್, ಗಾನವಿ, ಸಿಂಚನ, ತರುಣ ಅವರನ್ನು ಸನ್ಮಾನಿಸಲಾಯಿತು. ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. 6ರಿಂದ 10ನೇ ತರಗತಿಯಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.