
ನರಸಿಂಹರಾಜಪುರ: ಅಂಗವಿಕಲ ಮಕ್ಕಳಿಗೆ ಅನುಕಂಪ ಬೇಡ ಅವಕಾಶ ನೀಡಬೇಕು ಎಂದು ಉಪತಹಶೀಲ್ದಾರ್ ವೇಣುಗೋಪಾಲ್ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಪಟ್ಟಣದ ಬಸ್ತಿಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ವಿಶ್ವ ಅಂಗವಿಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತಾಲ್ಲೂಕು ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಎ.ಇ.ಅಶೋಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಅಂಗವಿಕಲ ಮಕ್ಕಳಿಗೆ ವಿಶೇಷ ಸಾಮರ್ಥ್ಯ ಇರುತ್ತದೆ. ಇಂತಹ ಮಕ್ಕಳಿಗೆ ಎಲ್ಲ ಕ್ಷೇತ್ರಗಳಲ್ಲೂ ಅವಕಾಶ ನೀಡಬೇಕು. ಅವರಿಗೂ ಭಾವನೆಗಳಿದ್ದು ಅದನ್ನು ಅರ್ಥ ಮಾಡಿಕೊಂಡು ಶಿಕ್ಷಣ ನೀಡಬೇಕು ಎಂದರು.
ನೋಡಲ್ ಅಧಿಕಾರಿ ಬಿಐಈಆರ್ ಟಿ ತಿಮ್ಮೇಶ್ ಮಾತನಾಡಿ, ಡಿ.10ರಂದು ತಾಲ್ಲೂಕು ಮಟ್ಟದ ಅಂಗವಿಕಲ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ ಆಯೋಜಿಸಲಾಗಿದೆ. ಎಲ್ಲ ಮಕ್ಕಳು ಪೋಷಕರೊಂದಿಗೆ ಬಂದು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಸಿಆರ್‌ಪಿ ದೇವರಾಜ ಮಾತನಾಡಿ, ಅಂಗವಿಕಲ ಮಕ್ಕಳಿಗೆ ವಿಶೇಷ ಗ್ರಹಿಕೆ ಶಕ್ತಿ, ಗುರುತಿಸುವ ಕೌಶಲ, ಜ್ಞಾನ ಗುಣಗಳಿರುತ್ತವೆ. ಹೇಳಿದ ಎಲ್ಲ ಕೆಲಸಗಳನ್ನು ಸಮರ್ಪಕವಾಗಿ ಮಾಡುವ ಸಾಮರ್ಥ್ಯವಿರುತ್ತದೆ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಿಕ್ಷಣ ನೀಡಿದರೆ ಉತ್ತಮ ಭವಿಷ್ಯ ರೂಪಿಸಬಹುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಅಧಿಕಾರಿ ಸೇವ್ಯಾ ನಾಯ್ಕ ಮಾತನಾಡಿ, ಶಿಕ್ಷಣ ಇಲಾಖೆಯಿಂದ ಅಂಗವಿಕಲ ಮಕ್ಕಳಿಗೆ ಅನೇಕ ಸೌಲಭ್ಯಗಳನ್ನು ನೀಡಿದ್ದು ಪೋಷಕರು ಮತ್ತು ಮಕ್ಕಳು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.