ADVERTISEMENT

ತರೀಕೆರೆ| ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ: ಶಾಸಕ ಶ್ರೀನಿವಾಸ್

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 4:54 IST
Last Updated 15 ಜನವರಿ 2026, 4:54 IST
ಲಕ್ಕವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಜಿ.ಎಚ್. ಶ್ರೀನಿವಾಸ್ ಉದ್ಘಾಟಿಸಿದರು
ಲಕ್ಕವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಜಿ.ಎಚ್. ಶ್ರೀನಿವಾಸ್ ಉದ್ಘಾಟಿಸಿದರು   

ತರೀಕೆರೆ: ಲಕ್ಕವಳ್ಳಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.

ಲಕ್ಕವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ ಮುಖ್ಯ ಬಸ್ ನಿಲ್ದಾಣ, ವಾಣಿಜ್ಯ ಮಳಿಗೆಗಳು, ಡಿಜಿಟಲ್ ಗ್ರಂಥಾಲಯ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಿರ್ಮಿಸಿರುವ ದಾಸೋಹ ಕೊಠಡಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಲಕ್ಕವಳ್ಳಿ ಗ್ರಾಮದ ಮುಖ್ಯ ರಸ್ತೆಯ ವಿಸ್ತರಣೆ ಕಾಮಗಾರಿಯು ಅತ್ಯಾಧುನಿಕ ಮಾದರಿಯ ವಿದ್ಯುತ್ ದೀಪಗಳನ್ನೊಳಗೊಂಡ ಕಂಬ ಅಳವಡಿಕೆಗೆ ಮತ್ತು ರಸ್ತೆಯ ಎರಡು ಕಡೆ ಬಾಕ್ಸ್ ಚರಂಡಿ ನಿರ್ಮಾಣಕ್ಕೆ ಒಟ್ಟು ₹13 ಕೋಟಿ ಅನುದಾನ ಒದಗಿಸಲು ಅನುಮೋದನೆ ನೀಡಲಾಗಿದೆ. ಆದರೆ, ಕೆಲವರು ನ್ಯಾಯಾಲಯಕ್ಕೆ ಪರಿಹಾರ ಕೋರಿ ದಾವೆ ಸಲ್ಲಿಸಿದ್ದಾರೆ. ಇದರಿಂದ ಕಾಮಗಾರಿ ಪೂರ್ಣಗೊಳಿಸಲು ತಾತ್ಕಾಲಿಕವಾಗಿ ಹಿನ್ನಡೆಯಾಗಿದೆ. ರಸ್ತೆಯ ವಿಸ್ತರಣೆಗೆ ಇರುವ ಗೊಂದಲ ನಿವಾರಣೆಗೆ ಗ್ರಾಮ ಪಂಚಾಯಿತಿಯು ಕ್ರಮ ಕೈಗೊಳ್ಳಬೇಕು ಎಂದು ಪಂಚಾಯಿತಿ ಆಡಳಿತಕ್ಕೆ ಸೂಚಿಸಿದರು.

ADVERTISEMENT

ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರೆಹಮಾನ್ ಮಾತನಾಡಿ, ನನ್ನ ಅಧಿಕಾರಾವಧಿಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ, ಹಲವು ಯೋಜನೆಗಳನ್ನು ಶಾಸಕರ ಸಹಕಾರದೊಂದಿಗೆ ಅಭಿವೃದ್ಧಿ ಪಡೆಸಲಾಗುತ್ತಿದೆ. ಕುಡಿಯುವ ನೀರು, ಮುಖ್ಯ ರಸ್ತೆಯ ಅಭಿವೃದ್ಧಿ ಕಾಮಗಾರಿ  ಕೈಗೊಳ್ಳಲಾಗಿದೆ. ಗ್ರಾಮದಲ್ಲಿ ಸ್ಮಶಾನಕ್ಕೆ ಜಾಗ, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಶಾಲಾ ಕೊಠಡಿಗಳ ನಿರ್ಮಾಣ, ನಿವೇಶನ ರಹಿತರಿಗೆ ನಿವೇಶನ ಹಂಚಿಕೆಯಂತಹ ಕಾರ್ಯಕ್ರಮ ಜಾರಿಗೊಳಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಮದ ತಿಮ್ಮಾಭೋವಿ ಕ್ಯಾಂಪ್‌ನಲ್ಲಿ ಸುಮಾರು 400 ವರ್ಷಗಳ ಹಳೆಯ ಶ್ರೀವೆಂಕಟರಮಣ ದೇವಾಲಯವು ಶಿಥಿಲಗೊಂಡ ಕಾರಣ ಪುನರ್ ನಿರ್ಮಾಣಕ್ಕೆ ಸೂಕ್ತ ಅನುದಾನ ಮಂಜೂರು ಮಾಡಿಸಲು ಶಾಸಕರಿಗೆ ಪ್ರಸ್ತಾವನೆ ಸಲ್ಲಿಸಲಾಯಿತು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಭವಾನಿ ಗಣೇಶ್, ಸದಸ್ಯರಾದ ಶಿವಕಿರಣ್, ಬಾಲರಾಜ್, ಫಣಿರಾಜ್ ಜೈನ್, ಕಾಡಾ ಸದಸ್ಯ ರಾಜಶೇಖರ್, ಗ್ರಾ.ಪಂ. ಸಿಬ್ಬಂದಿ ಹಾಗೂ ಕಾಂಗ್ರೆಸ್ ಮುಖಂಡರಾದ ಪವನ್ ಕಿಶೋರ್, ಹರೀಶ್, ಹನೀಫ್, ಕಾರ್ತಿಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.