ADVERTISEMENT

ಕಾರ್ಮಿಕ ಕಾನೂನು ಅನುಷ್ಠಾನಕ್ಕೆ ಆಗ್ರಹ: ಸಿಐಟಿಯು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2013, 10:58 IST
Last Updated 15 ಜೂನ್ 2013, 10:58 IST

ಹಿರಿಯೂರು: ಸಂಕಷ್ಟದಲ್ಲಿರುವ ಕಾರ್ಮಿಕರ ಹಿತ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಕ್ಷಣವೇ ಕಾರ್ಮಿಕ ಕಾನೂನುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಡಿ.ಎಂ.ಮಲಿಯಪ್ಪ ಒತ್ತಾಯಿಸಿದರು.

ನಗರದಲ್ಲಿ ಶುಕ್ರವಾರ ಸಿಐಟಿಯು ನೇತೃತ್ವದಲ್ಲಿ ಗ್ರಾಮ ಪಂಚಾಯ್ತಿ ನೌಕರರ ಸಂಘ, ಹಮಾಲರ ಸಂಘ, ಬಿಸಿಯೂಟ ನೌಕರರ ಸಂಘ, ಗಣಕಯಂತ್ರ ನೌಕರರ ಸಂಘದವರು ವಿವಿಧ ಬೇಡಿಕೆ ಈಡೇರಿಸುವಂತೆ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ಕಾರ್ಮಿಕರು ಮತ್ತು ದುಡಿಯುವ ವರ್ಗದವರನ್ನು ಸಂಕಷ್ಟಕ್ಕೆ ಗುರಿಮಾಡುವಂತಹ ನೀತಿಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸುತ್ತಿವೆ. ಉದಾರೀಕರಣ, ಖಾಸಗೀಕರಣ, ಜಾಗತೀಕರಣದ ಪ್ರಭಾವದಿಂದ ದುಡಿಯುವ ವರ್ಗ ಬೀದಿಗೆ ಬಿದ್ದಿದ್ದು, ವಿದೇಶಿ ಬಂಡವಾಳಗಾರರು ದೇಶವನ್ನು ದೋಚುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಅವರು ಆರೋಪಿಸಿದರು.

ಸರ್ಕಾರದ ವಿವಿಧ ಜನಪ್ರಿಯ ಯೋಜನೆಗಳಾಗಿರುವ ಅಕ್ಷರ ದಾಸೋಹ, ಆಶಾ, ಅಂಗನವಾಡಿಗಳಲ್ಲಿ ಲಕ್ಷಾಂತರ ಬಡವರು ತಮ್ಮ ಹುದ್ದೆಯನ್ನು ಕಾಯಂ ಮಾಡಬಹುದು ಎನ್ನುವ ನಿರೀಕ್ಷೆಯಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿದ್ದಾರೆ. 

ಗ್ರಾಮ ಪಂಚಾಯ್ತಿ ನೌಕರರನ್ನು, ಹಮಾಲರನ್ನು ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಇವರಿಗೆ ಗೌರವದ ಬದುಕು ನಡೆಸಲು ಸರ್ಕಾರ ವ್ಯವಸ್ಥೆ ಮಾಡಬೇಕು ಎಂದು ಮಲಿಯಪ್ಪ ಒತ್ತಾಯಿಸಿದರು.

ಆಗ್ರಹ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಂ.ವಿಜಯಮ್ಮ, ರಾಮಣ್ಣ, ಎಂ.ಬಾಲಮ್ಮ  ಪಾಲ್ಗೊಂಡಿದ್ದರು. ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರರಿಗೆ ಸಲ್ಲಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.