ADVERTISEMENT

‘ಶಿಕ್ಷಕರಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಸ್ಪರ್ಧೆ ಸಹಕಾರಿ’

ತಾಲ್ಲೂಕು ಮಟ್ಟದ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2025, 3:14 IST
Last Updated 11 ಡಿಸೆಂಬರ್ 2025, 3:14 IST
ನರಸಿಂಹರಾಜಪುರದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಹ ಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಎಸ್.ಎಚ್. ಪೂರ್ಣೇಶ್, ಶಬನಾ ಅಂಜುಮ್ ಭಾಗವಹಿಸಿದ್ದರು
ನರಸಿಂಹರಾಜಪುರದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಹ ಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಎಸ್.ಎಚ್. ಪೂರ್ಣೇಶ್, ಶಬನಾ ಅಂಜುಮ್ ಭಾಗವಹಿಸಿದ್ದರು   

ನರಸಿಂಹರಾಜಪುರ: ತಾಲ್ಲೂಕಿನ ಶಿಕ್ಷಕರಿಗಾಗಿ ಆಯೋಜಿಸಿರುವ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ, ಶಿಕ್ಷಕರಲ್ಲಿ ಅಡಗಿರುವ ಸುಪ್ತವಾದ ಪ್ರತಿಭೆ ಅನಾವರಣಗೊಳ್ಳಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಂಜುಮ್ ಹೇಳಿದರು.

ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾಂಗಣದಲ್ಲಿ ಬುಧವಾರ ತಾಲ್ಲೂಕು ಮಟ್ಟದ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಶಿಕ್ಷಣ ಇಲಾಖೆಯಿಂದ ಪ್ರತಿವರ್ಷವೂ ಶಿಕ್ಷಕರಿಗಾಗಿ ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದ ಸ್ಪರ್ಧೆ ನಡೆಸಲಾಗುತ್ತಿದೆ. ಪ್ರತಿನಿತ್ಯ ಮಕ್ಕಳಿಗೆ ಪಾಠ ಮಾಡುವ ಶಿಕ್ಷಕರಲ್ಲಿ ಹಲವಾರು ಪ್ರತಿಭೆಗಳಿವೆ. ಇಂತಹ ವೇದಿಕೆಗಳಲ್ಲಿ ಶಿಕ್ಷಕರು ಭಾಗವಹಿಸಬೇಕು. ಸಿಕ್ಕ ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕು’ ಎಂದರು.

ADVERTISEMENT

ಈಗಾಗಲೇ ತಾಲ್ಲೂಕಿನಲ್ಲಿ ಹೊಸದಾಗಿ 2 ಕೆಪಿಎಸ್ ಶಾಲೆ ಪ್ರಾರಂಭವಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದರೂ ಶಾಲೆ ಮುಚ್ಚುವುದಿಲ್ಲವೆಂದು ಶಿಕ್ಷಣ ಸಚಿವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಎಚ್. ಪೂರ್ಣೇಶ್ ಮಾತನಾಡಿ, ‘ಪ್ರತಿನಿತ್ಯ ಮಕ್ಕಳಿಗೆ ಪಾಠ ಹೇಳುವ ಶಿಕ್ಷಕರಿಗೆ ಇಂದು ಸ್ಪರ್ಧೆ ನಡೆಯುತ್ತಿದೆ. ಶಿಕ್ಷಕರು ಎಲ್ಲಾ ಸ್ಪರ್ಧೆಗಳಲ್ಲೂ ಭಾಗವಹಿಸಬೇಕು. ಮುಂದಿನ ತಿಂಗಳು ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಸಮ್ಮೇಳನ ನಡೆಸಲಾಗುವುದು’ ಎಂದರು.

ಶಿಕ್ಷಣ ಸಂಯೋಜಕ ರಂಗಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗಾಗಿ ಚಿತ್ರಕಲೆ, ಆಶುಭಾಷಣ, ಪ್ರಬಂಧ ಸೇರಿದಂತೆ 7 ಸ್ಪರ್ಧೆ ನಡೆಸಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಲಾಗುವುದು. ಇಲ್ಲಿ ವಿಜೇತರಾದವರು ಜಿಲ್ಲಾಮಟ್ಟ ಹಾಗೂ ರಾಜ್ಯ ಮಟ್ಟದಲ್ಲಿ ಸ್ಪರ್ಧಿಸಬಹುದು ಎಂದರು.

ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ್ ಮಾತನಾಡಿ, ಶಿಕ್ಷಕರಲ್ಲೂ ಕಲೆ, ಸಂಗೀತ, ಸಾಹಿತ್ಯದಲ್ಲಿ ಸಾಧನೆ ಮಾಡಿದವರಿದ್ದಾರೆ. ಶಿಕ್ಷಕರಿಗೆ ಮನರಂಜನೆ ಕಡಿಮೆ. ಈ ಸಹಪಠ್ಯ ಚಟುವಟಿಕೆ ಕಾರ್ಯಕ್ರಮಕ್ಕೆ ಕಡಿಮೆ ಅನುದಾನ ಬರುತ್ತದೆ. ಶಿಕ್ಷಕರ ಸಂಘಟನೆಗಳು ಸಹಕಾರ ನೀಡಿದೆ ಎಂದರು.

ಹಿರಿಯ ಪತ್ರಕರ್ತ ಯಡಗೆರೆ ಮಂಜುನಾಥ್ ಮಾತನಾಡಿದರು. ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶನಾಯಕ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ಶ್ರೀಕಾಂತ್, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ. ನಂಜುಂಡಪ್ಪ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಸುಬಾಷ್, ನಿರ್ದೇಶಕರಾದ ರಾಜಾನಾಯಕ್, ನಾಗೇಶ್ ಇದ್ದರು.

ಮಂಜುಶ್ರೀ, ಗಿರೀಶ್, ಸಂಗೀತ, ರಾಮನಾಯ್ಕ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ನಂತರ, ಶಿಕ್ಷಕರಿಗಾಗಿ ವಿವಿಧ ಸ್ಪರ್ಧೆ ನಡೆಯಿತು. ವಿಜೇತರಿಗೆ ಬಹುಮಾನ ನೀಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.