ADVERTISEMENT

ಚಿಕ್ಕಮಗಳೂರು–ಮೈಸೂರು ನಡುವೆ ವೋಲ್ವೊ ಬಸ್: ರಾಮಲಿಂಗಾರೆಡ್ಡಿ

ನೂತನ ಬಸ್ ನಿಲ್ದಾಣಕ್ಕೆ ಸಚಿವ ರಾಮಲಿಂಗಾರೆಡ್ಡಿ ಶಂಕುಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2025, 5:32 IST
Last Updated 19 ನವೆಂಬರ್ 2025, 5:32 IST
ಕೆಎಸ್‌ಆರ್‌ಟಿಸಿ ಹೊಸ ಬಸ್ ನಿಲ್ದಾಣಕ್ಕೆ ಸಚಿವ ರಾಮಲಿಂಗಾರೆಡ್ಡಿ ಶಂಕುಸ್ಥಾಪನೆ ನೆರವೇರಿಸಿದರು
ಕೆಎಸ್‌ಆರ್‌ಟಿಸಿ ಹೊಸ ಬಸ್ ನಿಲ್ದಾಣಕ್ಕೆ ಸಚಿವ ರಾಮಲಿಂಗಾರೆಡ್ಡಿ ಶಂಕುಸ್ಥಾಪನೆ ನೆರವೇರಿಸಿದರು   

ಚಿಕ್ಕಮಗಳೂರು: ಮೈಸೂರು– ಚಿಕ್ಕಮಗಳೂರು ನಡುವೆ ಎರಡು ವೋಲ್ವೊ ಬಸ್‌ಗಳ ಕಾರ್ಯಾಚರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ನಗರದ ಗ್ರಾಮಾಂತರ ಬಸ್ ನಿಲ್ದಾಣದ ಆವರಣದಲ್ಲಿ ನೂತನ ಬಸ್ ನಿಲ್ದಾಣಕ್ಕೆ ಶಂಕುಸ್ಥಾಪನೆ ಹಾಗೂ ವಸತಿ ಗೃಹಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಎರಡು ನಗರಗಳ ನಡುವೆ ವೋಲ್ವೊ ಬಸ್ ಸಂಚಾರ ಆರಂಭಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಮನವಿ ಮಾಡಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ 2 ಸಾವಿರ ಹೊಸ ಬಸ್‌ಗಳನ್ನು ಒದಗಿಸಲಾಗಿದ್ದು, ಅವುಗಳಲ್ಲಿ ಕೆಎಸ್‌ಆರ್‌ಟಿಸಿಗೆ 900 ಬಸ್‌ಗಳು ಬರಲಿವೆ. ಎರಡು ಮೂರು ತಿಂಗಳಲ್ಲಿ ಈ ಬೇಡಿಕೆ ಈಡೇರಲಿದೆ ಎಂದರು.

ADVERTISEMENT

ನಗರದಲ್ಲಿ ನಿರ್ಮಾಣವಾಗಲಿರುವ ಹೈಟೆಕ್ ನಿಲ್ದಾಣ ಮತ್ತು ಈಗಿರುವ ನಿಲ್ದಾಣದ ನಡುವೆ ಸಾರ್ವಜನಿಕ ರಸ್ತೆಯೊಂದಿದ್ದು, ಪ್ರಯಾಣಿಕರ ಸಂಚಾರಕ್ಕೆ ಸ್ಕೈವಾಕ್ ನಿರ್ಮಾಣಕ್ಕೂ ಶಾಸಕರು ಮನವಿ ಮಾಡಿದ್ದಾರೆ. ಸ್ಕೈವಾಕ್ ನಿರ್ಮಾಣಕ್ಕೆ ಕೂಡಲೇ ಅನುಮೋದನೆ ನೀಡಲಾಗುವುದು ಎಂದು ತಿಳಿಸಿದರು.

‘ಒಂದೂವರೆ ಎಕರೆ ಪ್ರದೇಶದಲ್ಲಿ ಸುಮಾರು ₹19.87 ಕೋಟಿ ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣವಾಗುತ್ತಿದೆ. 18 ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ನಿಲ್ದಾಣ ನಿರ್ಮಾಣಕ್ಕೆ ಶಾಸಕ ಎಚ್.ಡಿ.ತಮ್ಮಯ್ಯ ಅವರ ಶ್ರಮ ಕಾರಣ’ ಎಂದರು.

ಶಕ್ತಿ ಯೋಜನೆಯಡಿ ನವೆಂಬರ್ 17ರವರೆಗೆ 600 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಇಷ್ಟು ಕಡಿಮೆ ಅವಧಿಯಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಮಹಿಳೆಯರು ಪ್ರಯಾಣ ಮಾಡಿರುವ ಉದಾಹರಣೆ ಇರಲಿಲ್ಲ. ಈ ವೆಚ್ಚ ಭರಿಸಲು ಸರ್ಕಾರದಿಂದ ₹15,422 ಕೋಟಿ ವ್ಯಯಿಸಲಾಗಿದ ಎಂದು ಹೇಳಿದರು.

