ತರೀಕೆರೆ: ಸ್ವಾತಂತ್ರ್ಯ ದಿನಾಚರಣೆಯು ಭಾರತದ ಭವಿಷ್ಯದ ಬಗ್ಗೆ ಆಶಾವಾದ ಮತ್ತು ಭರವಸೆಯನ್ನು ಇಮ್ಮಡಿಗೊಳಿಸಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುತ್ತದೆ ಎಂದು ಉಪವಿಭಾಗಾಧಿಕಾರಿ ಎನ್.ವಿ.ನಟೇಶ್ ಹೇಳಿದರು.
ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪುರಸಭೆ ಆಶ್ರಯದಲ್ಲಿ ಪಟ್ಟಣದ ಬಯಲು ರಂಗ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಭಾರತೀಯರ ದೇಶಭಕ್ತಿಯು ಉತ್ಸಾಹ ಮತ್ತು ಪ್ರಜಾಪ್ರಭುತ್ವದ ಮೇಲಿನ ನಂಬಿಕೆ ಜಗತ್ತಿಗೆ ಸ್ಫೂರ್ತಿಯಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ಆಶಯಗಳನ್ನು ನನಸಾಗಿಸಲು ಶ್ರಮಿಸೋಣ ಎಂದು ಹೇಳಿದರು.
ಪುರಸಭೆ ಅಧ್ಯಕ್ಷ ವಸಂತಕುಮಾರ್ ಮಾತನಾಡಿ, ಕ್ಷೇತ್ರದ ಎಲ್ಲ ಕಡೆ ಹೆಚ್ಚು ಅಭಿವೃದ್ಧಿ ಕೆಲಸ ನಡೆಯುತ್ತಿವೆ ಎಂದು ಅವರು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ತರೀಕೆರೆ ಪಟ್ಟಣದಲ್ಲಿ ₹8 ಕೋಟಿ ಅನುದಾನದಲ್ಲಿ ಪುರಸಭೆ ಕಟ್ಟಡವನ್ನು, ₹8 ಕೋಟಿ ಅನುದಾನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸಲಾಗುವುದು. ಪಟ್ಟಣದಲ್ಲಿ ಸ್ಟೇಡಿಯಂ ನಿರ್ಮಿಸಲಾಗುವುದು. ₹4.30 ಕೋಟಿ ಅನುದಾನದಲ್ಲಿ ಪಟ್ಟಣದ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಸೋಂಪುರ ದೇವಸ್ಥಾನ ಮತ್ತು ಬಗ್ಗವಳ್ಳಿ ದೇವಸ್ಥಾನ, ಅಕ್ಕನಾಗಲಾಂಬಿಕೆ ಗದ್ದುಗೆ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಸಾಧಕರಿಗೆ ಸನ್ಮಾನ ಮತ್ತು ಬಹುಮಾನ ವಿತರಿಸಲಾಯಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಪುರಸಭೆ ಉಪಾಧ್ಯಕ್ಷೆ ಪಾರ್ವತಮ್ಮ, ತಹಶೀಲ್ದಾರ್ ವಿಶ್ವಜೀತ್ ಮೇಹತಾ, ಡಿವೈಎಸ್‌ಪಿ ಹಾಲಮೂರ್ತಿರಾವ್, ಎಸಿಎಫ್ ಉಮ್ಮರ್ ಬಾದಶಹಾ, ಆರ್‌ಎಫ್‌ಒ ಆಸೀಫ್ ಅಹ್ಮದ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಆರ್.ದೇವೇಂದ್ರಪ್ಪ, ಪುರಸಭೆ ಮುಖ್ಯಾಧಿಕಾರಿ ಟಿ.ಒ.ವಿಜಯಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಪರುಶುರಾಮಪ್ಪ ಎಚ್.ಎ. ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.