ರಂಭಾಪುರಿ ಪೀಠ(ಬಾಳೆಹೊನ್ನೂರು): ರಂಭಾಪುರಿ ಪೀಠದಲ್ಲಿ ನ. 27ರಂದು ನಡೆಯುವ ಲಿಂ. ಶಿವಾನಂದ ರಾಜೇಂದ್ರ ಶಿವಾಚಾರ್ಯ ಭಗವತ್ಪಾದರ ಪೀಠಾರೋಹಣದ ಶತಮಾನೋತ್ಸವ ಸಮಾರಂಭದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮೈಸೂರು ರಾಜ ಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪಾಲ್ಗೊಳ್ಳಲಿದ್ದಾರೆ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ತಿಳಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಪೀಠಕ್ಕೂ ಮೈಸೂರು ಮಹಾಸಂಸ್ಥಾನಕ್ಕೂ ಇರುವ ಸಂಬಂಧವನ್ನು ಸ್ಮರಿಸಿಕೊಂಡರು. 1885ರಲ್ಲಿ ರಂಭಾಪುರಿ ಪೀಠದ ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರ ಕಾಲದಲ್ಲಿ ಚಾಮರಾಜ ಒಡೆಯರ್, 1931ರ ಶಿವಾನಂದ ಸ್ವಾಮೀಜಿ ಕಾಲದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್, 1941ರಲ್ಲಿ ಜಯಚಾಮರಾಜ ಒಡೆಯರ್ ಬಂದಿದ್ದರು. ಇದೀಗ ಮೈಸೂರು ಸಂಸ್ಥಾನದ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ನ.27ರಂದು ನಡೆಯುವ ಕಾರ್ಯಕ್ರಮಕ್ಕೆ ಬರಲಿದ್ದಾರೆ’ ಎಂದರು.
ರಂಭಾಪುರಿ ಪೀಠದ ಪ್ರತಿನಿಧಿಗಳಾಗಿ ಬೆಳಗಾವಿ ಜಿಲ್ಲೆ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿ, ಬೇಬಿ ಚಂದ್ರವನಮಠದ ತ್ರಿನೇತ್ರ ಮಹಾಂತ ಸ್ವಾಮಿ, ಕೊಣ್ಣೂರು ಮರಡಿ ಮಠದ ಪವಾಡೇಶ್ವರ ಶಿವಾಚಾರ್ಯ ಸ್ವಾಮಿ, ಸಿದ್ದರಬೆಟ್ಟ ಕ್ಷೇತ್ರದ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಯದುವೀರ್ ಅವರನ್ನು ಭೇಟಿಯಾಗಿ ಸಮಾರಂಭಕ್ಕೆ ಆಹ್ವಾನಿಸಿದ್ದರು. ರಂಭಾಪುರಿ, ಉಜ್ಜಯಿನಿ, ಕೇದಾರ, ಶ್ರೀಶೈಲ ಮತ್ತು ಕಾಶಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ನಡೆಯಲಿರುವ ಶತಮಾನೋತ್ಸವ ಸಮಾರಂಭವನ್ನು ಅವರು ಉದ್ಘಾಟಿಸಲಿದ್ದು, ಕೇಂದ್ರದ ಮತ್ತು ರಾಜ್ಯದ ಸಚಿವರು, ಶಾಸಕರು ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.