ಎರಡೂವರೆ ವರ್ಷಗಳ ಅವಧಿಯಲ್ಲಿ ಸುಮಾರು 5800 ಬಸ್‌ಗಳನ್ನು ಖರೀದಿಸಲಾಗಿದೆ. ಹಿಂದೆ ನಾಲ್ಕು ವರ್ಷಗಳ ಅವಧಿಯಲ್ಲಿ ಬಸ್ ಖರೀದಿಯೇ ಆಗಿರಲಿಲ್ಲ. ಈ ನಡುವೆ ನಿಗಮಕ್ಕೆ 9 ಸಾವಿರ ಸಿಬ್ಬಂದಿ ನೇಮಕ ಮಾಡಲಾಗಿದೆ. ಒಂದು ಸಾವಿರ ನೌಕರರನ್ನು ಅನುಕಂಪದ ಆಧಾರದಲ್ಲಿ ನೇಮಕ ಮಾಡಲಾಗಿದೆ ಎಂದು ವಿವರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ‘ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಮರುಜನ್ಮ ನೀಡಿದ ಜಿಲ್ಲೆ ಇದು. ಜೊತೆಗೆ ನಾನು ಕೂಡ ಈ ಜಿಲ್ಲೆಯವನೇ ಆಗಿದ್ದು, ಇನ್ನಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಬದ್ಧನಾಗಿದ್ದೇನೆ’ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ‘ನಗರಕ್ಕೆ ಹೈಟೆಕ್ ಬಸ್ ನಿಲ್ದಾಣದ ಅವಶ್ಯಕತೆ ಇದೆ ಎಂಬುದು ಚಿಕ್ಕಮಗಳೂರು ಜನರ ಆಶಯವಾಗಿತ್ತು. ರಾಜ್ಯ ಸರ್ಕಾರದ ಆಸಕ್ತಿಯಿಂದಾಗಿ ₹19.87 ಕೋಟಿ ವೆಚ್ಚದ ನೂತನ ನಿಲ್ದಾಣ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರಕಿದೆ’ ಎಂದು ತಿಳಿಸಿದರು.  

‘ರಾಜ್ಯ ಸರ್ಕಾರ ಜಾರಿಗೊಳಿಸಿರುವ ವಾರ್ಷಿಕ ₹57 ಸಾವಿರ ಕೋಟಿ ಮೊತ್ತದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಫಲವಾಗಿ ರಾಜ್ಯದ ಸಾರ್ವಜನಿಕರ ಬದುಕಿನ ತಲಾದಾಯ ಹೆಚ್ಚಾಗಿದೆ. ಇಡೀ ದೇಶದಲ್ಲೇ ಕರ್ನಾಟಕ ಮೊದಲನೇ ಸ್ಥಾನಕ್ಕೆ ಬಂದಿದೆ’ ಎಂದರು.

ನಗರದಲ್ಲಿ ಗುಂಡಿ ಬಿದ್ದಿರುವ ರಸ್ತೆಗಳ ಅಭಿವೃದ್ಧಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಡಿ.1ರಿಂದ ಕಾಮಗಾರಿ ಆರಂಭವಾಗಲಿದ್ದು, ಮುಂದಿನ ಮಾರ್ಚ್ 31ರೊಳಗೆ ₹22.5 ಕೋಟಿ ವೆಚ್ಚದಲ್ಲಿ ನಗರದ ಎಲ್ಲಾ ಪ್ರಮುಖ ರಸ್ತೆಗಳು ಅಭಿವೃದ್ಧಿಯಾಗಲಿವೆ. ₹35 ಕೋಟಿ ವೆಚ್ಚದಲ್ಲಿ ಗ್ರಾಮಾಂತರ ಭಾಗದ ಎಲ್ಲಾ ರಸ್ತೆಗಳನ್ನೂ ದುರಸ್ತಿಪಡಿಸಲಾಗುವುದು ಎಂದು ತಿಳಿಸಿದರು.

ಶಾಸಕ ಟಿ.ಡಿ.ರಾಜೇಗೌಡ, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ ಬಿ.ಎಚ್.ಹರೀಶ್, ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮೊಹಮ್ಮದ್ ನಯಾಜ್, ಮುಖಂಡರಾದ ಗಾಯತ್ರಿ ಶಾಂತೇಗೌಡ, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿಲ್ಲಾ ಪಂಚಾಯಿಯಿ ಸಿಇಒ ಎಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ ಅಮಟೆ ಉಪಸ್ಥಿತರಿದ್ದರು. 

ಇತರೆ ನಿಲ್ದಾಣಗಳ ಅಭಿವೃದ್ಧಿಗೆ ಕ್ರಮ

ಈಗಾಗಲೇ ₹9.15 ಕೋಟಿ ವೆಚ್ಚದಲ್ಲಿ ತರೀಕೆರೆ ಬಸ್ ನಿಲ್ದಾಣ ₹9 ಕೋಟಿ ವೆಚ್ಚದಲ್ಲಿ ಕಡೂರು ಬಸ್ ನಿಲ್ದಾಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು. ಶೃಂಗೇರಿಯಲ್ಲಿ ₹8.82 ಲಕ್ಷ ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಿಸಲು ಅನುದಾನ ಒದಗಿಸಲಾಗಿದೆ. ಈಗಾಗಲೇ ಕಾಮಗಾರಿ ಆರಂಭವಾಗಿದೆ. ಅಲ್ಲದೆ ಬೀರೂರಿನ ಬಸ್ ನಿಲ್ದಾಣವನ್ನು ₹2.50 ಕೋಟಿ ವೆಚ್ಚದ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಲಾಗಿದೆ. ತರೀಕೆರೆಯಲ್ಲಿ ಬಸ್ ಘಟಕ ನಿರ್ಮಾಣಕ್ಕೆ ₹9 ಕೋಟಿ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.